ಜಿಲ್ಲೆ

ವಿದ್ಯಾರ್ಥಿವೇತನ ಬಿಡುಗಡೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಹಾಸನ: ಬಡ ಮತ್ತು ಪ್ರತಿಭಾವಂತ 4 ಲಕ್ಷ ವಿದ್ಯಾರ್ಥಿಗಳಿಗೆ ಇನ್ನೂ ನೀಡದ ಎಸ್‌ಎಸ್‌ಪಿ ವಿದ್ಯಾರ್ಥಿವೇತನವನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಮೆರವಣಿಗೆ ಎನ್.ಆರ್. ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದು ತಲುಪಿತು.

ಇದೇ ವೇಳೆ ಎಬಿವಿಪಿ ನಗರ ಸಂಘಟನಾ ಕಾರ್ಯದರ್ಶಿ ಶ್ರೀನಿವಾಸ್ ಮಾಧ್ಯಮದೊಂದಿಗೆ ಮಾತನಾಡಿ, ಎಸ್‌ಎಸ್‌ಪಿ ತಂತ್ರಾಂಶದ ಮೂಲಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೃಷಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಇತರ ಇಲಾಖೆಗಳ ಅಡಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಪದವಿ ಮತ್ತು ಸ್ನಾತ್ತಕೋತ್ತರ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸುತ್ತಾರೆ. ಆದರೆ ರಾಜ್ಯ ಸರ್ಕಾರ ಸರಿಯಾದ ಸಮಯಕ್ಕೆ ವಿದ್ಯಾರ್ಥಿವೇತನವನ್ನು ನೀಡದೆ ಲಕ್ಷಾಂತರ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕನ್ನು ಅತಂತ್ರ ಸ್ಥಿತಿಗೆ ದೂಡುವ ಕೆಲಸವನ್ನು ಮಾಡಿದೆ. ರಾಜ್ಯದ ರೈತರ ಮಕ್ಕಳ ಶಿಕ್ಷಣಕ್ಕಾಗಿ ಹಿಂದಿನ ಸರ್ಕಾರ ರೈತ ವಿದ್ಯಾ ನಿಧಿ ವಿದ್ಯಾರ್ಥಿವೇತನವನ್ನು ಪ್ರಾರಂಭಿಸಿತ್ತು, ಈ ವಿದ್ಯಾರ್ಥಿವೇತನವನ್ನು ಈಗಿನ ರಾಜ್ಯ ಸರ್ಕಾರ ತಡೆ ಹಿಡಿಯುವ ಕೆಲಸವನ್ನು ಮಾಡಿ ರೈತರ ಮಕ್ಕಳ ಶಿಕ್ಷಣವನ್ನು ಕಸಿದುಕೊಳ್ಳುವ ಕೆಲಸವನ್ನು ಮಾಡುತ್ತಿದೆ ಎಂದು ದೂರಿದರು.

ನಮ್ಮ ದೇಶದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಲು ಪ್ರಮುಖ ಕಾರಣ ಅವರಿಗಿರುವ ಆರ್ಥಿಕ ಸಮಸ್ಯೆ. ವಿದ್ಯಾರ್ಥಿಗಳಿಗಾಗುವ ಆರ್ಥಿಕ ಸಮಸ್ಯೆಯನ್ನು ಹೋಗಲಾಡಿಸುವ ದೃಷ್ಟಿಯಿಂದ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳಿಗೆ ನೀಡಿ ಅವರ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಆದರೆ ರಾಜ್ಯ ಸರ್ಕಾರ 2022-23ನೇ ಸಾಲಿನಲ್ಲಿ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮಂಜೂರಾದ ವಿದ್ಯಾರ್ಥಿ ವೇತನ ತಡೆ ಹಿಡಿದು ಆ ಹಣವನ್ನು ಇನ್ನಿತರ ಕಾರ್ಯಗಳಿಗಾಗಿ ಬಳಸುತ್ತಿರುವ ಕ್ರಮವನ್ನು ಎಬಿವಿಪಿ ಖಂಡಿಸುತ್ತದೆ. ರಾಜ್ಯದಲ್ಲಿ 4 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಇಂದು ರಾಜ್ಯ ಸರ್ಕಾರ 2022-23ನೇ ಸಾಲಿನ ವಿದ್ಯಾರ್ಥಿ ವೇತನವನ್ನು ತಡೆ ಹಿಡಿದಿದೆ. ಆರ್.ಎ. ತಂತ್ರಾಂಶದಲ್ಲಿ ವಿದ್ಯಾರ್ಥಿವೇತನ ಮಂಜೂರಾಗಿರುವುದಾಗಿ ತೋರಿಸಿದ್ದರು, ವಿದ್ಯಾರ್ಥಿಗಳ ಖಾತೆಗೆ ಹಣ ಜಮೆಯಾಗಿಲ್ಲ. ಹಣ ಜಮೆಯಾಗುವ ಮೊದಲೇ ಮುಂದಿನ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿರುವುದು ವಿದ್ಯಾರ್ಥಿಗಳಿಗೆ ಗೊಂದಲವನ್ನು ಉಂಟು ಮಾಡಿದ್ದು, ಈ ಕೂಡಲೇ ರಾಜ್ಯ ಸರ್ಕಾರ ವಿದ್ಯಾರ್ಥಿ ವೇತನವನ್ನು ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎಬಿವಿಪಿ ನಗರ ಕಾರ್ಯದರ್ಶಿ ಲೇಪಾಕ್ಷ, ಮುಖಂಡರಾದ ಭರತ್, ವೇಣು ಕುಮಾರ್, ಜ್ಞಾನ, ವಿನಯ್ ಇತರರು ಉಪಸ್ಥಿತರಿದ್ದರು.