ಜಿಲ್ಲೆ

ವಿದ್ಯುತ್ ಅವಘಡಗಳ ಬಗ್ಗೆ ಜಾಗೃತಿವಹಿಸಿ

ಚಾಮರಾಜನಗರ: ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಚಾ.ನಗರ ತಾಲೂಕಿನ 6 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ವಿದ್ಯುತ್ ಅವಘಡಗಳು ಸಂಭವಿಸದಂತೆ ಸೆಸ್ಕ್ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್‌ಪ್ರಸಾದ್ ಸೂಚನೆ ನೀಡಿದರು.

ನಗರದ ಸತ್ತಿರಸ್ತೆಯಲ್ಲಿರುವ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ 6 ಗ್ರಾಮ ಪಂಚಾಯಿತಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ತಾಲೂಕಿನ ವ್ಯಾಪ್ತಿಯಲ್ಲಿ ಇತ್ತೀಚೆಗೆ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ರಸ್ತೆಬದಿಯಲ್ಲಿ ಹಾದುಹೋಗಿರುವ ವಿದ್ಯುತ್ ತಂತಿಗಳಿಗೆ ತಗುಲುವ ಮರಗಳನ್ನು ಕಟಾವು ಮಾಡಬೇಕು. ಬಾಗಿಕೊಂಡಿರುವ ವಿದ್ಯುತ್ ಕಂಬಗಳನ್ನು ಸರಿಪಡಿಸಬೇಕು. ರಾತ್ರಿಯ ವೇಳೆಯಲ್ಲಿ ನಿರಂತರ ವಿದ್ಯುತ್ ಕಡಿತಗೊಳಿಸಬಾರದು. ಮಳೆ-ಗಾಳಿಯ ಸಂದರ್ಭವಲ್ಲದೇ, ಬೇರೆ ಸಂದರ್ಭಗಳಲ್ಲಿ ಉದ್ದೇಶಪೂರ್ವಕವಾಗಿ ವಿದ್ಯುತ್ ಕಡಿತಗೊಳಿಸಬಾರದು. ಇದರಿಂದ ಸಾರ್ವಜನಿಕರು ಹೆಚ್ಚಾಗಿ ನನಗೆ ದೂರು ನೀಡುತ್ತಾರೆ. ಬೀದಿದೀಪಗಳು ನಿರಂತರವಾಗಿ ಉರಿಯುತ್ತಿದ್ದು, ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ವಹಣೆ ಮಾಡಲು ಅವಕಾಶ ಮಾಡಿಕೊಡಿ. ಸಣ್ಣ-ಪುಟ್ಟ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಆದಷ್ಟು ಗುಣಮಟ್ಟದ ಸೇವೆಯನ್ನು ಸಾರ್ವಜನಿಕರಿಗೆ ನೀಡಿ ಎಂದು ಸೆಸ್ಕ್ ಅಧಿಕಾರಿಗಳಿಗೆ ಸೂಚಿಸಿದರು.

ಸೆಸ್ಕ್ ಅಧಿಕಾರಿ ಪ್ರತಿಕ್ರಿಯಿಸಿ, ಹಳೆಯ ವಿದ್ಯುತ್ ಕಂಬಗಳು ಹಾಗೂ ತಂತಿಗಳನ್ನು ತೆರವುಗೊಳಿಸಲು ಕ್ರಮವಹಿಸಲಾಗುತ್ತಿದೆ. ಮುಂದಿನದಿನಗಳಲ್ಲಿ ಪ್ರತಿ ತಿಂಗಳು ವಿದ್ಯುತ್ ಕಂಬಗಳು ಹಾಗೂ ತಂತಿಗಳ ಸ್ಥಿತಿಯನ್ನು ಅರಿಯಲು ಯೋಜನೆ ರೂಪಿಸಲಾಗಿದೆ. ಹರವೆ ಹೋಬಳಿ ವ್ಯಪ್ತಿಯಲ್ಲಿ ಸಬ್‌ಸ್ಟೇಷನ್ ತೆರೆಯಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಬಳಿಕ ಶಾಸಕರು ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಮೀನುಗಾರಿಕೆ ಇಲಾಖೆ, ಸಮಾಜಕಲ್ಯಾಣ ಇಲಾಖೆ, ಆಹಾರ ಇಲಾಖೆ ಹಾಗೂ ಇನ್ನಿತರೆ ಇಲಾಖೆಯಲ್ಲಿ ಇರುವ ಸಮಸ್ಯೆಗಳನ್ನು ಪರಿಶೀಲಿಸಿ, ಅಧಿಕಾರಿಗಳಿಗೆ ಹಲವು ಸೂಚನೆ ಮತ್ತು ಸಲಹೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ವಿ.ದೀಪಾ, ಕಾರ್ಯನಿರ್ವಾಹಕಾಧಿಕಾರಿ ಎಸ್.ಪೂರ್ಣಿಮಾ, ನರೇಗಾ ಸಹಾಯಕ ನಿರ್ದೇಶಕ ಪ್ರಕಾಶ್, ಸಹಾಯಕ ಲೆಕ್ಕಾಧಿಕಾರಿ ಪ್ರಭುಸ್ವಾಮಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.