ಜಿಲ್ಲೆ

ರಾಜ್ಯಪಾಲರ ನಡೆ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ

ಹಾಸನ; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರ ನಡೆ ಖಂಡಿಸಿ ಹಾಗೂ ನೋಟಿಸ್ ವಾಪಸ್ ಪಡೆಯುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ನಗರದ ಬಿ.ಎಂ.ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಿಂದ ಮೆರವಣಿಗೆ ಹೊರಟ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು, ತಮಟೆ ಬಡಿಯುತ್ತಾ ಎನ್.ಆರ್.ವೃತ್ತದವರೆಗೂ ರಾಜ್ಯಪಾಲರು, ಬಿಜೆಪಿ-ಜೆಡಿಎಸ್ ವಿರುದ್ಧ ಹಾಗೂ ಸಿದ್ದರಾಮಯ್ಯ ಅವರ ಪರ ಫಲಕ ಹಿಡಿದು ಸಾಗಿ ನಂತರ ಅಲ್ಲಿ ಮಾನವ ಸರಪಳಿ ನಿರ್ಮಿಸಿ, ರಾಜ್ಯಪಾಲರು ರಾಜಕೀಯ ಮಾಡುತ್ತಿದ್ದಾರೆ. ಅದೇ ದುರುದ್ದೇಶದಿಂದ ಸಿದ್ದರಾಮಯ್ಯ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ ಎಂದು ಖಂಡಿಸಿದರು.
ಬಿಜೆಪಿ-ಜೆಡಿಎಸ್ ಪಕ್ಷಗಳು ಬಹುಮತದಿಂದ ಅಧಿಕಾರಕ್ಕೆ ಬಂದಿರುವ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜ್ಯಪಾಲರ ಮೂಲಕ ವಾಮ ಮಾರ್ಗದ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕದ ಪ್ರಬುದ್ಧ ಮತದಾರರು ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನ ನೀಡಿ, ಸಿದ್ದರಾಮಯ್ಯ ಅವರನ್ನು ಸಿಎಂ ಮಾಡಿದ್ದಾರೆ.ನಾಡಿನ ಜನರ ಅಭಿಪ್ರಾಯ ಗೌರವಿಸದೆ, ದೇಶದ ಪ್ರಾಮಾಣಿಕ ರಾಜಕಾರಣಿ ಎನಿಸಿರುವ ಸಿದ್ದರಾಮಯ್ಯ ವಿರುದ್ಧ ಯಾರೋ ಖಾಸಗಿ ವ್ಯಕ್ತಿ ನೀಡಿದ ದೂರು ಆಧರಿಸಿ ನೋಟಿಸ್ ನೀಡುವುದು ಖಂಡನೀಯ.ಇನ್ನಾದರೂ ರಾಜ್ಯಪಾಲರು ಬಿಜೆಪಿ ಕೈಗೊಂಬೆಯಂತೆ ವರ್ತಿಸುವುದನ್ನು ಬಿಟ್ಟು ನೋಟಿಸ್‌ನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
ನಂತರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಡಿಸಿ ಸಿ.ಸತ್ಯಭಾಮ ಅವರ ಮೂಲಕ ಮನವಿ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಇ.ಎಚ್.ಲಕ್ಷ್ಮಣ್, ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿವುದನ್ನು ಬಿಟ್ಟು ಸಂವಿಧಾನದ ಆಶಯದಂತೆ ಕೆಲಸ ಮಾಡಬೇಕು.ಮುಡಾ ಹಗರಣ ಆರೋಪ ಸಂಬಂಧ ತನಿಖೆ ನಡೆಯುತ್ತಿದೆ. ಅದರ ವರದಿ ಬರುವ ಮೊದಲೇ ಖಾಸಗಿ ವ್ಯಕ್ತಿ ದೂರು ಆಧರಿಸಿ ರಾಜ್ಯಪಾಲರು ನೋಟಿಸ್ ನೀಡಿ, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಹುನ್ನಾರ ಮಾಡುತ್ತಿರುವುದು ಸರಿಯಲ್ಲ ಎಂದರು.
ಈ ವಿಚಾರದಲ್ಲಿ ವಿರೋಧಪಕ್ಷಗಳನ್ನು ಸುಳ್ಳನ್ನೇ ಸತ್ಯ ಮಾಡಲು ಹೊರಟಿವೆ. ಅವರ ಯಾವುದೇ ದುರುದ್ದೇಶ ಫಲಿಸದು ಎಂದರು.
ರಾಜ್ಯಸಭೆ ಮಾಜಿ ಸದಸ್ಯ ಎಚ್.ಕೆ.ಜವರೇಗೌಡ, ಮುಖಂಡರಾದ ಸಿ.ಎಸ್.ಪುಟ್ಟೇಗೌಡ, ಎಂ.ಎ.ಗೋಪಾಲಸ್ವಾಮಿ, ಬನವಾಸೆ ರಂಗಸ್ವಾಮಿ, ಶ್ರೀಧರ್‌ಗೌಡ, ದೇವರಾಜೇಗೌಡ, ಪಟೇಲ್ ಶಿವಪ್ಪ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ತಾರಾ ಚಂದನ್,ರಘು ದಾಸರಕೊಪ್ಪಲು, ಎಚ್.ಟಿ.ಲಕ್ಷ್ಮಣ್ ಗೊರೂರು ರಂಜಿತ್ ಇತರರು ಇದ್ದರು.