ಜಿಲ್ಲೆ

ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಜಾಗೃತಿ ಮೂಡಿಸಿ

ಬೀದರ್: ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಪಕ್ಷದ ಪ್ರಮುಖರು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳೂ ಆದ ರಾಷ್ಟ್ರೀಯ ಶಿಕ್ಷಣ ನೀತಿ ಜಿಲ್ಲಾ ಪ್ರಮುಖ ಅಶೋಕ ಹೊಕ್ರಾಣೆ ಹೇಳಿದರು.

ಪಕ್ಷದ ಜಿಲ್ಲಾ ಕಚೇರಿಯಲ್ಲಿ ಭಾನುವಾರ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಜರುಗಿದ ಮಂಡಲ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಮಂಡಲ ಪ್ರಮುಖರು ಶಿಕ್ಷಣ ತಜ್ಞರು, ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಜಾಗೃತಿ ಮೂಡಿಸಬೇಕು. ನೀತಿ ಕುರಿತ ಸಲಹೆಗಳನ್ನು ವೆಬ್ ಸೈಟ್ ನಲ್ಲಿ ಹಂಚಿಕೊಳ್ಳುವ ಬಗ್ಗೆ ತಿಳಿಸಬೇಕು ಎಂದರು.

ಕೈ ಬರಹದ ಪೋಸ್ಟರ್ ಅಥವಾ ಭಿತ್ತಿಪತ್ರ, ಪ್ರಧಾನ ಮಂತ್ರಿಗಳಿಗೆ ಪತ್ರ, 300 ಪದಗಳುಳ್ಳ ಪ್ರಬಂಧ ಇತ್ಯಾದಿ ಮೂಲಕ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಕೇಂದ್ರ ಸರ್ಕಾರಕ್ಕೆ ಸಾರ್ವಜನಿಕರು ಸಲಹೆ ನೀಡಬಹುದು. ಈ ಬಗ್ಗೆ ಶಿಕ್ಷಣ ಸಂಸ್ಥೆ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಪಕ್ಷದ ಪ್ರಮುಖರು ಮಾಡಬೇಕು. ಜಾಗೃತಿ ಅಭಿಯಾನ ಸೆ.24ರಿಂದ ಅಕ್ಟೋಬರ್ 2ರವರೆಗೆ ಜಿಲ್ಲಾದ್ಯಂತ ನಡೆಸಬೇಕು ಎಂದು ಹೇಳಿದರು.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಯನ್ನು ಭಾರತೀಯ ಶಿಕ್ಷಣ ವ್ಯವಸ್ಥೆಯಲ್ಲಿ ಹಲವಾರು ಬದಲಾವಣೆಗಳನ್ನು ಪರಿಚಯಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತರುತ್ತಿದೆ. ಭಾರತವನ್ನು ಜಾಗತಿಕ ಜ್ಞಾನದ ಮಹಾಶಕ್ತಿಯನ್ನಾಗಿ ಮಾಡುವ ಗುರಿ ಹೊಸ ನೀತಿ ಹೊಂದಿದೆ ಎಂದು ಹೇಳಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರಹಂತ ಸಾವಳೆ, ಜಿಲ್ಲಾ ಕಾರ್ಯದರ್ಶಿ ಜಗನ್ನಾಥ ಪಾಟೀಲ್ ಸಿರಕಟನಳ್ಳಿ ಇದ್ದರು.