ಜಿಲ್ಲೆ

ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬೈಕ್ ಸವಾರ ಸಾವು

ಮೈಸೂರು: ಮೈಸೂರು ತಾಲೂಕಿನ ಕಡಕೊಳ ಗ್ರಾಮದ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಆಟೋಮಷಿನ್ ಕಂಪನಿಯಲ್ಲಿ ಸೂಪರ್‌ವೈಸರ್ ಆಗಿದ್ದ ದೊಡ್ಡಕಾನ್ಯ ಗ್ರಾಮದ ಸಾಯಿರಾಜು(29) ಮೃತರು.

ಕೆಲಸ ನಿಮಿತ್ತ ಬೈಕ್‌ನಲ್ಲಿ ತಾಂಡವಪುರಕ್ಕೆ ಹೋಗಿದ್ದರು. ಸಂಜೆ ಗ್ರಾಮಕ್ಕೆ ವಾಪಸ್ ಆಗುವ ಸಂದರ್ಭದಲ್ಲಿ ಕಡಕೊಳ ಟಿವಿಎಸ್ ಫ್ಯಾಕ್ಟರಿ ರಸ್ತೆಯಲ್ಲಿ ಬೈಕ್ ನಿಯಂತ್ರಣ ಕಳೆದುಕೊಂಡಿದ್ದು, ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ತಲೆಗೆ ತೀವ್ರ ಪೆಟ್ಟು ಬಿದ್ದ ಕಾರಣ ಸಾಯಿರಾಜು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.