ಶನಿವಾರಸಂತೆ: ವಿದ್ಯಾರ್ಥಿಗಳಿಗೆ ಪಾಲಕರು ಮತ್ತು ಶಿಕ್ಷಕರು ರಾಷ್ಟ್ರಪ್ರೇಮ, ಸಂಸ್ಕಾರ ಹಾಗೂ ಮಾನವಿಯ ಮೌಲ್ಯಗಳನ್ನು ಕಲಿಸಬೇಕು ಎಂದು ಶನಿವಾರಸಂತೆ ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಮತ್ತು ನಿವೃತ್ತ ಸೈನಿಕಾಧಿಕಾರಿ ಎ.ಎಸ್.ಮಹೇಶ್ ಸಲಹೆ ನೀಡಿದರು.
ಶನಿವಾರಸಂತೆ ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ 13ನೇ ವಾರ್ಷಿಕೋತ್ಸವ ಹಾಗೂ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಪ್ರತಿಭಾ ಪುರಷ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ಪಠ್ಯ ಮತ್ತು ಪಠ್ಯೇತರ ಶಿಕ್ಷಣದ ಜತೆಯಲ್ಲಿ ಸೈನಿಕರು, ಪೊಲೀಸರ ಕರ್ತವ್ಯ, ಕೈಗಾರಿಖೆಗಳ ಉದ್ದೇಶ, ಇತರೆ ಕ್ಷೇತ್ರಗಳ ಬಗ್ಗೆ ಮನವರಿಕೆ ಮಾಡುವ ಮೂಲಕ ನಮ್ಮ ದೇಶ ಅಭಿವೃದ್ಧಿಗೊಳ್ಳುತ್ತಿರುವ ಮಾನವ ಸಂಪನ್ಮೂಲ ವ್ಯವಸ್ಥೆ ಪರಿಚಯ ಮಾಡಿಕೊಡಬೇಕು. ಪಾಲಕರು ತಮ್ಮ ಮಕ್ಕಳಿಗೆ ದೇಶಭಕ್ತಿ, ಮಾನವಿಯ ಮೌಲ್ಯ, ನಮ್ಮ ದೇಶದ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಕಲಿಸಿದರೆ ಭವಿಷ್ಯದಲ್ಲಿ ವಿದ್ಯಾರ್ಥಿಗಳು ದೇಶದ ಸಂಸ್ಕಾರವಂತ ವ್ಯಕ್ತಿಯಾಗಿ ಬೆಳೆದು ದೇಶಕ್ಕೆ ಮತ್ತು ಸಮಾಜಕ್ಕೆ ಕೀರ್ತಿ ತರುತ್ತಾರೆ ಎಂದರು.
ಶನಿವಾರಸಂತೆ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಸಿ.ಕೆ.ದಿನೇಶ್ ಮಾತನಾಡಿ, ಜೀವನದಲ್ಲಿ ಶಿಕ್ಷಣ ಪ್ರಮುಖವಾಗಿದ್ದು, ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ವಿದ್ಯಾವಂತರಾಗುವ ಮೂಲಕ ರಾಷ್ಟ್ರದ ಪ್ರಗತಿಗೆ ಶ್ರಮಿಸಬೇಕು. ವಿದ್ಯಾರ್ಥಿಗಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಮಾನವಾಗಿ ತೊಡಗಿಸಿಕೊಳ್ಳುವಂತೆ ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಷ್ಕಾರ ನೀಡಿ ಗೌರವಿಸಲಾಯಿತು. ಸುಪ್ರಜ ಗುರುಕುಲ ವಿದ್ಯಾಸಂಸ್ಥೆ ಪ್ರಾಂಶುಪಾಲೆ ಡಿ.ಸುಜಲಾದೇವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಕ್ಯಾಪ್ಟನ್ ಯಶ್ವಂತ್‌ಕುಮಾರ್ ಇತರರಿದ್ದರು.