ಜಿಲ್ಲೆ

ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ

ಹಾಸನ: ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಜಿಲ್ಲಾ ವಕೀಲರ ಸಂಘದ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.


ಕೋರ್ಟ್‌ನ ಕಾರ್ಯಕಲಾಪಗಳಿಂದ ಹೊರಗುಳಿದ ವಕೀಲರು, ನ್ಯಾಯಾಲಯದ ಆವರಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೈಕ್ ಜಾಥಾ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.


ಜಿಲ್ಲಾ ವಕೀಲ ಸಂಘದ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ ಮಾತನಾಡಿ, ಕರ್ನಾಟಕ ವಕೀಲರ ಪರಿಷತ್ತು ವತಿಯಿಂದ ರಾಜ್ಯ ಸರ್ಕಾರಕ್ಕೆ ಒಂದು ವರ್ಷದ ಹಿಂದೆ ವಕೀಲರ ಸಂರಕ್ಷಣಾ ಕಾಯ್ದೆಯ ಕರಡು ಪ್ರತಿಯನ್ನು ಸಲ್ಲಿಸಲಾಗಿದೆ. ಆದರೆ ಈ ಬಗ್ಗೆ ಮುಖ್ಯಮಂತ್ರಿ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಈ ಕರಡು ಪ್ರತಿಯನ್ನು ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಮಂಡನೆ ಮಾಡಿ ಉಭಯ ಸದನಗಳ ಒಪ್ಪಿಗೆ ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತ್ವರಿತವಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಸರ್ಕಾರಿ ನೌಕರರಿಗೆ ತೊಂದರೆಯಾದರೆ ಅವರ ರಕ್ಷಣೆಗೆ ಕಾಯ್ದೆ ಇದೆ. ಆದರೆ, ಸಾರ್ವಜನಿಕರ ಹಿತಕ್ಕಾಗಿ ಕೆಲಸ ಮಾಡುವ ವಕೀಲರ ಮೇಲೆ ಪದೇ ಪದೇ ಹಲ್ಲೆಯಾಗುತ್ತಿದೆ. ಸರ್ಕಾರದಿಂದ ವಕೀಲರಿಗೆ ರಕ್ಷಣೆ ಕೊಡಲು ಸಾಧ್ಯವಾಗುತ್ತಿಲ್ಲ. ಕೂಡಲೇ ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ತರಬೇಕು ಇಲ್ಲದಿದ್ದರೆ ರಾಜ್ಯದಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಜಿ.ರಂಗಸ್ವಾಮಿ, ಖಜಾಂಚಿ ಕೆ.ವಿ. ಲೋಹಿತ್, ಉಪಾಧ್ಯಕ್ಷ ಎಸ್.ಬಿ. ಮಂಜುನಾಥ್, ಜಂಟಿ ಕಾರ್ಯದರ್ಶಿ ಲಲಿತಾ ಹಾಗೂ ಸದಸ್ಯರು ಇದ್ದರು.