ವಿಜಯವಾಣಿ ಸುದ್ದಿಜಾಲ ಗುಡಿಬಂಡೆ
ಕೇಂದ್ರ ಸರ್ಕಾರ ದಿನೇದಿನೆ ರೈತರು ಬಳಸುವ ರಸಗೊಬ್ಬರಗಳ ಬೆಲೆ ಏರಿಕೆ ಮಾಡುತ್ತಿರುವುದರಿಂದ ರೈತರಿಗೆ ತೊಂದರೆ ಆಗುತ್ತಿದೆ. ಈ ಕೂಡಲೇ ರಸಗೊಬ್ಬರದ ಬೆಲೆ ಕಡಿಮೆ ಮಾಡಬೇಕೆಂದು ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಬಾಲೇನಹಳ್ಳಿ ರಮೇಶ್ ಒತ್ತಾಯಿಸಿದರು.
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯಿಂದ ಮಂಗಳವಾರ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಕೇಶವರೆಡ್ಡಿ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಏಕಾಏಕಿ ಅವೈಜ್ಞಾನಿಕವಾಗಿ ರಸಗೊಬ್ಬರಗಳ ಬೆಲೆ ಏರಿಕೆ ಮಾಡಿದೆ. ಈಗಾಗಲೇ ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೇ ಸಂಕಷ್ಟದಲ್ಲಿದ್ದಾರೆ. ಇಂತಹ ಸಮಯದಲ್ಲಿ ರಸಗೊಬ್ಬರಗಳ ಬೆಲೆ ಏರಿಕೆ ಮಾಡುವುದು ಎಷ್ಟು ಸರಿ?, ಕೂಡಲೇ ರಸಗೊಬ್ಬರದ ಬೆಲೆ ಕಡಿಮೆ ಮಾಡುವಂತೆ ಒತ್ತಾಯಿಸಿದರು.
ಕೆಡಿಪಿ ಸದಸ್ಯ ಲಕ್ಷ್ಮೀನಾರಾಯಣ ಮಾತನಾಡಿ, ರೈತರಿಗೆ ಅನುಕೂಲವಾಗುವ ಯೋಜನೆಗಳನ್ನು ಜಾರಿಗೆ ತರುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಪ್ರಧಾನಿ ಕೇವಲ ಅದಾನಿ ಮತ್ತು ಅಂಬಾನಿ ಜತೆ ಇದ್ದಾರೆ ಹೊರತು ರೈತರ ಪರ ಇಲ್ಲ. ಕೇವಲ ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ರೈತರ ಕಷ್ಟಗಳೇನು ಎಂದು ತಿಳಿದುಕೊಳ್ಳುವ ಗೋಜಿಗೆ ಹೋಗದೆ ರಸಗೊಬ್ಬರಗಳ ಬೆಲೆ ಮಾತ್ರ ಏರಿಕೆ ಮಾಡುತ್ತಲೇ ಇದೆ. ಕೂಡಲೇ ಬೆಲೆ ಕಡಿಮೆ ಮಾಡಬೇಕು. ಇಲ್ಲವಾದಲ್ಲಿ ಯುವ ಕಾಂಗ್ರೆಸ್ ಬೀದಿಗಿಳಿದು ತೀವ್ರ ಹೋರಾಟ ಮಾಡಲು ಸಿದ್ಧವಿದೆ. ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ, ಕೇಂದ್ರ ಸರ್ಕಾರ ಹೆಚ್ಚಳ ಮಾಡಿರುವ ರಸಗೊಬ್ಬರಗಳ ಬೆಲೆ ಇಳಿಕೆ ಮಾಡಿ ಸೂಕ್ತ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.
ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಅಂಬರೀಶ್, ಕೋಚಿಮುಲ್ ಮಾಜಿ ನಿರ್ದೇಶಕ ಆದಿನಾರಾಯಣರೆಡ್ಡಿ, ಮುಖಂಡರಾದ ದಪ್ಪರ್ತಿ ನಂಜುಂಡಪ್ಪ, ನಾರಾಯಣಸ್ವಾಮಿ, ನಾಗರಾಜು, ಗಂಗಾಧರಪ್ಪ, ಮದ್ದರೆಡ್ಡಿ ಇದ್ದರು.