ಮೈಸೂರು: ಕರ್ನಾಟಕ ವಿಧಾನ ಪರಿಷತ್ತಿನ 2022ನೇ ಸಾಲಿನಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಭಾಜನರಾಗಿರುವ ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅವರನ್ನು ಆ.20ರಂದು ಅಭಿನಂದಿಸಲಾಗುವುದು ಎಂದು ಅಭಿನಂದನಾ ಸಮಿತಿ ಅಧ್ಯಕ್ಷ ಪ್ರೊ.ಕೆ.ಕಾಳಚನ್ನೇಗೌಡ ತಿಳಿಸಿದರು.
ಮಾನಸಗಂಗೋತ್ರಿ ವಿಜ್ಞಾನ ಭವನದಲ್ಲಿ ಸಂಜೆ 4ಕ್ಕೆ ಅಭಿನಂದನೆ ನಡೆಯಲಿದ್ದು, ಸುತ್ತೂರು ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸನ್ಮಾನಿಸುವರು, ಶಾಸಕ ಜಿ.ಟಿ. ದೇವೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶ್ರಾಂತ ಪ್ರಾಧ್ಯಾಪಕ ಡಾ.ಎಚ್.ಎಂ.ರಾಜಶೇಖರ, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ ಅಭಿನಂದನಾ ನುಡಿಯನ್ನಾಡಲಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಶ್ರೀಕಂಠೇಗೌಡ ಅವರು ವಿಧಾನ ಪರಿಷತ್ತಿನ ಸದಸ್ಯರಾಗಿ ಶಿಕ್ಷಣ ಕ್ಷೇತ್ರ, ಬೋಧಕರ ಅನೇಕ ಸಮಸ್ಯೆಗಳ ಬಗ್ಗೆ ಗಮನ ಸೆಳೆದಿದ್ದಾರೆ. ಪದವೀಧರರ ಸಮಸ್ಯೆ ಪ್ರಸ್ತಾಪಿಸಿದ್ದಾರೆ. ಸಾಹಿತ್ಯ, ಸಾಂಸ್ಕೃತಿಕ ಕೇತ್ರಗಳಲ್ಲಿಯೂ ಗುರುತಿಸಿಕೊಂಡಿದ್ದಾರೆ. ಅಲ್ಲದೇ ಸರ್ಕಾರದ ಮಟ್ಟದಲ್ಲಿ ಬೋಧಕರು, ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನ ಪಟ್ಟಿದ್ದಾರೆ ಎಂದು ಹೇಳಿದರು.
ಸಮಿತಿಯ ಅಪ್ಪಾಜಿಗೌಡ, ಹೇಮಾವತಿ, ಎನ್.ಬಾಲಕೃಷ್ಣ, ಪಾಲಿಕೆ ಸದಸ್ಯರಾದ ಕೆ.ವಿ.ಶ್ರೀಧರ್, ಎಸ್‌ಬಿಎಂ ಮಂಜು ಇದ್ದರು.