ಬೆಳಗಾವಿ: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಸರ್ಕಾರದಲ್ಲಿ ಬದಲಾವಣೆ ತಂದಿದೆ. ಅದೇ ರೀತಿ ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಲು ದೇಶದಲ್ಲಿ ಬದಲಾವಣೆ ತರಲಿದೆ ಎಂದು ಕಾಂಗ್ರೆಸ್ ಯುವ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಯೋಚನೆ ಇಲ್ಲ. ವರಿಷ್ಠರು ಸೂಚಿಸಿದರೆ ಸ್ಪರ್ಧಿಸುತ್ತೇನೆ ಎಂದರು. ಕಾರ್ಯಕರ್ತರು ನಮ್ಮ ತಾಯಿ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ಚರ್ಚೆ ಮಾಡುತ್ತಿದ್ದಾರೆ. ಆದರೆ, ಪಕ್ಷದ ಮುಖಂಡರು ತೀರ್ಮಾನ ಕೈಗೊಳ್ಳುತ್ತಾರೆ ಎಂದರು.
ಗ್ರಾಮೀಣ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಹೆಚ್ಚು ಗಮನ ಹರಿಸುತ್ತೇವೆ. ಕಾಂಗ್ರೆಸ್‌ನ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತೇನೆ. ಬೆಳಗಾವಿಯಲ್ಲಿ ಗೃಹಲಕ್ಷ್ಮೀ ಯೋಜನೆ ಜಾರಿಯಾಗಬೇಕಿತ್ತು. ಆದರೆ, ಮೈಸೂರಿನಲ್ಲಿ ಆಗುತ್ತಿರುವುದಕ್ಕೆ ಬೇಸರವೇನಿಲ್ಲ. ಎರಡೂ ಸ್ಥಳಗಳು ಅಂತಿಮವಾಗಿ ಕರ್ನಾಟಕದಲ್ಲಿಯೇ ಇವೆ. ಇದು ದೇಶದ ಇತಿಹಾಸದಲ್ಲೇ ಅತಿ ದೊಡ್ಡ ಜನಪರ ಕಾರ್ಯಕ್ರಮ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.