ಮೈಸೂರು: ಪಿರಿಯಾಪಟ್ಟಣ ತಾಲೂಕಿನಲ್ಲಿ ಯುವತಿಯ ಕೊಲೆ ಮಾಡಿ ಬೆಂಕಿ ಹಚ್ಚಿರುವ ಘಟನೆಯನ್ನು ಖಂಡಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಯಿತು.
ಯುವತಿ ಶವವು ಉರಿಯುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇಂತಹ ಘಟನೆಗಳು ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ. ಅಭದ್ರತೆಯ ವಾತಾವರಣ ನಿರ್ಮಾಣವಾಗಿದೆ. ಈ ಪ್ರಕರಣದ ಕುರಿತು ತ್ವರಿತವಾಗಿ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷಿಸಬೇಕು. ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಮುಖಂಡರಾದ ಸಂಧ್ಯಾ, ಎಂ.ಉಮಾದೇವಿ, ಜಿ.ಎಸ್.ಸೀಮಾ, ಹರೀಶ್, ಚಂದ್ರಕಲಾ, ಆಸೀಯಾ, ಅಭಿಲಾಷ್, ಟಿ.ಆರ್.ಸುನಿಲ್ ಇನ್ನಿತರರು ಪ್ರತಿಭಟನೆಯಲ್ಲಿದ್ದರು.