ಮಳವಳ್ಳಿ: ತಾಲೂಕಿನ ರಾಗಿಬೊಮ್ಮನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಹಾಗೂ ಶಾಲಾ ವಾರ್ಷಿಕೋತ್ಸವ ಸಮಾರಂಭ ಮಂಗಳವಾರ ಸಂಭ್ರಮದಿಂದ ಜರುಗಿತು.
ಗ್ರಾಮದ ಮುಖಂಡರು, ಶಾಲೆಯಲ್ಲಿ ಕಲಿತ ಹಿರಿಯ ವಿದ್ಯಾರ್ಥಿಗಳು, ಸರ್ಕಾರಿ ಶಾಲೆಗಳ ಉಳಿವಿಗೆ ಬೆಂಬಲಿಸುವ ಶೈಕ್ಷಣಿಕ ದಾನಿಗಳ ಸಹಕಾರದೊಂದಿಗೆ ಸಮಾರಂಭವನ್ನು ವಿಜೃಂಭಣೆಯಿಂದ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಂಗವಾಗಿ ಗ್ರಾಮದ ಪ್ರಮುಖ ರಸ್ತೆಗಳು, ಶಾಲೆಯ ಕಟ್ಟಡವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಗ್ರಾಮಸ್ಥರು ಊರ ಹಬ್ಬದಂತೆ ಕುಟುಂಬ ಸಮೇತ ಆಗಮಿಸಿ ಸಾಂಸ್ಕೃತಿಕ ಸಂಭ್ರಮವನ್ನು ಕಣ್ತುಂಬಿಕೊಂಡರು. ಶಾಲಾ ಅಭಿವೃದ್ಧಿ ಸಮಿತಿಯಿಂದ ಊಟದ ವ್ಯವಸ್ಥೆ ಮಾಡಲಾಗಿತ್ತು. ಶಾಸಕ ಪಿ.ಎಂ.ನರೇಂದ್ರಸ್ವಾಮಿ ಭಾಗವಹಿಸಿದ್ದರು.
ಸಂಜೆ ಪ್ರಾರಂಭವಾದ ವೇದಿಕೆ ಕಾರ್ಯಕ್ರಮವನ್ನು ಶಾಲೆಯ ಹಿರಿಯ ವಿದ್ಯಾರ್ಥಿ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಆರ್.ಜಿ.ಮಹದೇವ ಸ್ವಾಮಿ ಉದ್ಘಾಟಿಸಿ ಮಾತನಾಡಿ, ಇಂದು ನಮ್ಮ ಪೀಳಿಗೆಯ ಬಹಳಷ್ಟು ಜನರು ಉನ್ನತ ಸ್ಥಾನಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅದಕ್ಕೆ ಪ್ರಮುಖ ಕಾರಣ ಸರ್ಕಾರಿ ಶಾಲೆಗಳಲ್ಲಿ ನಮಗೆ ದೊರೆತ ಮೌಲ್ಯಯುತ ಶಿಕ್ಷಣ. ಪ್ರಸ್ತುತ ದಿನಗಳಲ್ಲಿ ಪ್ರಚಾರದ ಭರಾಟೆಯ ವ್ಯಾಮೋಹಕ್ಕೆ ಒಳಗಾಗಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಲು ಮೊರೆ ಹೋಗುತ್ತಿರುವುದು ವಿಪರ್ಯಾಸ. ಇಂತಹ ಮನಸ್ಥಿತಿಯಿಂದ ಹೊರ ಬಂದು ಗುಣಮಟ್ಟದ ಶಿಕ್ಷಣ ದೊರೆಯುವ ಸರ್ಕಾರಿ ಶಾಲೆಗಳಿಗೆ ದಾಖಲಿಸಬೇಕು ಎಂದು ಹೇಳಿದರು.
ಇದೇ ಸಂದರ್ಭ ಶಾಲೆಯಲ್ಲಿ ಕಲಿತ ನೂರಕ್ಕೂ ಹೆಚ್ಚು ಹಿರಿಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶಾಲೆಯ ವಿದ್ಯಾರ್ಥಿಗಳು 33 ಕ್ಕೂ ಹೆಚ್ಚು ಗೀತೆಗಳಿಗೆ ನೃತ್ಯ ಪ್ರದರ್ಶನ ನೀಡಿದರು. ಶಾಲೆಯಲ್ಲಿ 23ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಶಿಕ್ಷಕಿ ಪವಿತ್ರಮ್ಮ, ಶಿಕ್ಷಕರಾದ ನಾಗರಾಜು, ಶ್ಯಾಮ್‌ವೆಲ್ ಅವರನ್ನು ಪಾಲಕರು ಪ್ರಶಂಸಿಸಿದರು. ವಾರ್ಷಿಕೋತ್ಸವ ಕಾರ್ಯಕ್ರಮ ಯಶಸ್ವಿಯಾಗಿಸಲು ಶ್ರಮಿಸಿದ ಮುಖಂಡರು, ಗ್ರಾಪಂ ಅಧ್ಯಕ್ಷ ಮತ್ತು ಸದಸ್ಯರು ಶಿಕ್ಷಕರನ್ನು ಅಭಿನಂದಿಸಿದರು.