ಹಾಸನ : ವಿದ್ಯಾರ್ಥಿ ವೇತನ ಮಂಜೂರು ಮಾಡುವಂತೆ ಒತ್ತಾಯಿಸಿ ಸೋಮವಾರ ಬಿ.ಇಡಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸರ್ಕಾರಿ ಸೀಟ್ ಪಡೆದವರಿಗೆ ವಿದ್ಯಾರ್ಥಿವೇತನ ನೀಡಿ, ಪೇಮೆಂಟ್ ಸೀಟ್ ಪಡೆದವರನ್ನು ಕಡೆಗಣಿಸಲಾಗಿದೆ. ವಿದ್ಯಾರ್ಥಿ ವೇತನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿರುವ ಅನುಮಾನವಿದ್ದು, ಪ್ರಥಮ ವರ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮಾಡದೆ ಇರುವುದರಿಂದ ಸಮಸ್ಯೆ ಎದುರಾಗಿದ್ದು, ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ವಿದ್ಯಾರ್ಥಿ ವೇತನ ಬಂದಿಲ್ಲವೆಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಲಾಗಿದ್ದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಬಿಇಡಿ ವ್ಯಾಸಂಗ ಮಾಡುತ್ತಿದ್ದು, ವಿದ್ಯಾರ್ಥಿ ವೇತನ ಬಿಡುಗಡೆಯಿಂದ ಆರ್ಥಿಕ ಹೊರೆ ತಗ್ಗಲಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಗಮನಹರಿಸಿ ವಿದ್ಯಾರ್ಥಿ ವೇತನ ಬಿಡುಗಡೆ ಮಾಡುವ ನಿಟ್ಟಿನಲ್ಲಿ ಗಮನ ಹರಿಸಬೇಕು ಎಂದು ಮನವಿ ಮಾಡಿದರು.
ವಿದ್ಯಾರ್ಥಿ ವೇತನ ಅನೇಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಆಗಲಿದೆ ಆದ್ದರಿಂದ ಜಿಲ್ಲಾಧಿಕಾರಿಗಳು ಕೂಡಲೇ ಮಧ್ಯೆ ಪ್ರವೇಶ ಮಾಡಿ ವಿದ್ಯಾರ್ಥಿ ವೇತನ ಬಿಡುಗಡೆ ಮಾಡುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಮನವಿ ಮಾಡಿದರು.