ಜಿಲ್ಲೆ

ವಸತಿ ನಿಲಯಗಳಲ್ಲಿ ಸ್ವಚತೆ ಕಾಪಾಡಿ ಅಧಿಕಾರಿಗಳಿಗೆ ಎಡಿಸಿ ಕೆ.ಟಿ. ಶಾಂತಲಾ ಸೂಚನೆ

ಹಾಸನ:  ವಸತಿ ನಿಲಯಗಳಲ್ಲಿ ಸ್ವಚ್ಛತೆ ಕಾಪಾಡುವ ಮೂಲಕ ವಿದ್ಯಾರ್ಥಿಗಳ ಆರೋಗ್ಯವನ್ನು ಕಾಪಾಡುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಕೆ.ಟಿ ಶಾಂತಲಾ ಅವರು ಸೂಚನೆ ನೀಡಿದರು.

ಹಾಸನ ನಗರದ ಡಾ. ಬಿ.ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ಮತ್ತು ಡಿ. ದೇವರಾಜ ಅರಸ್ ಮೆಟ್ರಿಕ್ ನಂತರದ ಮಾದರಿ ಬಾಲಕರ ವಿದ್ಯಾರ್ಥಿ ನಿಲಯಗಳಿಗೆ ಮಂಗಳವಾರ ಭೇಟಿ ನೀಡಿದ ಅವರು ವಸತಿ ನಿಲಯಗಳ ಅಡುಗೆ ಕೋಣೆ, ವಿದ್ಯಾರ್ಥಿಗಳ ಕೊಠಡಿಗಳು, ಶೌಚಾಲಯ, ಗ್ರಂಥಾಲಯ, ಕಂಪ್ಯೂಟರ್ ಕೊಠಡಿಗಳನ್ನು ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಸಲಹೆ ಸೂಚನೆಗಳನ್ನು ಸೂಚಿಸಿದರು. ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಉತ್ತಮ ಪೌಷ್ಟಿಕ ಆಹಾರ ನೀಡುವುದರ ಜತೆಗೆ ಹಾಲು, ಮೊಟ್ಟೆ, ಬಾಳೆಹಣ್ಣು ನೀಡುವಂತೆ ತಿಳಿಸಿದರು.

ವಿದ್ಯಾರ್ಥಿಗಳೊಂದಿಗೆ ಸಂವಾದ

ವಿದ್ಯಾರ್ಥಿಗಳೊಂದಿಗೆ ಮಾತನಾಡಿ ಕೆ.ಟಿ. ಶಾಂತಲಾ, ಉತ್ತಮ ಪೌಷ್ಠಿಕ ಆಹಾರ, ಗ್ರಂಥಾಲಯ ವ್ಯವಸ್ಥೆ, ದಿನ ಪತ್ರಿಕೆ ಸೇರಿದಂತೆ ಎಲ್ಲ ರೀತಿಯ ಸೌಲಭ್ಯಗಳು ದೊರೆಯುತ್ತಿರುವ ಬಗ್ಗೆ ಖಾತ್ರಿಪಡಿಸಿಕೊಂಡರು. ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ಕೊಠಡಿಗಳು, ವಸತಿ ನಿಲಯಗಳ ಆವರಣಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವಂತೆ ತಿಳಿಸಿದರಲ್ಲದೆ, ಸರ್ಕಾರ ನೀಡುವ ಎಲ್ಲ ಸವಲತ್ತುಗಳನ್ನು ಸದುಪಯೋಗಪಡಿಸಿಕೊಂಡು ಕಲಿಕೆಯ ಕಡೆ ಹೆಚ್ಚಿನ ಗಮನಹರಿಸಬೇಕು ಎಂದರು.

ಸಂವಿಧಾನ ದಿನದ ಪ್ರಯುಕ್ತ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ನಂತರ ಸಂವಿಧಾನ ಪೀಠಿಕೆ ಬೋಧಿಸಿದರು. ಸಂವಿಧಾನವನ್ನು ಓದುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕೊಡುಗೆ ದೇಶಕ್ಕೆ ಅಪಾರ. ಪ್ರತಿಯೊಬ್ಬ ವಿದ್ಯಾರ್ಥಿಯು ಅವರ ಜೀವನ ಚರಿತ್ರೆಯನ್ನು ಓದಿ, ಅವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ತಿಳಿಸಿದರು.

ಹಾಸನ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಎಚ್.ಡಿ. ಗಿರೀಶ್ ಅವರು ಮಾತನಾಡಿ, ಅಂಬೇಡ್ಕರ್ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ಅವರ ಚಿಂತನೆಗಳು ಇಂದಿಗೂ ಪ್ರಸ್ತುತ. ವಿದ್ಯಾರ್ಥಿಗಳು ಓದಿಗೆ ಹೆಚ್ಚಿನ ಒತ್ತನ್ನು ನೀಡುವುದರ ಜತೆಗೆ ಶಿಸ್ತು, ಸಂಯಮ, ಮಾನವೀಯ ಗುಣಗಳನ್ನು ಬೆಳೆಸಿಕೊಂಡು ಜೀವನದಲ್ಲಿ ಉನ್ನತ ಸ್ಥಾನಕ್ಕೆ ಬೆಳೆಯಬೇಕು ಎಂದು ಕರೆ ನೀಡಿದರು.

ಇದೇ ವೇಳೆ ಹಾಸನ ತಾಲೂಕು ಪಂಚಾಯಿತಿಯ ಸಹಾಯಕ ನಿರ್ದೇಶಕ ದಿನೇಶ್, ತಾಲೂಕು ಮಟ್ಟದ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ, ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಹಾಗೂ ಮತ್ತಿತರರು ಹಾಜರಿದ್ದರು.