ಭಾಲ್ಕಿ ಹಿರೇಮಠ ಸಂಸ್ಥಾನದಲ್ಲಿ ನಾಡೋಜ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರ ಸಂಪಾದಕತ್ವದಲ್ಲಿ ಹೊರತಂದ ವಚನ ಪಾರಾಯಣ ಗ್ರಂಥವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಲೋಕಾರ್ಪಣೆಗೊಳಿಸಿದರು. ನಾಡೋಜ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು, ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು, ಶ್ರೀ ಶಿವಾನಂದ ಸ್ವಾಮೀಜಿ, ಶಶಿಧರ ಕೋಸಂಬೆ, ಗೋವಿಂದರಾವ ಬಿರಾದಾರ್, ಓಂಪ್ರಕಾಶ ರೊಟ್ಟೆ ಇದ್ದರು. 
ಜಿಲ್ಲೆ

ವಚನ ಸಾಹಿತ್ಯದಲ್ಲಿದೆ ಸಮಸ್ಯೆಗಳಿಗೆ ಪರಿಹಾರ

ಭಾಲ್ಕಿ: ಮನುಷ್ಯನ ಎಲ್ಲ ಸಮಸ್ಯೆಗಳಿಗೆ ವಚನ ಸಾಹಿತ್ಯದಲ್ಲಿ ಪರಿಹಾರ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ನಾಡೋಜ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ಸಂಪಾದಕತ್ವದಲ್ಲಿ ಪ್ರಕಟಗೊಂಡ ವಚನ ಪಾರಾಯಣ ಗ್ರಂಥವನ್ನು ಮಂಗಳವಾರ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಬಸವಾದಿ ಶರಣರು ಜಗತ್ತಿಗೆ ಸಮಾನತೆ ಸಂದೇಶ ಸಾರಿದರು. ವಚನ ಸಾಹಿತ್ಯದ ಎಲ್ಲ ಆಶಯಗಳು ಸಂವಿಧಾನದಲ್ಲಿ ಅಡಗಿವೆ. ಸಕಲ ಜೀವಾತ್ಮರಿಗೆ ಲೇಸನ್ನು ಬಯಸಿದ ೭೭೦ ಶರಣ ಶರಣೆಯರು ರಚಿಸಿರುವ ಸುಮಾರು ೩೦ ಸಾವಿರ ವಚನಗಳು ದಕ್ಕಿವೆ. ಉಳಿದ ಶರಣರ ವಚನಗಳಿಗೆ ಶೋಧ ನಡೆಯುತ್ತಿದೆ. ಶರಣರು ಮಾನವ ಕಲ್ಯಾಣಕ್ಕಾಗಿ ವಚನಗಳನ್ನು ರಚಿಸಿದ್ದಾರೆ. ಅವುಗಳನ್ನು ಉಳಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದರು.

ಮಾಜಿ ಶಾಸಕ ಪ್ರಕಾಶ ಖಂಡ್ರೆ ಮಾತನಾಡಿ, ನಾಡೋಜ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ತಮ್ಮ ಇಡೀ ಬದುಕು ಬಸವತತ್ವ ಪ್ರಚಾರ ಪ್ರಸಾರಕ್ಕಾಗಿ ಮೀಸಲಿಟ್ಟಿದ್ದಾರೆ. ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರು ತೋರಿರುವ ಮಾರ್ಗವನ್ನು ಅನುಸರಿಸಿ ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಉತ್ತಮ ಸೇವೆಗೈಯುತ್ತಿದ್ದಾರೆ ಎಂದು ತಿಳಿಸಿದರು.

ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷರಾದ ನಾಡೋಜ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ಸಾನ್ನಿಧ್ಯ ವಹಿಸಿ ಮಾತನಾಡಿದರು.

ನೇತೃತ್ವ ವಹಿಸಿದ್ದ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು ಮಾತನಾಡಿ, ನಾಡೋಜ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರ ಸಂಪಾದಕತ್ವದಲ್ಲಿ ಹೊರ ತಂದಿರುವ ವಚನ ಪಾರಾಯಣ ಗ್ರಂಥದಲ್ಲಿ ಎಲ್ಲ ಶರಣರ ವಚನಗಳನ್ನು ಸಂಗ್ರಹಿಸಲಾಗಿದೆ. ಈ ಗ್ರಂಥ ಪ್ರತಿದಿನ ವಚನ ಪಾರಾಯಣ ಮಾಡುವ ಬಸವ ಭಕ್ತರಿಗೆ ಅನುಕೂಲ ಆಗಲಿದೆ ಎಂದು ತಿಳಿಸಿದರು.

ಬಸವಕಲ್ಯಾಣ ಅನುಭವ ಮಂಟಪದ ಸಂಚಾಲಕ ಶ್ರೀ ಶಿವಾನಂದ ಸ್ವಾಮೀಜಿ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಗೋವಿಂದರಾವ ಬಿರಾದಾರ್, ವಿಶ್ವಕ್ರಾಂತಿ ದಿವ್ಯ ಪೀಠದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಇತರರಿದ್ದರು.

ನಾಡೋಜ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರ ಸಂಪಾದಕತ್ವದಲ್ಲಿ ಹೊರ ತಂದಿರುವ ವಚನ ಪಾರಾಯಣ ಗ್ರಂಥ ಅತ್ಯಂತ ಉಪಯುಕ್ತವಾಗಿದೆ. ಪ್ರತಿಯೊಬ್ಬರೂ ವಚನಗಳನ್ನು ಅಧ್ಯಯನ ಮಾಡುವುದನ್ನು ರೂಢಿಸಿಕೊಳ್ಳಬೇಕು.

| ಈಶ್ವರ ಖಂಡ್ರೆ ಜಿಲ್ಲಾ ಉಸ್ತುವಾರಿ ಸಚಿವ ಬೀದರ್

=====