ಮೈಸೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ಖಂಡಿಸಿ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ನಗರದ ಗ್ರಾಮಾಂತರ ಬಸ್ ನಿಲ್ದಾಣದ ಬಳಿ ಮಂಗಳವಾರ ಪ್ರತಿಭಟನೆ ನಡೆಯಿತು.
ಬಸ್ ನಿಲ್ದಾಣದ ಮುಖ್ಯದ್ವಾರದ ಬಳಿ ಪ್ರತಿಭಟನೆ ನಡೆಸಿದ ಮುಖಂಡರು, ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ರಸ್ತೆ ಸಂಚಾರ ತಡೆದು ಆಕ್ರೋಶ ವ್ಯಕ್ತಪಡಿಸಿದರು.
ತಮಿಳುನಾಡಿಗೆ ನೀರು ಹರಿಸುವುದಿಲ್ಲವೆಂದು ಜನರಿಗೆ ಭರವಸೆ ನೀಡಿದ್ದ ರಾಜ್ಯ ಸರ್ಕಾರ ಕದ್ದುಮುಚ್ಚಿ ನೀರು ಬಿಡುವ ಮೂಲಕ ವಚನ ಭ್ರಷ್ಟವಾಗಿದೆ. ಈಗ ಮತ್ತೆ ತಮಿಳುನಾಡಿಗೆ 15 ದಿನಗಳವರೆಗೆ 5 ಸಾವಿರ ಕ್ಯೂಸೆಕ್ ನೀರು ಬಿಡಲಾಗುತ್ತಿದೆ ಎಂದು ದೂರಿದರು.
ನೀರಾವರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬೇಜವಾಬ್ದಾರಿ ನಡವಳಿಕೆ ಸಮಸ್ಯೆಗೆ ಕಾರಣವಾಗಿದೆ. ಕೂಡಲೇ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಧಿಕ್ಕರಿಸಿ ನೀರು ಹರಿಸುತ್ತಿರುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಸಂಚಾರಕ್ಕೆ ಅಡ್ಡಿ ಉಂಟು ಮಾಡಿದ ಪ್ರತಿಭಟನಾನಿರತರನ್ನು ಬಂಧಿಸಿದ ಪೊಲೀಸರು ಬಳಿಕ ಸಿಎಆರ್ ಮೈದಾನಕ್ಕೆ ಕರೆದೊಯ್ದು ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡಿದರು.
ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಅಮ್ ಆದ್ಮಿ ಪಕ್ಷದ ರಂಗಯ್ಯ, ಸೋಸಲೆ ಸಿದ್ದರಾಜು, ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್, ಪ್ರಧಾನ ಕಾರ್ಯದರ್ಶಿ ನಾಗರಾಜ್, ವಿವಿಧ ತಾಲೂಕು ಅಧ್ಯಕ್ಷರಾದ ಕುರುಬೂರು ಸಿದ್ದೇಶ್, ಹಾಡ್ಯ ರವಿ, ಕುರುಬೂರು ಪ್ರದೀಪ್, ಹೆಗ್ಗೂರು ರಂಗರಾಜ್, ಮುಖಂಡರಾದ ಅಂಬಳೆ ಮಂಜುನಾಥ್, ಮಾರ್ಬಳ್ಳಿ ನೀಲಕಂಠಪ್ಪ, ಕಾಟೂರು ಮಾದೇವಸ್ವಾಮಿ, ಕೋಟೆ ಸುನಿಲ್, ಸಾತಗಳ್ಳಿ ಬಸವರಾಜ್, ಹಿರೇನಂದಿ ಮಹಾದೇವಪ್ಪ, ಕೆಂಡಗಣ್ಣಸ್ವಾಮಿ, ಚಾಮರಾಜನಗರ ಮಹೇಶ್, ಚುಂಚುರಾಯನಹುಂಡಿ ಗಿರೀಶ್, ದೇವನೂರು ನಾಗೇಂದ್ರಸ್ವಾಮಿ, ಪಿ.ರಾಜು ಇತರರು ಇದ್ದರು.