ಹಾಸನ : ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಗುರುವಾರದಿಂದ ಆರಂಭವಾಗಿದ್ದು, ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರದಿಂದ 8 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದರು
ಕೇಂದ್ರ ಚುನಾವಣಾ ಆಯೋಗದಂತೆ ಜಿಲ್ಲೆಯಲ್ಲಿ ಈಗಾಗಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಏ. 13 ಗುರುವಾರದಿಂದ ನಾಮಪತ್ರ ಸಲ್ಲಿಕೆಯ ಕಾರ್ಯ ಆರಂಭವಾಗಿದ್ದು, ಎಎಪಿಯಿಂದ ಒಂದು, ನೋಂದಾಯಿತವಲ್ಲದ ಪಕ್ಷಗಳಿಂದ ಐದು ಅಭ್ಯರ್ಥಿಗಳು ಹಾಗೂ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಸೇರಿ ಒಟ್ಟು 8 ಮಂದಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಶ್ರವಣಬೆಳಗೊಳ, ಬೇಲೂರು, ಅರಸೀಕೆರೆ, ಸಕಲೇಶಪುರ ವಿಧಾನಸಭಾ ಕ್ಷೇತ್ರದಿಂದ ತಲಾ ಒಬ್ಬರು, ಹಾಸನ ಮತ್ತು ಅರಕಲಗೂಡಿನಲ್ಲಿ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಈ ಬಾರಿ ನಮ್ಮ ಚುನಾವಣೆ ಅಧಿಕಾರಿಗಳು ಮನೆಮನೆಗೆ ತೆರಳಿ ಯುವ ಮತದಾರರನ್ನು ಹೆಚ್ಚು ನೋಂದಣಿ ಮಾಡಿಸಿಕೊಳ್ಳುವಂತೆ ಪ್ರೇರೇಪಣೆ ಮಾಡಿದ್ದರಿಂದ ವಿಧಾನಸಭಾ ಚುನಾವಣೆಯಲ್ಲಿ 37,697 ಹೊಸದಾಗಿ ಮತದಾರರು ಸೇರ್ಪಡೆಯಾಗಿದ್ದಾರೆ. ಈಗ ನೋಂದಣಿ ಕಾರ್ಯ ಮುಕ್ತಾಯವಾಗಿದೆ ಎಂದು ಹೇಳಿದರು.
ಈಗಾಗಲೇ ಜಿಲ್ಲಾ ಕೇಂದ್ರದಲ್ಲಿ ಇದ್ದ ಇವಿಎಂ ಮತ್ತು ವಿವಿ ಪ್ಯಾಟ್‌ಗಳನ್ನು ತಾಲೂಕು ಕೇಂದ್ರಗಳಿಗೆ ಮತಕೇಂದ್ರದ ಅನುಗುಣವಾಗಿ ಹಂಚಿಕೆ ಮಾಡಲಾಗಿದೆ. ಅಲ್ಲದೆ ಚುನಾವಣೆ ಸಂಬಂಧ ಈಗಾಗಲೇ ಜಿಲ್ಲೆಯಾದ್ಯಂತ ಎಲ್ಲಾ ಚೆಕ್ ಪೋಸ್ಟ್‌ಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಯಾವುದೇ ರೀತಿ ಆಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಗಳನ್ನು ಕೂಡ ಅನುಸರಿಸಲಾಗಿದೆ ಎಂದು ಹೇಳಿದರು.
ಜಿಲ್ಲೆಗೆ ಈಗಾಗಲೇ 9 ಜನ ಹಿರಿಯ ಅಧಿಕಾರಿಗಳ ತಂಡ ಚುನಾವಣಾ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಇವರುಗಳಲ್ಲಿ ನಾಲ್ವರು ಸಾಮಾನ್ಯ ಚುನಾವಣಾ ವೀಕ್ಷಕರು ಮತ್ತು ಇನ್ನು ನಾಲ್ವರು ಚುನಾವಣೆ ವೆಚ್ಚ ವೀಕ್ಷಕರು ಹಾಗೂ ಓರ್ವ ಪೊಲೀಸ್ ವೀಕ್ಷಕರಾಗಿ ಜಿಲ್ಲೆಗೆ ಆಗಮಿಸಿದ್ದಾರೆ ಎಂದು ಹೇಳಿದರು
ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಆನಂದ ಇದ್ದರು.