ಜಿಲ್ಲೆ

ಲಿಂಗತ್ವ ಅಲ್ಪಸಂಖ್ಯಾತರಿಗೆ ಅಗತ್ಯ ಸೌಲಭ್ಯ ಸಿಗುವಂತಾಗಲಿ

ಚಾಮರಾಜನಗರ: ಮತದಾನ ಅರಿವು ಮೂಡಿಸುವ ಪ್ರಮುಖ ಚಟುವಟಿಕೆಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಪಾಲ್ಗೊಳ್ಳುವುದರಿಂದ ಮುಖ್ಯವಾಹಿನಿಗೆ ಬರಬಹುದಾಗಿದೆ ಎಂದು ಸಮತಾ ಸೊಸೈಟಿ ಅಧ್ಯಕ್ಷೆ ದೀಪಾ ಬುದ್ಧೆ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಶನಿವಾರ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರಿಗೆ ಗುರುತಿನ ಚೀಟಿ ನೀಡುವುದಲ್ಲದೆ ವಸತಿ, ಇತರ ಅಗತ್ಯ ಸೌಲಭ್ಯಗಳನ್ನು ನೀಡಿ ಜಿಲ್ಲಾಡಳಿತ ಉತ್ತಮ ಕೆಲಸ ಮಾಡುತ್ತಿದೆ. ಎಲ್ಲ ಜಿಲ್ಲೆಗಳಲ್ಲಿಯೂ ಇದು ಆಗಬೇಕು ಎಂದರು.

ಅರ್ಥಪೂರ್ಣ ಆಚರಣೆ:

ರಾಷ್ಟ್ರೀಯ ಮತದಾರರ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು. ಜಿಲ್ಲಾ ಪ್ರಧಾನ ಸೆಷನ್ಸ್ ನ್ಯಾಯಾಧೀಶೆ ಬಿ.ಎಸ್.ಭಾರತಿ ಮತದಾನದ ಅರಿವು ಮೂಡಿಸುವ ಸ್ಟಿಕ್ಕರ್‌ಗಳನ್ನು ವೃಕ್ಷಕ್ಕೆ ಅಳವಡಿಸಿ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿದರು. ನಗರದ ಸರ್ಕಾರಿ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ ನುಸಾ ಫಾತೀಮಾ ಖಾನ್ ಸಂವಿಧಾನದ ಪ್ರತಿಜ್ಞಾವಿಧಿ ಬೋಧಿಸಿದರು. ಜಿಲ್ಲೆಯಲ್ಲಿ 18 ವರ್ಷ ತುಂಬಿದ ಯುವ ಮತದಾರರಿಗೆ ಮತದಾರರ ಗುರುತಿನ ಚೀಟಿ ವಿತರಿಸಲಾಯಿತು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಮತದಾನದಲ್ಲಿ ಪಾಲ್ಗೊಳ್ಳುವುದರ ಜತೆಗೆ ಸೆಲ್ಫಿ ಸ್ಪರ್ಧೆಯಲ್ಲಿ ವಿಜೇತರಾದ ಹಾಗೂ ಪ್ರಬಂಧ, ರಸಪ್ರಶ್ನೆ ಮತ್ತು ಭಿತ್ತಿಚಿತ್ರ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಇದಲ್ಲದೆ ರೇಷ್ಮೆ ಸೀರೆಯಲ್ಲಿ ಮತದಾನದ ಜಾಗೃತಿ ಮುದ್ರಿಸಿ ವಿತರಿಸಿದ ಕೊಳ್ಳೇಗಾಲದ ಕೈಮಗ್ಗ ನೇಕಾರರ ಸಂಘಕ್ಕೆ ಪ್ರಮಾಣಪತ್ರ, ಸ್ಮರಣಿಕೆಯೊಂದಿಗೆ ಪ್ರಥಮ, ದ್ವಿತೀಯ ಹಾಗೂ ತೃತಿಯ ಬಹುಮಾನ ವಿತರಿಸಲಾಯಿತು. ಅಧಿಕಾರಿಗಳಿಗೆ ಪ್ರಮಾಣಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು. ನಂತರ ಸಹಿ ಸಂಗ್ರಹ ಅಭಿಯಾನ ನಡೆಯಿತು.

ಜಿಲ್ಲಾಧಿಕಾರಿ ಶಿಲ್ಪಾನಾಗ್, ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್.ಶಶಿಧರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪಿ.ಲಕ್ಷ್ಮೀ, ತಹಸೀಲ್ದಾರ್ ಗಿರಿಜಾ, ಜಿಪಂ ಮುಖ್ಯ ಯೋಜನಾಧಿಕಾರಿ ದೀಪಾ ಇತರರು ಹಾಜರಿದ್ದರು.