ಜಿಲ್ಲೆ

ವಸತಿ ಸಚಿವ ಜಮೀರ್ ಅಹಮದ್ ಖಾನ್ ವಜಾಕ್ಕೆ ಒತ್ತಾಯ

ಚಿತ್ರದುರ್ಗ: ವಸತಿ ಯೋಜನೆಯಡಿ ಭ್ರಷ್ಟಾಚಾರ ನಡೆದಿದೆ ಎಂಬ ಸ್ವಪಕ್ಷದ ಶಾಸಕರ ಆರೋಪದ ಹಿನ್ನೆಲೆಯಲ್ಲಿ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಪ್ರವಾಸಿ ಮಂದಿರದಿಂದ ಡಿಸಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಒನಕೆ ಓಬವ್ವ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹಮದ್‌ಖಾನ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪಕ್ಷದ ಜಿಲ್ಲಾಧ್ಯಕ್ಷ ಎಂ. ಜಯಣ್ಣ ಮಾತನಾಡಿ, ಮನೆಗಳ ಹಂಚಿಕೆಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಕಾಂಗ್ರೆಸ್ಸಿನ ಹಿರಿಯ ಶಾಸಕರು ಆಪಾದಿಸಿದ್ದಾರೆ. ಬಿಟ್ಟಿ ಭಾಗ್ಯಗಳನ್ನು ನೀಡಿ ಜನರನ್ನು ಮರಳು ಮಾಡುತ್ತಿರುವ ಸಿದ್ದರಾಮಯ್ಯ ಅವರ ಆಡಳಿತದಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ. ಜಮೀರ್ ಅಹಮದ್‌ಖಾನ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಬೇಕು ಎಂದರು.

ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡಬಾರದು ಎಂದು ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದರು.

ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಡಿ.ಯಶೋದರ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗಿವೆ. ಶ್ರೀ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂ. ಲೂಟಿ ಹೊಡೆಯಲಾಗಿದೆ. ಮುಡಾ ಹಗರಣದಲ್ಲಿ ಭಾಗಿಯಾಗಿರುವ ಸಿದ್ದರಾಮಯ್ಯರಿಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ. ಕೂಡಲೇ ಅವರು ಹಾಗೂ ವಸತಿ ಸಚಿವರು ರಾಜೀನಾಮೆ ಕೊಡ ಬೇಕೆಂದು ಆಗ್ರಹಿಸಿದರು.

ಅಧಿಕಾರಕ್ಕಾಗಿ ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಶುರವಾಗಿದೆ. ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಲ್ಲ ಒಂದು ರೀತಿಯ ಹಗರಣದಲ್ಲಿ ಕಾಂಗ್ರೆಸ್ ಸರ್ಕಾರ ಸಿಲುಕಿಕೊಂಡಿದೆ. ವಸತಿ ಇಲಾಖೆ ವಿರುದ್ಧದ ಭ್ರಷ್ಟಾಚಾರ ಆರೋಪ ಕುರಿತು ಸಂಪೂರ್ಣ ತನಿಖೆಯಾಗಬೇಕು. ಮುಂಬರುವ ಎಲ್ಲ್ಲ ಚುನಾವಣೆಗಳಲ್ಲೂ ಜನರು ಕಾಂಗ್ರೆಸ್ ಸೋಲಿಸಬೇಕು ಎಂದು ಮನವಿ ಮಾಡಿದರು.

ಹಿರಿಯೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ರವೀಂದ್ರಪ್ಪ ಮಾತನಾಡಿದರು. ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ಜಿ.ಬಿ. ಶೇಖರ್, ಮಹಾ ಪ್ರಧಾನ ಕಾರ್ಯದರ್ಶಿ ಡಿ. ಗೋಪಾಲಸ್ವಾಮಿ ನಾಯಕ, ವಿವಿಧ ತಾಲೂಕುಗಳ ಅಧ್ಯಕ್ಷರಾದ ತಿಮ್ಮಣ್ಣ, ಪಿ.ಟಿ.ತಿಪ್ಪೇಸ್ವಾಮಿ, ಹನುಮಂತರಾಯಪ್ಪ, ಪರಮೇಶ್ವರಪ್ಪ, ಗಣೇಶ್, ವೀರಭದ್ರಣ್ಣ, ಶಿವಶಂಕರ್, ನಗರಸಭೆ ಸದಸ್ಯರಾದ ಸೈಯದ್‌ನಸ್ರುಲ್ಲಾ, ದೀಪಕ್, ಮಾಜಿ ಸದಸ್ಯ ತಿಪ್ಪೇಸ್ವಾಮಿ, ಜಾಲಿಕಟ್ಟೆ ರುದ್ರಣ್ಣ, ಲಿಂಗರಾಜು ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಕೋಟ್ಸ್

ಬಡವರಿಗೆ ಮನೆಗಳನ್ನು ಹಂಚಲು ಹಣ ಪಡೆಯಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಜಮೀರ್ ಆಹ್ಮದ್‌ಖಾನ್‌ರನ್ನು ಸಂಪುಟದಿಂದ ವಜಾಗೊಳಿಸಬೇಕು. ಉತ್ತಮ ಆಡಳಿತ ನಿರೀಕ್ಷೆಯನ್ನು ಕಾಂಗ್ರೆಸ್ ಹುಸಿಗೊಳಿಸಿದೆ. ಭ್ರಷ್ಟಾಚಾರ ವ್ಯಾಪಕವಾಗಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ಸಿಗೆ 50 ಸ್ಥಾನ ಗೆಲ್ಲಲು ಸಾಧ್ಯವಿಲ್ಲ.

ಬಿ. ಕಾಂತರಾಜ್, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ