ಮದ್ದೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರೈತ ಸಂಘದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ರೈತ ಮುಖಂಡರ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು.
ಪಟ್ಟಣದ ಹಾಲು ಉತ್ಪಾದಕರ ಕಾರ್ಯದರ್ಶಿಗಳ ಸಂಘದ ಸಭಾಂಗಣದಲ್ಲಿ ರೈತ ಮುಖಂಡ ಆರ್.ಎಸ್.ಸೀತಾರಾಂ ಅಧ್ಯಕ್ಷತೆಯಲ್ಲಿ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಈ ಸಂಬಂಧ ಸುದೀರ್ಘವಾಗಿ ಚರ್ಚಿಸಲಾಯಿತು.
ರಾಜ್ಯದಲ್ಲಿ ಈವರೆಗೂ ಅಧಿಕಾರ ನಡೆಸಿದ ಎಲ್ಲ ರಾಜಕೀಯ ಪಕ್ಷಗಳು ರೈತರ ಸಮಸ್ಯೆಗಳನ್ನು ಕಡೆಗಣಿಸಿವೆ. ಈ ನಿಟ್ಟಿನಲ್ಲಿ ಈಗಾಗಲೇ ಮಂಡ್ಯ ಮತ್ತು ಪಾಂಡವಪುರ ಕ್ಷೇತ್ರದಲ್ಲಿ ರೈತ ಸಂಘದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಅದರಂತೆ ಮದ್ದೂರು ಮತ್ತು ನಾಗಮಂಗಲ ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರಗತಿಪರ ಸಂಘಟನೆಗಳ ಬೆಂಬಲ ಪಡೆದು ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಚಿಂತನೆ ನಡೆಸಲಾಗಿದೆ ಎಂದರು.
ಕಬ್ಬಿಗೆ ದರ ನಿಗದಿ, ಹಾಲಿಗೆ ಪ್ರೋತ್ಸಾಹಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಂಡ್ಯದಲ್ಲಿ ರೈತರು ಅಹೋ ರಾತ್ರಿ ಪ್ರತಿಭಟನೆ ನಡೆಸಿದ್ದರೂ ಜಿಲ್ಲೆಯ ಯಾವುದೇ ಶಾಸಕರು ಕಿಂಚಿತ್ತೂ ಗಮನಹರಿಸಲಿಲ್ಲ. ಇಂತಹವರಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವ ಉದ್ದೇಶದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು. ಈ ಸಂಬಂಧ ತಾಲೂಕು ರೈತ ಸಂಘದ ಮುಖಂಡರೊಂದಿಗೆ ಮತ್ತೊಂದು ಸುತ್ತಿನ ಸಭೆ ಕರೆದು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ಆಧಾರ್‌ಗೆ ಪ್ಯಾನ್ ಜೋಡಣೆ ಅವೈಜ್ಞಾನಿಕ ನಿರ್ಧಾರ. ಇದರಿಂದ ಅನುಕೂಲಕ್ಕಿಂತ ಅನನುಕೂಲವೇ ಹೆಚ್ಚು. ಇದನ್ನು ಕೈ ಬಿಡಬೇಕು. ಇಲ್ಲದಿದ್ದರೆ ಇದರ ವಿರುದ್ಧ ರಾಷ್ಟ್ರೀಕೃತ ಬ್ಯಾಂಕ್‌ಗಳ ಮುಂದೆ ಆಂದೋಲನ ಮಾಡಲಾಗುವುದು ಎಂದು ರೈತ ಮುಖಂಡ ಅಣ್ಣೂರು ಮಹೇಂದ್ರ ಎಚ್ಚರಿಸಿದರು.
ಸಭೆಯಲ್ಲಿ ರೈತ ಮುಖಂಡರಾದ ಕೀಳಘಟ್ಟ ನಂಜುಂಡಯ್ಯ, ಅಣ್ಣೂರು ಮಹೇಂದ್ರ, ಸಿದ್ದೇಗೌಡ, ರಾಮಣ್ಣ, ಹನುಮಂತೇಗೌಡ, ಶಿವಲಿಂಗಯ್ಯ, ಉಮೇಶ್, ಜಗದೀಶ್, ಮೂಡ್ಯ ಚನ್ನೇಗೌಡ, ಮಹೇಶ್, ಪ್ರಭುಲಿಂಗ, ಪೂರ್ಣಚಂದ್ರ, ರಮೇಶ್ ಮತ್ತಿತರರು ಇದ್ದರು.