ಬೇಲೂರು: ತಾಲೂಕಿನ ಬಹುತೇಕ ರಸ್ತೆಗಳಲ್ಲಿ ಗುಂಡಿ ಬೀಳಲು ಕಳಪೆ ಕಾಮಗಾರಿ ಕಾರಣ ಎಂದು ಶಾಸಕ ಎಚ್.ಕೆ.ಸುರೇಶ್ ಕಿಡಿಕಾರಿದರು.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಕಳಪೆ ಕಾಮಗಾರಿಯಿಂದ ಹೆಚ್ಚು ಗುಂಡಿಗಳಿರುವ ಕಡೆ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಆದ್ದರಿಂದ ಲೋಕೋಪಯೋಗಿ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳ ಪರಿಶೀಲಿಸಿ ವರದಿ ನೀಡಬೇಕು. ಇಲ್ಲದಿದ್ದಲ್ಲಿ ಇದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುವ ಕಾಮಗಾರಿಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಣತಿಯಂತೆ ನಡೆಸದೆ ಗುಣಮಟ್ಟದ ಕಾಮಗಾರಿ ನಡೆಯಬೇಕಿದೆ. ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ತಮಗಿಷ್ಟ ಬಂದಂತೆ ಕಾಮಗಾರಿಗಳನ್ನು ಮಾಡಿಸುತ್ತಿದ್ದಾರೆ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಇಲ್ಲಿ ಎಲ್ಲಾದರೂ ಕಳಪೆ ಕೆಲಸ ಕಂಡರೆ ತನಿಖೆ ನಡೆಸಲಾಗುವುದು ಎಂದು ತಾಕೀತು ಮಾಡಿದರು.
ತಾಲೂಕಿನ ಮದಘಟ್ಟ ಗ್ರಾಮದ ಸರ್ಕಾರಿ ಶಾಲೆ ಶಿಥಿಲವಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿ ಈ ಬಗ್ಗೆ ಗಮನ ನೀಡಬೇಕು. ಇಂತಹ ಸಣ್ಣಪುಟ್ಟ ಸಮಸ್ಯೆಗಳಿಗೆ ಶಾಸಕರೇ ಖುದ್ದು ಭೇಟಿ ನೀಡಲು ಸಾಧ್ಯವಿಲ್ಲ. ಕೆಲ ಗ್ರಾಮಗಳಲ್ಲಿ ಸರ್ಕಾರಿ ಶಾಲೆಗಳ ಉನ್ನತೀಕರಣ ನಡೆಯುತ್ತಿದೆ. ಅಲ್ಲಿಯೂ ಕಳಪೆ ಕಾಮಗಾರಿಯಾಗದಂತೆ ಶಿಕ್ಷಣಾಧಿಕಾರಿ ಗಮನ ನೀಡಬೇಕು ಎಂದು ತಿಳಿಸಿದರು.
ಎತ್ತಿನಹೊಳೆ ಯೋಜನೆಯ ಕಾಮಗಾರಿಗಳು ನಡೆಯುತ್ತಿರುವ ಭಾಗದಲ್ಲಿನ ಬಹುತೇಕ ರಸ್ತೆಗಳು ಗುಂಡಿ ಬಿದ್ದು ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿದೆ. ಕೆಲ ಪ್ರದೇಶ ಇನ್ನೂ ಭೂ ಸ್ವಾಧೀನವಾಗಿಲ್ಲ, ಅಧಿಕಾರಿಗಳು ಮೊದಲು ರೈತರಿಗೆ ಸೂಕ್ತ ಪರಿಹಾರ ನೀಡಲು ಮುಂದಾಗಬೇಕು ಎಂದು ಹೇಳಿದರು.
ಮಳೆಗಾಲದಲ್ಲಿ ಸರಿಯಾಗಿ ಮಳೆಯಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಮತ್ತು ಸೆಸ್ಕ್ ಅಧಿಕಾರಿಗಳು ಸಮನ್ವಯ ಸಾಧಿಸಿ ಕುಡಿಯುವ ನೀರಿಗೆ ಯಾವುದೇ ಅಭಾವವಾಗದಂತೆ ಗಮನ ಹರಿಸಬೇಕಿದೆ. ಒಂದು ವೇಳೆ ಕುಡಿಯುವ ನೀರಿಗೆ ತೊಂದರೆ ಕಂಡುಬಂದರೆ ಖಾಸಗಿಯವರಿಂದ ನೀರಿನ ಟ್ಯಾಂಕ್ ಮೂಲಕ ಸಾರ್ವಜನಿಕರಿಗೆ ಕುಡಿಯುವ ನೀರು ಕೊಡುವುದಕ್ಕೆ ಕ್ರಮ ಕೈಗೊಳ್ಳಬೇಕು. ಆನಂತರವೇನಾದರೂ ಕುಡಿಯುವ ನೀರಿನ ಬಗ್ಗೆ ಸಮಸ್ಯೆ ಕಂಡುಬಂದರೆ ಅಧಿಕಾರಿಗಳ ವಿರುದ್ಧವೇ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೆ ಜಲಜೀವನ್ ಮಿಷನ್ ಕುಡಿಯುವ ನೀರಿನ ಯೋಜನೆಯಲ್ಲೂ ಗುಣಮಟ್ಟದ ಕಾಮಗಾರಿ ನಡೆಯುವಂತೆ ನೋಡಿಕೊಳ್ಳಬೇಕು. ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಶಿಷ್ಟಾಚಾರದಂತೆ ನಡೆದುಕೊಳ್ಳಬೇಕಿದೆ ಎಂದರು.
ತಹಸೀಲ್ದಾರ್ ಎಂ.ಮಮತಾ, ತಾಲೂಕು ಪಂಚಾಯಿತಿ ಪ್ರಭಾರ ಇಒ ದಯಾನಂದ್, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.