ಕುಶಾಲನಗರ: ವಿಜ್ಞಾನ ಮನುಷ್ಯನ ಬದುಕಿನ ಅವಿಭಾಜ್ಯ ಅಂಗವಾಗಿದ್ದು, ವಿದ್ಯಾರ್ಥಿಗಳು ವಿಜ್ಞಾನ ವಿಷಯದಲ್ಲಿ ಹೆಚ್ಚಿನ ಅಧ್ಯಯನ ಕೈಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಮಂಗಳೂರು ವಿಶ್ವವಿದ್ಯಾಲಯ (ಬಿ.ಎಡ್.ಕಾಲೇಜು) ಉಪನ್ಯಾಸಕ ಎಚ್.ಬಿ.ಶಿವಾನಂದ ಕರೆ ನೀಡಿದರು.
ಬೆಂಗಳೂರಿನ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತುಸಂಗ್ರಹಾಲಯ, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಗುರುವಾರ ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಹಾಗೂ ನಾಟಕ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಸ್ಪರ್ಧಾ ಮನೋಭಾವದೊಂದಿಗೆ ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು ಎಂದರು.
ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ವಿ.ಮಂಜೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಿರಿಧಾನ್ಯಗಳ ಮಹತ್ವ ಕುರಿತು ವಿವರಿಸಿದರು. ವಿದ್ಯಾರ್ಥಿಗಳು ವಿಜ್ಞಾನದ ಬಗ್ಗೆ ಆಸಕ್ತಿ ವಹಿಸುವಂತೆ ಕರೆ ನೀಡಿದರು.
ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಕೆ.ಬಿ.ರಾಧಾಕೃಷ್ಣ ಮಾತನಾಡಿದರು.
ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಬಿ.ಎನ್. ಪುಷ್ಪಾ ಸೇರಿದಂತೆ ವಿವಿಧ ಶಾಲೆಯ ಮುಖ್ಯ ಶಿಕ್ಷಕರು ಭಾಗವಹಿಸಿದ್ದರು.