filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 38; 
ಜಿಲ್ಲೆ

ರೈತರ ಬೆಳೆಗಳಿಗೆ ಎಂಎಸ್‌ಪಿ ಖಾತ್ರಿ ಪಡಿಸಿ

ಚಿತ್ರದುರ್ಗ: ಕೃಷಿ ಮೇಲಿನ ಕಾರ್ಪೋರೇಟ್ ಆಕ್ರಮಣ ನಿಲ್ಲಲಿ. ರೈತರ ಬೆಳೆಗಳಿಗೆ ಎಂಎಸ್‌ಪಿ ಖಾತ್ರಿಯಾಗಲಿ ಎಂದು ಆಗ್ರಹಿಸಿ ಸಂಯುಕ್ತ ಹೋರಾಟ-ಕರ್ನಾಟಕ ಸಂಘಟನೆ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಬ್ರಿಟಿಷರೆ ಭಾರತ ಬಿಟ್ಟು ತೊಲಗಿ ಚಳವಳಿ ನಡೆದ ನೆನಪಿಗಾಗಿ ಓಬವ್ವ ವೃತ್ತದಲ್ಲಿ ಕಾರ್ಪೋರೇಟ್ ಕಂಪನಿಗಳೆ ಭಾರತ ಬಿಟ್ಟು ತೊಲಗಿ ಎಂಬ ಘೋಷಣೆಯೊಂದಿಗೆ ವಿವಿಧ ಕಂಪನಿಗಳ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಕಾರ್ಯಾಧ್ಯಕ್ಷ ಈಚಘಟ್ಟ ಸಿದ್ಧವೀರಪ್ಪ ಮಾತನಾಡಿ, ಬಹುರಾಷ್ಟ್ರೀಯ-ಕಾರ್ಪೋರೇಟ್ ಕಂಪನಿಗಳು ಎಲ್ಲ ಕ್ಷೇತ್ರಗಳಲ್ಲೂ ತಲೆ ಎತ್ತಿದ್ದು, ದೇಶದ ಆರ್ಥಿಕ ಪರಿಸ್ಥಿತಿ ದಿವಾಳಿಗೆ ಕಾರಣವಾಗಿದೆ. ಹೀಗಾಗಿ ಜನಮುಖಿ ಆಡಳಿತ ಬೇಕೆ ಹೊರತು ಕಂಪನಿಗಳ ಅಧೀನದಲ್ಲಿ ಇರಬಾರದು. ಆದ್ದರಿಂದ ದೇಶ ಬಿಟ್ಟು ತೊಲಗಿಸಲು ಚಳವಳಿ ಅಗತ್ಯವಿದೆ ಎಂದು ಸಲಹೆ ನೀಡಿದರು.

ರೈತರ ಹಾಗೂ ಜನಸಾಮಾನ್ಯರ ಬದುಕಿಗೆ ಕಂಟಕವಾಗಿರುವ ವಿದ್ಯುತ್ ಖಾಸಗೀಕರಣ ರದ್ದಾಗಬೇಕು. ಕಂಪನಿಗಳ ಹಿತಕ್ಕಾಗಿ ಜಾರಿಯಾದ ಕಾರ್ಮಿಕ ವಿರೋಧಿ ನಾಲ್ಕು ಕಾಯ್ದೆ ರದ್ದಾಗಬೇಕು. ಉದ್ಯೋಗ ಭದ್ರತೆ ದೇಶದ ನೀತಿಯಾಗಬೇಕು. ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ಜಾರಿಯಾಗಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ರಾಜ್ಯ ಕಾರ್ಯದರ್ಶಿ ಕುಮಾರ್ ಸಮತಳ ಮಾತನಾಡಿ, ಬಹುರಾಷ್ಟ್ರೀಯ ಕಂಪನಿಗಳು ದೇಶದ ಆರ್ಥಿಕ, ಸಾಮಾಜಿಕ, ರಾಜಕೀಯ ಶಕ್ತಿಯನ್ನು ತಮ್ಮ ಹಿಡಿತದಲ್ಲಿಟ್ಟುಕೊಂಡಿದೆ. ಹೀಗಾಗಿ ಹೋರಾಟ ಅನಿವಾರ್ಯ ಎಂದರು.

ರಾಜ್ಯ ರೈತಸಂಘದ ಜಿಲ್ಲಾಧ್ಯಕ್ಷ ಧನಂಜಯ ಹಂಪಯ್ಯನಮಾಳಿಗೆ, ಮುಖಂಡರಾದ ಹೊರಕೇರಪ್ಪ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಕೆ.ಪಿ.ಭೂತಯ್ಯ, ಟಿ.ಪಂಪಣ್ಣ, ನಾಗಪ್ಪ, ಎಂ.ಬಸವರಾಜಪ್ಪ, ಎಸ್.ಕೆ.ಶಿವಶಂಕರಪ್ಪ, ಬಿ.ಒ.ಶಿವಮೂರ್ತಿ, ಕರ್ನಾಟಕ ಜನಶಕ್ತಿಯ ಟಿ.ಶಫಿವುಲ್ಲಾ ಇತರರಿದ್ದರು.