ಹಾಸನ: ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಪಿ.ಚಂದ್ರಶೇಖರನ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರ ಹೆಸರು ಕೇಳಿಬಂದಿದ್ದು, ತಕ್ಷಣವೇ ಅವರು ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ಜಿ.ಟಿ.ದೇವೇಗೌಡ ಆಗ್ರಹಿಸಿದರು.
ಕಾಂಗ್ರೆಸ್‌ನ ನಾಯಕರು ಬಿಜೆಪಿ ಸರ್ಕಾರದ ವಿರುದ್ಧ ಶೇ. 40 ಕಮಿಷನ್ ಆರೋಪ ಮಾಡಿದ್ದರು. ಆದರೆ ಈಗ ಕಾಂಗ್ರೆಸ್‌ನ ಅವಧಿಯಲ್ಲೇ ಭ್ರಷ್ಟಾಚಾರಕ್ಕೆ ಬೇಸತ್ತು ಅಧಿಕಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್‌ನೋಟ್‌ಲ್ಲಿ ಸಚಿವರ ಹೆಸರನ್ನು ಉಲ್ಲೇಖಿಸಿದ್ದಾರೆ. ಆರೋಪ ಕೇಳಿಬಂದ ತಕ್ಷಣವೇ ನಾಗೇಂದ್ರ ಅವರಿಂದ ರಾಜೀನಾಮೆ ಪಡೆಯಬೇಕಿತ್ತು ನಗರದ ಅಶೋಕ ಹೋಟೆಲ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕಾಂಗ್ರೆಸ್ ಸರ್ಕಾರಕ್ಕೆ ವಿರೋಧ ಪಕ್ಷಗಳು ಏನೇ ಒತ್ತಾಯಿಸಿದರು ಗಂಭೀರವಾಗಿ ಪರಿಗಣಿಸುವುದಿಲ್ಲ. ಬೋರ್ಗಲ್ಲ ಮೇಲೆ ಮಳೆ ಸುರಿದಂತೆ
ಅವರು ಏನು ಮಾಡ್ತಾರೆ ಅದನ್ನೇ ಮಾಡೋದು.ಕಾಂಗ್ರಸ್ ಮಾಡಿದ್ದಾರೆ ಅದು ತಪ್ಪಲ್ಲ,ಆದರೆ ಬೇರೆಯವರು ಮಾಡಿದ್ದಾರೆ ತಪ್ಪು ಎಂದು ಕಾಂಗ್ರಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರ್ಕಾರದ ವಿರುದ್ಧ ಯಾರೋ ಕೇರಳದಲ್ಲಿ ಕುಳಿತು ಶತ್ರು ಭೈರವಿ ಯಾಗ ಮಾಡಿಸುತ್ತಿದ್ದಾರೆಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆರೋಪ ಮಾಡುವ ಡಿಕೆಶಿಗೆ ಈ ಯಾಗ, ಪೂಜೆಗಳ ಬಗ್ಗೆ ಚೆನ್ನಾಗಿ ಗೊತ್ತಿದೆ. ಅವರೇ ಅದು ಏನೆಂದು ಹೇಳಬೇಕು. ಆದರೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕುಟುಂಬ ಸಮೇತ ಮಡಿಕೇರಿಯಲ್ಲಿದ್ದಾರೆ. ಅವರ ವಾಸ್ತವ್ಯಕ್ಕೂ ಯಾಗಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಟಾಂಗ್ ನೀಡಿದರು.
ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ವಿವೇಕಾನಂದ ಸ್ಪರ್ಧಿಸಿದ್ದಾರೆ. ಜಿಲ್ಲೆಯ ಶಿಕ್ಷಕ ಮತದಾರರು ಅವರಿಗೆ ಪ್ರಥಮ ಪ್ರಾಶಸ್ತ್ಯ ಮತ ನೀಡಬೇಕು. ಹಾಲಿ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಕೆಲಸ ಮಾಡಿ ಈಗ ಅಧಿಕೃತವಾಗಿ ಜೆಡಿಎಸ್ ತೊರೆದು ಆ ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಆದರೆ ಕಾಂಗ್ರೆಸ್‌ನ ಮೂಲ ಕಾರ್ಯಕರ್ತರು ಮರಿತಿಬ್ಬೇಗೌಡರ ಬಗ್ಗೆ ಅಸಮಾಧಾನ ಹೊಂದಿದ್ದಾರೆ. ಬಿಜೆಪಿ ಹಾಗು ಜೆಡಿಎಸ್ ಆಡಳಿತಾವಧಿಯಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಹೀಗಾಗಿ ನಮ್ಮ ಅಭ್ಯರ್ಥಿ ವಿವೇಕಾನಂದ ಅವರು ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹಾಸನದಲ್ಲಿ ಗುರುವಾರ ಸಾವಿರಾರು ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯ ಮೂಲ ಉದ್ದೇಶ ಪ್ರಜ್ವಲ್ ಬಂಧನವಾಗಬೇಕು ಹಾಗು ಪೆನ್ ಡ್ರೈವ್ ಹಂಚಿದವರಿಗೆ ಶಿಕ್ಷೆಯಾಗಬೇಕು ಎನ್ನುವುದಾಗಿತ್ತು. ಈಗ ಪ್ರಜ್ವಲ್ ಅವರನ್ನು ಬಂಧಿಸಿದ್ದಾರೆ. ಇನ್ನು ಪೆನ್‌ಡ್ರೈವ್ ಹಂಚಿದವರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಬೇಕಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸಂತ್ರಸ್ತೆಯರು ಕೇವಲ ಜೆಡಿಎಸ್ ಪಕ್ಷದ ಕಾರ್ಯಕರ್ತೆಯರು ಅಥವಾ ಸಂಬಂಧಿಕರು ಎಂದು ವರ್ಗಿಕರಿಸುವುದು ಸರಿಯಲ್ಲ. ಸಂತ್ರಸ್ತ ಮಹಿಳೆಯರ ಪರವಾಗಿ ಜೆಡಿಎಸ್ ಯಾವಾಗಲೂ ಇರುತ್ತದೆ. ಎಸ್‌ಐಟಿ ತನಿಖೆ ಪೂರ್ಣಗೊಳ್ಳುವವರೆಗೆ ನಾವು ಏನನ್ನೂ ಹೇಳಲು ಸಾಧ್ಯವಿಲ್ಲ. ಈ ಘಟನೆಯಿಂದ ನಮಗೆ ಯಾವುದೇ ಮುಜುಗರವಾಗಿಲ್ಲ ಎಂದರು.
ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಸಿ.ಎನ್.ಬಾಲಕೃಷ್ಣ, ಎಚ್.ಪಿ.ಸ್ವರೂಪ್, ಮಾಜಿ ಶಾಸಕರಾದ ಎಚ್.ಕೆ.ಕುಮಾರಸ್ವಾಮಿ, ಕೆ.ಎಸ್.ಲಿಂಗೇಶ್, ಮುಖಂಡ ಎನ್.ಆರ್.ಸಂತೋಷ್, ಜೆಡಿಎಸ್ ಜಿಲ್ಲಾ ಮಾಧ್ಯಮ ವಕ್ತಾರ ಹೊಂಗೆರೆ ರಘು ಇದ್ದರು.
ಪ್ರಜ್ವಲ್ ಬಂಧನದಿಂದಮುಜುಗರ ಇಲ್ಲ:
ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ಪ್ರಕರಣದಿಂದ ಪಕ್ಷಕ್ಕೆ ಯಾವುದೇ ಹಿನ್ನಡೆ ಆಗಿಲ್ಲ ಹಾಗು ನಮಗೆ ಮುಜುಗರವೂ ಇಲ್ಲ. ಅಶ್ಲೀಲ ವಿಡಿಯೋ ಪ್ರಕರಣ ವ್ಯಕ್ತಿಯೊಬ್ಬರಿಗೆ ಸಂಬಂಧಿಸಿದ ವಿಚಾರವಾಗಿದೆ. ಒಬ್ಬ ವ್ಯಕ್ತಿಗೆ ಅಂಟಿರುವ ಕಳಂಕವನ್ನು ಇಡೀ ಪಕ್ಷಕ್ಕೆ ಅಂಟಿದೆ ಎಂದು ಭಾವಿಸುವುದು ಸರಿಯಲ್ಲ. ಗಂಭೀರ ಆರೋಪ ಕೇಳಿಬಂದ ತಕ್ಷಣವೇ ಪ್ರಜ್ವಲ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಎಸ್‌ಐಟಿ ತನಿಖೆಯನ್ನು ನಾವು ಸ್ವಾಗತಿಸಿದ್ದೇವು. ಸಂಸದ ಪ್ರಜ್ವಲ್‌ರನ್ನು ಬಂಧಿಸುವಂತೆ ಜೆಡಿಎಸ್‌ನ ಎಲ್ಲಾ ನಾಯಕರು ಆಗ್ರಹಿಸಿದ್ದೆವು. ಈಗ ಅವರ ಬಂಧನವಾಗಿದ್ದು ಎಸ್‌ಐಟಿ ಅಧಿಕಾರಿಗಳು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದರು.
ಅಶ್ಲೀಲ ವಿಡಿಯೋ ವಿಚಾರದಲ್ಲಿ ಉಪ್ಪು ತಿಂದ ಮೇಲೆ ನೀರು ಕುಡಿಯಲೇಬೇಕು, ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೊದಲೇ ಹೇಳಿದ್ದರು. ತಪ್ಪಿತಸ್ಥರನ್ನು ವಹಿಸಿಕೊಳ್ಳುವ ಕೆಲಸವನ್ನು ನಾವು ಮಾಡುವುದಿಲ್ಲ. ನೆಲದ ಕಾನೂನಿಗೆ ಗೌರವ ಕೊಡುತ್ತೇವೆ. ಪ್ರಕರಣದ ಸಂಪೂರ್ಣ ವಿಚಾರಣೆ ನಡೆದು ಸತ್ಯಾಸತ್ಯತೆ ಹೊರಗೆ ಬರಲಿ ಎಂದರು.