ಸರಗೂರು: ಸಾಮಾಜಿಕ ಬದಲಾವಣೆ ವಿದ್ಯಾರ್ಥಿಗಳಿಂದ ಮಾತ್ರ ಸಾಧ್ಯವಿದ್ದು, ವಿದ್ಯಾರ್ಥಿಗಳಿಗೆ ಪಠ್ಯದ ಜತೆಗೆ ಕಾನೂನುಗಳ ಅರಿವು ಇರಬೇಕು ಎಂದು ಸರ್ಕಲ್ ಇನ್ಸ್‌ಪೆಕ್ಟರ್ ಎಂ.ಲಕ್ಷ್ಮೀಕಾಂತ್ ಅಭಿಪ್ರಾಯಪಟ್ಟರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ಮಕ್ಕಳ ಹಕ್ಕುಗಳು ಹಾಗೂ ಪೋಕ್ಸೊ ಕಾಯ್ದೆ-2012ರ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. 1989ರಲ್ಲಿ ವಿಶ್ವಸಂಸ್ಥೆ ಮಕ್ಕಳ ಹಕ್ಕುಗಳ ಒಡಂಬಡಿಕೆಯನ್ನು ಅಂಗೀಕರಿಸಿ ಜಾರಿಗೆ ತಂದಿದೆ. ಆದರೆ ಮಕ್ಕಳಿಗೆ ಸಿಗಬೇಕಾಗಿರುವ ಹಕ್ಕುಗಳು ಸರಿಯಾಗಿ ಸಿಗುತ್ತಿಲ್ಲ. ವಿಶ್ವದಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಮಾಣ ಹೆಚ್ಚಾಗುತ್ತಿವೆ. ಇಂದಿನ ಶಿಕ್ಷಣವು ಅಂಕಗಳಿಗೆ ಸೀಮಿತವಾಗಿದೆ. ಮಾನವೀಯ ಮೌಲ್ಯಗಳು, ಬದುಕನ್ನು ರೂಪಿಸುವ ಶಿಕ್ಷಣದ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಯುವಕರು ಮಾದಕ ವಸ್ತುಗಳ ಸೇವನೆಯಿಂದ ದೂರ ಇರಬೇಕು. ಭಾರತೀಯ ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಗೌರವಯುತವಾದ ಸ್ಥಾನವಿದೆ. ಹುಟ್ಟಿನಿಂದ ಕೊನೆಯವರೆಗೆ ಅವರನ್ನು ರಕ್ಷಿಸಲು ಅನೇಕ ಕಾನೂನುಗಳನ್ನು ಹೆಣ್ಣು ಮಕ್ಕಳಿಗಾಗಿಯೇ ತರಲಾಗಿದೆ. ಹೆಣ್ಣು ಮಕ್ಕಳು ಶಿಕ್ಷಣವಂತರಾಗಿ ಸ್ವಂತ ಉದ್ಯೋಗ ಹೊಂದುವುದರೊಂದಿಗೆ ಆರ್ಥಿಕವಾಗಿ ಸಬಲರಾಗಿ ಸ್ವಾವಲಂಬಿಗಳಾಗಬೇಕು ಎಂದ ಅವರು, ವೀರರಾಣಿ ಕಿತ್ತೂರು ಚೆನ್ಮಮ್ಮ, ರಾಣಿ ಅಬ್ಬಕ್ಕ ಸೇರಿದಂತೆ ವೀರ ವನಿತೆಯರ ಧೈರ್ಯ ಸಾಹಸ ಪ್ರವೃತ್ತಿ ಪ್ರತಿಯೊಬ್ಬ ಹೆಣ್ಣುಮಕ್ಕಳು ರೂಢಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಸಬ್ ಇನ್ಸ್‌ಪೆಕ್ಟರ್ ಶ್ರಾವಣ ದಾಸರೆಡ್ಡಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಹೆಣ್ಣು ಮಕ್ಕಳು ವಿದ್ಯಾವಂತರಾಗಿ ವಿಶ್ವದ ಪ್ರತಿಯೊಂದು ಕ್ಷೇತ್ರದಲ್ಲಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳು ಶೇ.90 ರಷ್ಟು ಈಗಾಗಲೇ ಕಡಿಮೆಯಾಗಿದೆ. ಆದರೆ ಸಾಮಾಜಿಕ ಜಲತಾಣಗಳ ಮೂಲಕ ಹೆಣ್ಣು ಮಕ್ಕಳ ಮೇಲಿನ ಸೈಬರ್ ಅಪರಾಧಗಳು ಹೆಚ್ಚುತ್ತಿವೆ. ಈ ಬಗ್ಗೆ ಹೆಣ್ಣುಮಕ್ಕಳು ಹಾಗೂ ಪಾಲಕರು ಜಾಗೃತರಾಗಿರಬೇಕು. ತಂತ್ರಜ್ಞಾನದ ಬಳಕೆಯೊಂದಿಗೆ ನೆಟ್‌ಬ್ಯಾಂಕಿಂಗ್‌ನಲ್ಲಿ ಹಣವನ್ನು ಲಪಟಾಯಿಸುವುದು ಸೇರಿದಂತೆ ವೈಯಕ್ತಿಕ ಮಾಹಿತಿಗಳನ್ನು ಹ್ಯಾಕ್ ಮಾಡುವ ಸಾಧ್ಯತೆಗಳಿರುತ್ತವೆ. ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.
ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು, ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.