ಜಿಲ್ಲೆ

ವಿದ್ಯಾರ್ಥಿಗಳು ಧೈರ್ಯವಾಗಿ ಪರೀಕ್ಷೆ ಎದುರಿಸಿ

ಬಾಗೇಪಲ್ಲಿ : ಪರೀಕ್ಷಾ ಕೇಂದ್ರಗಳಲ್ಲಿ ಸರ್ಕಾರ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು ವಿದ್ಯಾರ್ಥಿಗಳು ಧೈರ್ಯವಾಗಿ ಪರೀಕ್ಷೆ ಬರೆಯಬಹುದು ಎಂದು ಸಮಾಜ ಸೇವಕ ಗುಂಜೂರು ಆರ್.ಶ್ರೀನಿವಾಸರೆಡ್ಡಿ ತಿಳಿಸಿದರು.

ತಾಲೂಕಿನ 7 ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ನೀಡುವಂತೆ 5 ಸಾವಿರ ಮಾಸ್ಕ್‌ಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗೆ ಹಸ್ತಾಂತರಿಸಿ ಮಾತನಾಡಿ, ಶಿಕ್ಷಣವೇ ಇಲ್ಲಿನ ಜನತೆಗೆ ಪ್ರಮುಖ ಬಂಡವಾಳವಾಗಿದ್ದು, ಪರೀಕ್ಷೆಯಲ್ಲಿ ಒಳ್ಳೆಯ ಅಂಕಗಳನ್ನು ಗಳಿಸಿ ಶಿಕ್ಷಣದಲ್ಲಿ ಉತ್ತಮ ಸಾಧನೆ ಮಾಡಿ ಉದ್ಯೋಗವಕಾಶಗಳನ್ನು ಪಡೆದುಕೊಳ್ಳಬೆಕಾಗಿದೆ. ಅದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ಮುಂದಿನ ಉತ್ತಮ ಭವಿಷ್ಯಕ್ಕಾಗಿ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಮಹಮ್ಮದ್ ಖಲೀಲ್ ಮಾತನಾಡಿ, ವಿದ್ಯಾರ್ಥಿಗಳ ಆರೋಗ್ಯ ಕಾಪಾಡುವ ಜವಾಬ್ದಾರಿ ಸಾರ್ವಜನಿಕ ಶಿಕ್ಷಣ ಇಲಾಖೆ ಜತೆಗೆ ಪಾಲಕರದ್ದು ಆಗಿರುತ್ತದೆ. ವಿದ್ಯಾರ್ಥಿಗಳು ನಿಗಧಿತ ಸಮಯಕ್ಕಿಂತ ಮುಂಚಿತವಾಗಿಯೇ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿ ಎಲ್ಲ ರೀತಿಯ ತಪಾಸಣೆಗೊಳಪಟ್ಟು ಪರೀಕ್ಷೆ ಬರೆಯಬೇಕು ಎಂದು ತಿಳಿಸಿದರು.

ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಟಿ.ಎನ್.ರವಿಚಂದ್ರಾರೆಡ್ಡಿ, ಶಿಕ್ಷಣ ಇಲಾಖೆ ಕ್ಷೇತ್ರ ಸಮನ್ವಯ ಅಧಿಕಾರಿ ಎಂ.ವೆಂಕಟರಾಮಪ್ಪ, ಶಿಕ್ಷಣ ಸಂಯೋಜಕ ಕೆ.ಬಿ.ಆಂಜನೇಯರೆಡ್ಡಿ, ದೈಹಿಕ ಶಿಕ್ಷಣ ಪರಿವೀಕ್ಷಕ ವಿ.ಜಯರಾಂ, ಮುಖಂಡರಾದ ಟಿ.ಎ.ವೆಂಕಟೇಶ್, ಡಿ.ಅಶ್ವತ್ಥಪ್ಪ ಮತ್ತಿತರರು ಇದ್ದರು.