ಜಿಲ್ಲೆ

ರಾಜ್ಯಪಾಲರು ವಿರುದ್ಧ ಸಚಿವರು ಅವೇಳನಕಾರಿ ಹೇಳಿಕೆ ಖಂಡಿಸಿ ಪ್ರತಿಭಟನೆ

Hassan - Mohan Kanthur

ಹಾಸನ: ಮೂಡ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದನ್ನ ಖಂಡಿಸಿ ಕಾಂಗ್ರೆಸ್ ನ ಸಚಿವರು ರಾಜ್ಯಪಾಲರ ವಿರುದ್ಧ ಅವೇಳನಕಾರಿಯಾಗಿ ಹೇಳಿಕೆ ನೀಡುತ್ತಿರುವುದನ್ನ ಖಂಡಿಸಿ ಗುರುವಾರ ಬಿಜೆಪಿ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡುತ್ತಿರುವ ಕಾಂಗ್ರೆಸ್ ಮುಖಂಡರು ಹಾಗು ಕಾರ್ಯಕರ್ತರ ವಿರುದ್ಧ ಕ್ರಮ ಜರುಗಿಸಬೇಕು. ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಪಾಲರ ಭಾವಚಿತ್ರ ದಹಿಸುವುದರ ಜೊತೆಗೆ ಅಮಾನವೀಯವಾಗಿ ವರ್ತಿಸುತ್ತಿದ್ದಾರೆ. ಕೆಲ ಕಾಂಗ್ರೆಸ್ ನಾಯಕರು ರಾಜ್ಯಪಾಲರನ್ನು ಏಕವಚನದಲ್ಲಿ ನಿಂದಿಸಿ ಅವಮಾನ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಅಧಿಕಾರಕ್ಕಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಹೆಸರನ್ನು ಬಳಸಿಕೊಳ್ಳುವ ಕಾಂಗ್ರೆಸ್, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ರಕ್ಷಣೆ ನೀಡುತ್ತಿದೆ. ಇದು ಕಾಂಗ್ರೆಸ್ ಹಿಂದುಳಿದ ವರ್ಗಕ್ಕೆ ಮಾಡಿದ ಘೋರ ಅನ್ಯಾಯ ಎಂದರು.
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ತಳುಕು ಹಾಕಿಕೊಂಡಿದೆ. ಅಧಿಕಾರ ದುರುಪಯೋಗ ಪಡಿಸಿಕೊಂಡು 14 ನಿವೇಶನಗಳನ್ನು ಖಾತೆ ಮಾಡಿಸಿಕೊಂಡಿರುವ ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರು ತನಿಖೆಗೆ ಸೂಚಿಸಿರುವುದು ನ್ಯಾಯಯುತವಾಗಿದೆ. ಆದರೆ ಕಾಂಗ್ರೆಸ್ ರಾಜ್ಯಪಾಲರ ವಿರುದ್ಧ ಪ್ರತಿಭಟಿಸುವುದು ಸರಿಯಲ್ಲವೆಂದರು.
ಕಾಂಗ್ರೆಸ್ ಸಚಿವರಾದ ಜಮೀರ್ ಅಹಮದ್, ಕೃಷ್ಣಭೈರೇಗೌಡ, ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ, ಶಾಸಕ ನಂಜೇಗೌಡ ಹೀಗೆ ಅನೇಕ ನಾಯಕರು ರಾಜ್ಯಪಾಲರ ವಿರುದ್ಧ ನಿಂದನೆಯ ಹೇಳಿಕೆ ನೀಡುತ್ತಿದ್ದಾರೆ. ಇದು ಕಾನೂನಿಗೆ ವಿರುದ್ಧವಾದ ಕ್ರಮವಾಗಿದ್ದು, ಅವರು ಸಂವಿಧಾನದ ವಿರೋಧಿಯಾಗಿ ವರ್ತಿಸುತ್ತಿದ್ದಾರೆ. ತಕ್ಷಣವೇ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಮಂಜು ಬೀರನಹಳ್ಳಿ, ಅಮಿತ್ ಶೆಟ್ಟಿ, ಶೋಭನ್‌ಬಾಬು, ವೇದಾವತಿ, ಬಿ.ಎಚ್. ನಾರಾಯಣಗೌಡ, ಆರ್.ಮೋಹನ್, ವಿಜಯಲಕ್ಷ್ಮಿ, ಹರ್ಷಿತ್, ಮಹೇಶ್, ಸಂತೋಷ ಇತರರು ಇದ್ದರು.