ಜಿಲ್ಲೆ

ರಾಜ್ಯಪಾಲರ ನಡೆ ಖಂಡಿಸಿ ಆ.5ರಂದು ಬೃಹತ್ ಪ್ರತಿಭಟನೆ

ಹಾಸನ: ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿರುವ ಕ್ರಮವನ್ನು ಖಂಡಿಸಿ ರಾಜ್ಯಾದ್ಯಂತ ಆ.5ರಂದು ಪ್ರತಿಭಟನೆ ನಡೆಸಲಾಗುತ್ತಿದ್ದು, ಜಿಲ್ಲೆಯಲ್ಲಿ ಕೂಡ ಬೃಹತ್ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಇ.ಎಚ್. ಲಕ್ಷ್ಮಣ್ ತಿಳಿಸಿದರು.
ಮೂಡ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ನಡೆಯುತ್ತಿದೆ. ವರದಿ ಬರುವ ಮೊದಲೇ ಖಾಸಗಿ ವ್ಯಕ್ತಿಯ ದೂರನ್ನ ಆಧರಿಸಿ ರಾಜ್ಯಪಾಲರು ನೋಟಿಸ್ ನೀಡಿದ್ದಾರೆ. ಇದರಿಂದ ಯಾವುದೋ ಒತ್ತಡಕ್ಕೆ ಸಿಲುಕಿ ಕೆಲಸ ಮಾಡುತ್ತಿದ್ದಾರೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ರಾಜ್ಯಪಾಲರು ಈ ನೋಟಿಸ್‌ನ್ನ ಹಿಂಪಡೆಯಬೇಕು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಮೂಡ ಹಗರಣವನ್ನು ಬಿಜೆಪಿ ಮತ್ತು ಜೆಡಿಎಸ್‌ನವರು ವಿನಾಕಾರಣ ಸಿದ್ದರಾಮಯ್ಯ ಅವರ ಮೇಲೆ ಸುಳ್ಳು ಆಪಾದನೆ ಮಾಡುತ್ತಿದ್ದಾರೆ, ಅವರು ಅಧಿಕಾರದಲ್ಲಿದ್ದಾಗ ಸಂದರ್ಭದಲ್ಲಿ ಯಾವುದೇ ಅಕ್ರಮ ನಡೆದಿಲ್ಲ, ಆದರೂ, ಕೂಡ ಸುಳ್ಳು ಹೇಳಿಕೊಂಡು ಜನರನ್ನ ದಾರಿ ತಪ್ಪಿಸಲು ಪಾದಯಾತ್ರೆ ಮಾಡುತ್ತಿದ್ದಾರೆ. ಎಲ್ಲಾ ಸುಳ್ಳು ಆಪಾದನೆಗಳಿಗೆ ಈಗಾಗಲೇ ಈ ಎರಡು ಪಕ್ಷದವರಿಗೆ ಜನರೇ ಉತ್ತರ ನೀಡಿದ್ದಾರೆ ಎಂದು ಕಿಡಿಕಾರಿದರು.
ರಾಜ್ಯಪಾಲರ ನಡೆಯನ್ನು ಖಂಡಿಸಿ ಆ.5ರಂದು ಕಾಂಗ್ರೆಸ್ ಕಚೇರಿಯಿಂದ ಬೃಹತ್ ಪ್ರತಿಭಟನೆಯ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು. ತಕ್ಷಣವೇ ಈ ನೋಟಿಸ್‌ನ್ನ ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕುರುಬ ಸಂಘದ ಅಧ್ಯಕ್ಷ ಪಟೇಲ್ ಶಿವಪ್ಪ, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಕೆ. ಮಹೇಶ್, ಕಾಂಗ್ರೆಸ್ ಜಿಲ್ಲಾ ವಕ್ತಾರ ದೇವರಾಜೇಗೌಡ, ಮಹಿಳಾ ಘಟಕದ ಜಿಲ್ಲಾಧ್ಯಕ್ಷ ತಾರಾ ಚಂದನ್, ಎಸ್‌ಸಿ ಘಟಕದ ಜಿಲ್ಲಾಧ್ಯಕ್ಷ ಮಲ್ಲಿಗೆವಾಳು ದೇವಪ್ಪ ಹಾಜರಿದ್ದರು