- ಮೈಸೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದವರಿಗೆ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಎಚ್.ಡಿ.ಕೋಟೆ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಸೇರಿದ ಕಾಂಗ್ರೆಸ್ ಕಾರ್ಯಕರ್ತರು ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಬಾಪೂಜಿ ವೃತ್ತದಲ್ಲಿ ಸಮಾವೇಶಗೊಂಡು ಟೈರ್‌ಗೆ ಬೆಂಕಿ ಹಚ್ಚಿ ಕೆಲಕಾಲ ರಸ್ತೆ ಸಂಚಾರ ತಡೆ ನಡೆಸಿದರು.
ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಸಿದ್ದರಾಮಯ್ಯ ಅವರಿಗೆ ರಕ್ಷಣೆ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ದೂರಿದರು.
- ಸಿದ್ದರಾಮಯ್ಯ ಅವರು ಈ ರಾಜ್ಯ ಕಂಡ ಅಪರೂಪದ ರಾಜಕಾರಣಿ. ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ರಾಜ್ಯಕ್ಕೆ ಅವರದೇ ಆದ ಕೊಡುಗೆ ನೀಡಿದ್ದಾರೆ. ಅಂತಹ ನಾಯಕರನ್ನು ಅವಮಾನಿಸಿದ್ದಾರೆ ಎಂದರೆ ಸಾಮಾನ್ಯ ಜನರ ಗತಿ ಏನು ಎಂದು ಆತಂಕ ವ್ಯಕ್ತಪಡಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಏಜಾಜ್ ಪಾಷ, ಮನುಗನಹಳ್ಳಿ ಮಾದಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚಿಕ್ಕವೀರ ನಾಯಕ, ಎಚ್.ಸಿ.ಮಂಜುನಾಥ್, ಭೋವಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಜಿ.ವಿ.ಸೀತಾ ರಾಮ್, ಪುರಸಭಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎಚ್.ಸಿ.ನರಸಿಂಹಮೂರ್ತಿ, ಮೈಮುಲ್ ನಿರ್ದೇಶಕ ಈರೇಗೌಡ, ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಹೋಂಡಾ ನಯಾಜ್, ಕಂದೇಗಾಲ ಶಿವರಾಜು, ಜಿಲ್ಲಾ ಕುರುಬ ಸಮಾಜದ ಅಧ್ಯಕ್ಷ ಶಿವಪ್ಪ ಕೋಟೆ, ತಾಲೂಕು ಅಧ್ಯಕ್ಷ ಆನಂದ್, ಮುಖಂಡರಾದ ಸತೀಶ್ ಗೌಡ, ನಾಗನಹಳ್ಳಿ ಪ್ರದೀಪ್, ರಾಜು ವಿಶ್ವಕರ್ಮ, ವೆಂಕಟೇಶ್, ಪ್ರೇಮ್ ಸಾಗರ್, ಶೇಖರ್, ರವಿ, ಮಲ್ಲೇಶ ಇದ್ದರು.