ಶ್ರೀರಂಗಪಟ್ಟಣ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಶನಿವಾರ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಕೆ.ಎಸ್.ನಂಜುಂಡೇಗೌಡ ನೇತೃತ್ವದಲ್ಲಿ ಜಮಾವಣೆಗೊಂಡ ಕಾರ್ಯಕರ್ತರು ರಾಜ್ಯ ಸರ್ಕಾರ ರಾಜ್ಯದ ರೈತರ ಪರ ಯೋಜನೆಗಳನ್ನು ರದ್ದುಗೊಳಿಸುವ ಮೂಲಕ ಮೇಲೆ ರೈತರನ್ನು ಕೊಲ್ಲಲು ಮುಂದಾಗಿದೆ ಎಂದು ಆರೋಪಿಸಿದರು.
ಬಿಜೆಪಿ ಮಂಡಲದ ಅಧ್ಯಕ್ಷ ಪೀಹಳ್ಳಿ ರಮೇಶ್ ಮಾತನಾಡಿ, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರೈತರ ಹಿತ ಕಾಯುವ ಬದಲು ರೈತರನ್ನು ಮುಗಿಸುವ ದಮನಕಾರಿ ನೀತಿ ಅನುಸರಿಸಿದೆ. ರಾಜ್ಯದಲ್ಲಿ ರೈತರ ಅಭ್ಯುದಯಕ್ಕಾಗಿ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ರೈತ ವಿದ್ಯಾನಿಧಿ ಯೋಜನೆ, ಶ್ರಮ ಶಕ್ತಿ ಯೋಜನೆ, ಭೂ ಸಿರಿ ಯೋಜನೆ, ಕಿಸಾನ್ ಸಮ್ಮಾನ್, ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್, ಎಪಿಎಂಸಿ ಕಾನೂನು, ಕೃಷಿ ಭೂಮಿ ಮಾರಾಟ ಕಾನೂನು ಸೇರಿದಂತೆ ವಿವಿಧ ರೈತಪರ ಯೋಜನೆಗಳನ್ನು ಈ ಕಾಂಗ್ರೆಸ್ ಸರ್ಕಾರ ಏಕಾಏಕಿ ರದ್ದುಗೊಳಿಸಿ ತಮ್ಮ ಸ್ವಾರ್ಥ ಹಾಗೂ ರಾಜಕೀಯ ಲಾಭಗಳ ದುರುದ್ದೇಶಗಳಿಗೆ ನೀತಿ-ನಿಯಮಗಳನ್ನು ರೂಪಿಸಿಕೊಂಡು ಭ್ರಷ್ಟಚಾರ ಎಸಗುತ್ತಿದೆ. ಈಗಾಗಲೇ ಕಾಂಗ್ರೆಸ್ ಅಧಿಕಾರ ಹಿಡಿದು 100 ದಿನ ಪೂರೈಸುವಷ್ಟರಲ್ಲಿ ನೂರಾರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಕೆ.ಎಸ್.ನಂಜುಂಡೇಗೌಡ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ತಮ್ಮ ರಾಜಕೀಯ ಹಿತಾಸಕ್ತಿ ಕಾಯುವ ಜತೆಗೆ ಹೈಕಮಾಂಡ್ ಹಾಗೂ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಓಲೈಸಿಕೊಳ್ಳಲು ಮುಂದಾಗಿರುವ ಈ ಸರ್ಕಾರ ನಿರಂತರವಾಗಿ ತಮಿಳುನಾಡಿಗೆ ನೀರು ಹರಿಸಿ ರಾಜ್ಯದ ರೈತರಿಗೆ ವಿಷ ಉಣಿಸಿದೆ. ಇನ್ನು ಲೋಡ್ ಶೆಡ್ಡಿಂಗ್ ನೆಪದಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ಮಾಡದೆ ರೈತರು ಸೇರಿದಂತೆ ಜನರನ್ನು ಕತ್ತಲಿನಲ್ಲಿರಿಸುವ ಹುನ್ನಾರ ನಡೆದಿದೆ. ಹೀಗಾಗಿ ರೈತರಿಗೆ ಬೆಳೆ ನಷ್ಟ ಪರಿಹಾರ ಹಾಗೂ ಇತರ ಬೇಡಿಕೆಗಳನ್ನು ಶೀಘ್ರ ಈಡೇರಿಸುವಂತೆ ಒತ್ತಾಯಿಸಿ ಶಿರಸ್ತೇದಾರ್ ನೇತ್ರಾವತಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಜಿಲ್ಲಾಧ್ಯಕ್ಷ ಜೋಗಿಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜವರೇಗೌಡ, ಹನಿಯಂಬಾಡಿ ನಾಗರಾಜು, ತಾಲೂಕು ಅಧ್ಯಕ್ಷ ಡಿ.ಮಂಜುನಾಥ್, ತಾಲೂಕು ಕಾರ್ಯದರ್ಶಿ ದೇವರಾಜು, ಮುಖಂಡರಾದ ಬಲ್ಲೇನಹಳ್ಳಿ ಕೃಷ್ಣೇಗೌಡ, ಉಂಡುವಾಡಿ ಪುಟ್ಟಮಾದು, ರವಿಲಕ್ಷಣ, ಬಾಪು ಕಡತನಾಳು, ಮಹಾಲಿಂಗು, ಕೆ.ಪಿ.ಸ್ವಾಮಿಗೌಡ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.