ಬಾಗಲಕೋಟೆ: ಜಿಲ್ಲೆಯ ಲಿಂಗತ್ವ ಅಲ್ಪಸಂಖ್ಯಾತರು ಸಂಘಟಿತರಾಗುವ ಮೂಲಕ ತಾಲೂಕು ಮಟ್ಟದಲ್ಲಿ ಕೂಡ ಸಮಿತಿ ರಚಿಸುವ ಕೆಲಸವಾಗಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದ್ಯಾವಪ್ಪ ಎಸ್.ಬಿ. ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಲಿಂಗತ್ವ ಅಲ್ಪಸಂಖ್ಯಾತರ ಮತ್ತು ದಮನಿತ ಮಹಿಳೆಯರ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಲಿಂಗತ್ವ ಅಲ್ಪಸಂಖ್ಯಾತರ ಸಮಸ್ಯೆಗಳೇನು ಎಂಬುದು ಅವರಿಗೆ ಮಾತ್ರ ತಿಳಿದಿರುತ್ತವೆ. ಒಬ್ಬರು ಅಥವಾ ಇಬ್ಬರು ಸಮಸ್ಯೆಗಳನ್ನು ಹೇಳಿಕೊಂಡಾಗ ಸಮಸ್ಯೆಗಳಿಗೆ ಸ್ಪಂದನೆ ಸಿಗುವುದು ಕಡಿಮೆ. ಸಂಘಟಿತರಾದಲ್ಲಿ ಗಟ್ಟಿ ದ್ವನಿ ಸಿಗುತ್ತದೆ. ಲಿಂಗತ್ವ ಅಲ್ಪಸಂಖ್ಯಾತರು ಕೂಡ ಇತರರಂತೆ ಘನತೆಯ ಜೀವನ ನಡೆಸುತ್ತಿರುತ್ತಾರೆ ಎಂಬುದನ್ನು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.
ಪ್ರೌಡ ಶಾಲೆಯ ಹಂತದಲ್ಲಿಯೇ ದೈಹಿಕ ರಚನೆಯಲ್ಲಿ ಬದಲಾಗುವ ಲಕ್ಷಣಗಳು ಕಂಡುಬರುವದರಿಂದ ಶಾಲಾ ಹಂತದಲ್ಲಿ ಜಾಗೃತಿ ಮೂಡಿಸಬೇಕು. ಇದರಿಂದ ಇತರೆ ಮಕ್ಕಳು ಅಪಹಾಸ್ಯ ಮಾಡುವುದು ತಪ್ಪುವುದಲ್ಲದೇ ಅವರು ತಮ್ಮ ಮುಂದಿನ ಭವಿಷ್ಯದಲ್ಲಿ ಲಿಂಗತ್ವ ಅಲ್ಪಸಂಖ್ಯಾತರರನ್ನು ಸಹಜವಾಗಿ ಸ್ವೀಕರಿಸಲು ಸಹಕಾರಿಯಾಗುತ್ತದೆ. ಶಕ್ತಿ ಯೋಜನೆಯಡಿ ಬಸ್‌ಗಳಲ್ಲಿ ಓಡಾಡುವ ಸಂದರ್ಭದಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ತೊಂದರೆಯಾಗುತ್ತಿರುವುದು ಗಮನಕ್ಕೆ ಬಂದಿದ್ದು, ಅವರಿಗೂ ಉಚಿತ ಪ್ರಯಾಣಕ್ಕೆ ಅವಕಾಶವಿದೆ ಎಂಬ ಸಂದೇಶವಿರುವ ಬಿತ್ತಿ ಪತ್ರಗಳನ್ನು ಬಸ್‌ಗಳಲ್ಲಿ ಮತ್ತು ನಿಲ್ದಾಣದಲ್ಲಿ ಅಂಟಿಸುವ ವ್ಯವಸ್ಥೆಯಾಗಬೇಕು ಎಂದರು.
ಜಿಲ್ಲಾಧಿಕಾರಿ ಜಾನಕಿ ಕೆ. ಎಮ್. ಅವರು ಮಾತನಾಡಿ ಜಿಲ್ಲಾಧಿಕಾರಿಗಳಿಂದ ಲಿಂಗತ್ವ ಅಲ್ಪಸಂಖ್ಯಾತರಿಗೆ ಐಡಿ ಕಾರ್ಡ ಮತ್ತು ಪ್ರಮಾಣ ಪತ್ರ ನೀಡಲಾಗುತ್ತಿದ್ದು, ಇಲ್ಲಿಯವರೆಗೆ ೫೪ ಫಲಾನುಭವಿಗಳು ಮಾತ್ರ ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರ ಪಡೆದಿರುತ್ತಾರೆ. ಇನ್ನೂ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳು ಗುರುತಿನ ಚೀಟಿ, ಪ್ರಮಾಣ ಪತ್ರ ಪಡೆದು ಸರಕಾರಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಅಕ್ಕಮಹಾದೇವಿ ಕೆ. ಹೆಚ್. ಅವರು ಸಭೆಗೆ ಮಾಹಿತಿ ನೀಡಿ ಜಿಲ್ಲೆಯಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರ ಸಂಖ್ಯೆ ೨೦೨೫ ಇದ್ದು, ಇವರೆಲ್ಲರೂ ಬಾಗಲಕೋಟೆಯಲ್ಲಿರುವ ಮೀಲನ ಸಂಸ್ಥೆಯಲ್ಲಿ ನೋಂದಣಿಯಾಗಿರುತ್ತಾರೆ. ಸಂಜೀವಿನಿ ಯೋಜನೆಯಡಿ ಸಮುದಾಯ ಬಂಡವಾಳ ನಿಧಿಯಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರ ೩ ಸ್ವ ಸಹಾಯ ಸಂಘಗಳಿಗೆ ರೂ. ೧.೫೦ ಲಕ್ಷ ಸಾಲವನ್ನು ನೀಡಲಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಎನ್.ವಾಯ್.ಬಸರಿಗಿಡದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಯಶ್ರೀ ಎಮ್ಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಅಕ್ಕಮಹಾದೇವಿ ಕೆ.ಎಚ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮೀಲನ ಸಂಸ್ಥೆಯ ಪದಾಧಿಕಾರಿಗಳು ಇದ್ದರು.