ಮದ್ದೂರು: ಗ್ರಾಮಾಂತರ ಪ್ರದೇಶಗಳ ರಸ್ತೆ ಅಭಿವೃದ್ಧಿ ಹಾಗೂ ಮೂಲ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ತಾಲೂಕಿನ ಚನ್ನಸಂದ್ರ ಗ್ರಾಮದಲ್ಲಿ ಶನಿವಾರ ಸಿಸಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ನಾನು ಶಾಸಕನಾದ ಎರಡೇ ವರ್ಷದಲ್ಲಿ ಸರ್ಕಾರದಿಂದ 1400 ಕೋಟಿ ರೂ.ಗೂ ಅಧಿಕ ಅನುದಾನ ತಂದು ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡುವ ಜತೆಗೆ ಗ್ರಾಮಾಂತರ ಪ್ರದೇಶಗಳಲ್ಲಿ ರಸ್ತೆ, ಚರಂಡಿ ನಿರ್ಮಾಣ ಸೇರಿದಂತೆ ಮೂಲಕ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದರು.
ಗ್ರಾಮಾಂತರ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡುವುದು, ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳುವುದು ಹಾಗೂ ಗ್ರಾಮಸ್ಥರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.
ಮುಂದಿನ ದಿನಗಳಲ್ಲಿ ಸರ್ಕಾರದಿಂದ ಮತ್ತಷ್ಟು ವಿಶೇಷ ಅನುದಾನ ತಂದು ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ದೇಶ ಅಭಿವೃದ್ಧಿ ಹೊಂದಿದಂತೆ ಎಂದು ತಿಳಿಸಿದರು.
ಮುಖಂಡರಾದ ಚಿನ್ನವಿರೇಗೌಡ, ಸತೀಶ್, ಸುರೇಶ್, ಸಿದ್ದೇಗೌಡ, ಮಹೇಶ್, ಗೊರವನಹಳ್ಳಿ ರಾಘವ, ಪ್ರತಾಪ್, ಸ್ವರೂಪ್ ಇದ್ದರು.