ಜಿಲ್ಲೆ

ರ್ಯಾಪಿಡ್ ಟೆಸ್ಟ್ ಮೂಲಕ ಪರೀಕ್ಷಿಸಿ

ಗದಗ: ಕೋವಿಡ್-19 ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಮಾಸ್ಕ್ ಹಾಗೂ ಪರಸ್ಪರ ಅಂತರ ಕುರಿತು ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸುಂದರೇಶ ಬಾಬು ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ವಿಡಿಯೋ ಕಾನ್ಪರೆನ್ಸ್ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲೆಯ ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಸೋಂಕು ನಿಯಂತ್ರಣಕ್ಕೆ ಈಗಾಗಲೇ ರಚಿಸಲಾದ ವಾರ್ಡ್ ವಾರು ಸಮಿತಿಯ ಸದಸ್ಯರಿಗೆ ಹಾಗೂ ಪೌರಕಾರ್ವಿುಕರಿಗೆ ನಿಯಮಿತವಾಗಿ ಮಾಸ್ಕ್ ಹಾಗೂ ಸ್ಯಾನಿಟೈಸರ್ ಪೂರೈಸಬೇಕು ಎಂದರು.

ಸೋಂಕು ದೃಢಪಟ್ಟಂತಹ ಪ್ರಕರಣಗಳ ಪ್ರಾಥಮಿಕ ಹಾಗೂ ದ್ವಿತೀಯ ಸಂರ್ಪತರನ್ನು 24 ಗಂಟೆಯೊಳಗೆ ಪತ್ತೆ ಹಚ್ಚಿ ರ್ಯಾಪಿಡ್ ಟೆಸ್ಟ್ ಮೂಲಕ ಪರೀಕ್ಷಿಸಬೇಕು. ಈ ಪರೀಕ್ಷೆಯಲ್ಲಿ ವರದಿ ನಕಾರಾತ್ಮಕವಾಗಿ ಬಂದು ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ಅಂತಹ ಪ್ರಕರಣಗಳನ್ನು ಕೂಡಲೆ ಜಿಮ್್ಸ ಆಸ್ಪತ್ರೆಗೆ ಪರೀಕ್ಷೆ ನಡೆಸಲು ವರ್ಗಾಯಿಸಬೇಕು ಎಂದರು.

ಕಂಟೇನ್ಮೆಂಟ್ ಪ್ರದೇಶಗಳಿಗೆ ನೇಮಿಸಲಾದ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದರು.

ಇತ್ತೀಚಿನ ದಿನಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನ್ನೆಲೆಯಲ್ಲಿ ಪ್ರವಾಹ ಭೀತಿ ಎದುರಾಗುವ ಸಾಧ್ಯತೆಯಿದ್ದು ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಇರಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ವಿಪತ್ತು ನಿರ್ವಹಣೆ ಕುರಿತಂತೆ ಪಂಚಾಯಿತಿ ಮಟ್ಟದಲ್ಲಿ ಸಮಿತಿಗಳನ್ನು ರಚಿಸಿ ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ಜರುಗಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ ಕೆ. ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಗೃಹ ದಿಗ್ಬಂಧನದಲ್ಲಿರುವವರನ್ನು ಭೇಟಿ ಮಾಡಿ ಸಂಬಂಧಿಸಿದವರಿಗೆ ವರದಿ ನೀಡಲು ಸೂಚಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ನಿಯಂತ್ರಣ ಕುರಿತಂತೆ ಪ್ರತಿವಾರ ಜಾಗೃತಿ ಜಾಥಾಗಳನ್ನು ಆಯೋಜಿಸಬೇಕು ಎಂದರು.

ಎಸ್​ಪಿ ಯತೀಶ್. ಎನ್. ಮಾತನಾಡಿ, ಗೃಹ ದಿಗ್ಬಂಧನ ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು. ಬಕ್ರೀದ್ ಹಬ್ಬದ ಪ್ರಯುಕ್ತ ಐವತ್ತಕ್ಕಿಂತಲೂ ಹೆಚ್ಚ ಜನರು ಸೇರಿ ಪ್ರಾರ್ಥನೆ ಸಲ್ಲಿಸದಂತೆ ನಿಗಾ ವಹಿಸಲು ಸೂಚನೆ ನೀಡಿದರು.

ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ ಎಂ., ಉಪ ವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ ಎಸ್.ಎನ್., ಗದಗ-ಬೆಟಗೇರಿ ನಗರ ಸಭೆ ಪೌರಾಯುಕ್ತ ಮನ್ಸೂರ ಅಲಿ, ತಹಸೀಲ್ದಾರ ಶ್ರೀನಿವಾಸಮೂರ್ತಿ ಕುಲಕರ್ಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ ಬಸರೀಗಡ ಮತ್ತಿತರರು ಇದ್ದರು.