ಅರಕಲಗೂಡು: ವಿದ್ಯಾರ್ಥಿಗಳು ಓದಿನ ಜತೆಗೆ ಕ್ರೀಡಾಸಕ್ತಿ ಬೆಳೆಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ದೇವರಾಜು ಕಿವಿಮಾತು ಹೇಳಿದರು.
ತಾಲೂಕಿನ ದೊಡ್ಡಬೆಮ್ಮತ್ತಿ ಗ್ರಾಮದಲ್ಲಿ ಗುರುವಾರ ಆಯೋಜಿಸಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಹೋಬಳಿ ಮಟ್ಟದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮಕ್ಕಳು ಸೋಲು-ಗೆಲುವಿನ ಲೆಕ್ಕಾಚಾರ ಹಾಕದೆ ಮಾನಸಿಕ ಹಾಗೂ ದೈಹಿಕವಾಗಿ ಸದೃಢಗೊಳ್ಳಲು ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ. ಶಿಕ್ಷಕರೂ ಪ್ರಾಥಮಿಕ ಹಂತದಿಂದಲೇ ವಿದ್ಯಾರ್ಥಿಗಳಲ್ಲಿ ಕ್ರೀಡಾ ಚಟುವಟಿಯಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಬೇಕು ಎಂದರು.
ದೊಡ್ಡಬೆಮ್ಮತ್ತಿ ಗ್ರಾಪಂ ಅಧ್ಯಕ್ಷೆ ಗೌರಮ್ಮ ಸಮಾರಂಭ ಉದ್ಘಾಟಿಸಿದರು. ಹೆಗ್ಗಡಿಹಳ್ಳಿ ಗ್ರಾಪಂ ಅಧ್ಯಕ್ಷೆ ಪಾರ್ವತಮ್ಮ, ಮಾಜಿ ಅಧ್ಯಕ್ಷ ಸೋಮಶೇಖರ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ನಿಂಗಯ್ಯ, ಇಸಿಒ ಶ್ರೀನಿವಾಸ್, ತಾಲೂಕು ನೌಕರರ ಸಂಘದ ಅಧ್ಯಕ್ಷ ಮಹೇಶ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸಂಜೀವ್‌ಕುಮಾರ್ ಇತರರಿದ್ದರು. 13 ಶಾಲೆಯ ಮಕ್ಕಳು ಕ್ರೀಡೆಯಲ್ಲಿ ಪಾಲ್ಗೊಂಡಿದ್ದರು.