ಹಾವೇರಿ: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ ಸೇರಿ ರಾಜ್ಯ ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಹಾಗೂ ಕರೊನಾ ನಿಯಂತ್ರಣದಲ್ಲಿ ಸರ್ಕಾರ ಭ್ರಷ್ಟಾಚಾರ ನಡೆಸಿದ್ದು, ಈ ಬಗ್ಗೆ ತನಿಖೆ ಕೈಗೊಳ್ಳುವಂತೆ ಆಗ್ರಹಿಸಿ ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧ್ಯಕ್ಷ ಎಂ.ಎಂ. ಹಿರೇಮಠ ನೇತೃತ್ವದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು, ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿದರು. ಬಳಿಕ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಅಪರ ಜಿಲ್ಲಾಧಿಕಾರಿ ಯೋಗೇಶ್ವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ರೈತ ವಿರೋಧಿಯಾಗಿದೆ. ಕೂಡಲೆ ಈ ಕಾಯ್ದೆಯನ್ನು ಹಿಂಪಡೆಯಬೇಕು. ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಮೂಲಕ ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಈ ಎಲ್ಲ ಕಾಯ್ದೆಗಳು ರೈತ ಹಾಗೂ ಜನವಿರೋಧಿಯಾಗಿದೆ. ಆದ್ದರಿಂದ ಕಾಯ್ದೆ ತಿದ್ದುಪಡಿ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಅತಿವೃಷ್ಟಿ ಮತ್ತು ಪ್ರವಾಹ ನಿರ್ವಹಣೆಯಲ್ಲೂ ಸರ್ಕಾರ ವಿಫಲವಾಗಿದೆ. ರಾಜ್ಯ ಸರ್ಕಾರ ಕಳೆದ ವರ್ಷ ಸಂಭವಿಸಿದ ನೆರೆ ಹಾಗೂ ಪ್ರಸಕ್ತ ವರ್ಷ ಸಂಭವಿಸಿರುವ ಅತಿವೃಷ್ಟಿಯನ್ನು ಎದುರಿಸುವಲ್ಲಿ ವಿಫಲವಾಗಿದೆ. ಕಳೆದ ವರ್ಷದ ಸಂತ್ರಸ್ತರಿಗೆ ಇನ್ನೂ ಪರಿಹಾರ ನೀಡಿಲ್ಲ. ಬೆಳೆ ಹಾನಿಗೆ ಸಂಬಂಧಿಸಿದಂತೆ ರೈತರಿಗೆ ನೀಡಿರುವ ಪರಿಹಾರದ ಕುರಿತು ವಿವರ ನೀಡಬೇಕು ಎಂದು ಒತ್ತಾಯಿಸಿದರು.
ಕರೊನಾ ವೈರಸ್ ರಾಜ್ಯದಲ್ಲಿ ವ್ಯಾಪಕವಾಗಿ ಹೆಚ್ಚುತ್ತಿದೆ. ರಾಜ್ಯದ ಜನತೆ ಸೋಂಕಿನಿಂದ ಜೀವನ್ಮರಣ ಹೋರಾಟ ನಡೆಸಿದ್ದು, ಜನ ಭಯದಲ್ಲಿ ಕಾಲ ಕಳೆಯುತ್ತಿದ್ದಾರೆ. ಈ ಸಂದರ್ಭದಲ್ಲಿ ಜನರ ನೆರವಿಗೆ ಬರಬೇಕಾದ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕರೊನಾ ನಿಯಂತ್ರಣಕ್ಕಾಗಿ ಖರೀದಿಸಿದ ಉಪಕರಣಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ. ಈ ಕುರಿತು ನ್ಯಾಯಾಲಯದ ಮೂಲಕ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಮಾಜಿ ಸಚಿವ ಮನೋಹರ ತಹಸೀಲ್ದಾರ್, ಕೆಪಿಸಿಸಿ ಕಾರ್ಯದರ್ಶಿ ಡಾ. ಪ್ರಕಾಶಗೌಡ ಪಾಟೀಲ, ಪ್ರಮುಖರಾದ ಸಂಜೀವಕುಮಾರ ನೀರಲಗಿ, ಈರಪ್ಪ ಲಮಾಣಿ, ಎಂ.ಎಂ. ಮೈದೂರ, ಸಿ.ಬಿ. ಕುರವತ್ತಿಗೌಡ್ರ, ಪರಶುರಾಮ ಅಡಕಿ, ಬಸವರಾಜ ಬಳ್ಳಾರಿ, ಸಂಜಯಗಾಂಧಿ ಸಂಜೀವಣ್ಣನವರ, ಪ್ರಸನ ಹಿರೇಮಠ ಮತ್ತಿತರರು ಪಾಲ್ಗೊಂಡಿದ್ದರು.