ಚಿತ್ರದುರ್ಗ: ತಾಲೂಕಿನ ಸಿರಿಗೆರೆಯ ಗುರುಶಾಂತೇಶ್ವರ ದಾಸೋಹ ಭವನದಲ್ಲಿ ಅ. 8ರಿಂದ 10ರ ವರೆಗೂ ಬೆಂಗಳೂರು ವಿಭಾಗ ಮಟ್ಟದ, ರಾಜ್ಯಮಟ್ಟದ ಯೋಗಾಸನ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಿದಾನಂದಸ್ವಾಮಿ ತಿಳಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ, ಜಿಲ್ಲಾಡಳಿತ, ಜಿಪಂ, ಶಾಲಾ ಶಿಕ್ಷಣ ಇಲಾಖೆಯಿಂದ ಸ್ಪರ್ಧೆ ಆಯೋಜಿಸಲಾಗಿದೆ ಎಂದರು.
8ರಂದು ಬೆಳಗ್ಗೆ 10.30ರ ಉದ್ಘಾಟನಾ ಸಮಾರಂಭದ ಸಾನ್ನಿಧ್ಯವನ್ನು ಡಾ.ಶಿವಮೂರ್ತಿ ಶಿವಾಚಾರ್ಯ ಶ್ರೀ ವಹಿಸುವರು. ವಚನಾನಂದ ಶ್ರೀ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅಧ್ಯಕ್ಷತೆ ವಹಿಸುವರು. ಶಾಸಕರಾದ ಡಾ.ಎಂ.ಚಂದ್ರಪ್ಪ, ಎನ್.ವೈ.ಗೋಪಾಲಕೃಷ್ಣ, ಎಂಎಲ್ಸಿಗಳಾದ ಡಾ.ಡಿ.ಟಿ. ಶ್ರೀನಿವಾಸ, ಚಿದಾನಂದ ಎಂ. ಗೌಡ ಅತಿಥಿಗಳಾಗಿ ಭಾಗವಹಿಸುವರು ಎಂದು ತಿಳಿಸಿದರು.
9ರಂದು ಮಧ್ಯಾಹ್ನ 3ಕ್ಕೆ ವಿಭಾಗ ಮಟ್ಟದ ಸ್ಪರ್ಧಾ ವಿಜೇತರ ಬಹುಮಾನ ವಿತರಣೆಯನ್ನು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ನೆರವೇರಿಸುವರು. ವಿದ್ಯಾಸಂಸ್ಥೆಯ ವಿಶೇಷಾಧಿಕಾರಿ ವೀರಣ್ಣ ಎಸ್. ಜತ್ತಿ ಅಧ್ಯಕ್ಷತೆ ವಹಿಸುವರು. ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆಮ್ಲಾನ್ ಆದಿತ್ಯ ಬಿಸ್ವಾಸ್ ಅತಿಥಿಗಳಾಗಿ ಪಾಲ್ಗೊಲ್ಲಿದ್ದಾರೆ ಎಂದರು.
ದೈಹಿಕ ಶಿಕ್ಷಕ ಎಸ್.ಟಿ.ಉಮೇಶ್ ಮಾತನಾಡಿ, 10ರಂದು ಸಂಜೆ 4ಕ್ಕೆ ರಾಜ್ಯಮಟ್ಟದ ಸ್ಪರ್ಧಾ ವಿಜೇತರಿಗೆ ಸಂಸದ ಗೋವಿಂದ ಎಂ ಕಾರಜೋಳ ಬಹುಮಾನ ವಿತರಿಸುವರು. ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಡಾ.ಎಚ್.ವಿ.ವಾಮದೇವಪ್ಪ ಅಧ್ಯಕ್ಷತೆ ವಹಿಸುವರು. ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ, ಎಂಎಲ್ಸಿ ಕೆ.ಎಸ್.ನವೀನ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಡಿಡಿಪಿಐ ಎಂ.ಆರ್.ಮಂಜುನಾಥ್ ಮಾತನಾಡಿ, 14, 17 ವರ್ಷದೊಳಗಿನ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ಸ್ಪರ್ಧೆ ಆಯೋಜಿಸಲಾಗಿದೆ. ರಾಜ್ಯದ ವಿವಿಧೆಡೆಯಿಂದ ಬಾಲಕ-ಬಾಲಕಿಯರ ವಿಭಾಗದಿಂದ ತಲಾ 154 ಸೇರಿ 308 ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ. 25 ಶಿಕ್ಷಕರು ತೀರ್ಪುಗಾರರಾಗಿ ಕಾರ್ಯನಿರ್ವಹಿಸಲಿದ್ದಾರೆ. ಸಿರಿಗೆರೆ ಮಠವು ಅಗತ್ಯ ವ್ಯವಸ್ಥೆ ಕಲ್ಪಿಸಿದೆ ಎಂದು ತಿಳಿಸಿದರು.
ಶ್ರೀಮಠದ ಓಂಕಾರಪ್ಪ, ಪತ್ರಕರ್ತ ಸುನೀಲ್ ಇತರರಿದ್ದರು.