ಹಾಸನ : ಸಾಧನೆಗೆ ಗುರಿ ಮುಖ್ಯ ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಹೊಳೆನರಸಿಪುರದ ಸರ್ಕಾರಿ ಗೃಹ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಪಿ.ಆರ್.ಶಿವಕುಮಾರ್ ಹೇಳಿದರು.
ನಗರದ ಗಂಧದಕೋಠಿ ಆವರಣದಲ್ಲಿರುವ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತಿಚೆಗೆ ಪ್ಲೆಸ್ಮೆಂಟ್ ಸೆಲ್ ವತಿಯಿಂದ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ನಡೆದ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವ ತಯಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿ ಗುರಿ ಇದ್ದರೆ ಸಾಗುವ ಸಾರಿ ಸುಲಭವಾಗಲಿದೆ. ಗುರಿ ಇಲ್ಲದೆ ಸಾಧನೆ ಮಾಡಲು ಸಾಧ್ಯವಿಲ್ಲ ಎಂದು ವಿದೈಆರ್ಥಿಗಳಿಗೆ ಕಿವಿ ಮಾತು ಹೇಳಿದರು.
ವಿದ್ಯಾರ್ಥಿ ಜೀವನದಲ್ಲಿ ಸಮಯವನ್ನು ವ್ಯರ್ಥ ಮಾಡದೆ ಸದ್ಬಳಕೆ ಮಾಡಿಕೊಳ್ಳಬೇಕು. ಮನಸ್ಸಿದ್ದರೆ ಮಾರ್ಗ ಎಂಬಂತೆ ವಿದ್ಯಾರ್ಥಿಗಳು ಮನಸ್ಸು ಮಾಡಿದರೆ ಸಾಧನೆ ಮಾಡಲು ಸಾಧ್ಯವಾಗಲಿದ್ದು, ಇದಕ್ಕೆ ಪರಿಶ್ರಮ ಸಹಕಾರಿಯಾಗಲಿದೆ. ಪ್ರಸ್ತುತ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧೆಗಳು ಹೆಚ್ಚಾಗಿದ್ದು ವಿದ್ಯಾರ್ಥಿಗಳು ಎಷ್ಟೆ ಪರಿಶ್ರಮ ಹಾಕಿದರು ಸಾಲದು. ಹೀಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸರಿಯಾದ ರೀತಿಯಲ್ಲಿ ಪೂರ್ವ ತಯಾರಿಯನ್ನು ಈ ಕ್ಷಣದಿಂದಲೆ ಪ್ರಾರಂಭಿಸಿ ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಕಾಲೇಜಿನ ಮುಖ್ಯ ಶಿಕ್ಷಕಿ ಡಾ.ಕೆ.ಜಿ.ಕವಿತ ಮಾತನಾಡಿ, ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧೆಗಳು ಹೆಚ್ಚಾಗಿದ್ದು ಅದನ್ನು ಅರಿತು ವಿದ್ಯಾರ್ಥಿಗಳು ಪೂರ್ವ ತಯಾರಿಯನ್ನು ನಡೆಸಬೇಕು ಹಾಗೂ ಸಾಧಿಸಬೇಕು ಎಂಬ ಛಲವಿದ್ದರೆ ಏನನ್ನ ಬೇಕಾದರೂ ಸಾಧಿಸಬಹುದು. ಹೀಗಾಗಿ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.
ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಎಚ್.ಇ.ಸಾವಿತ್ರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಕ್ಷರ ಅಕಾಡೆಮಿಯ ಉಪನ್ಯಾಸಕ ಡಿ.ಪಿ.ಕಾರ್ತಿಕ್ ಮತ್ತು ಶ್ರೀನಿವಾಸ್ ಅವರು ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವ ತಯಾರಿ ಹಾಗೂ ಸಿದ್ಧತೆಯ ಬಗ್ಗೆ ಮಾರ್ಗದರ್ಶನ ನೀಡಿದರು.
ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಸಿ.ಎಲ್.ಶಿವಕುಮಾರ್ ಹಾಗೂ ವಿದ್ಯಾರ್ಥಿಗಳು ಇದ್ದರು.