ಜಿಲ್ಲೆ

ವಿಪತ್ತು ನಿರ್ವಹಣೆಗೆ ಎಚ್ಚರ ವಹಿಸಿ; ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲತಾ ಕುಮಾರಿ ಸೂಚನೆ

ಹಾಸನ: ಮಳೆಗಾಲದಲ್ಲಿ ಸಂಭವಿಸಬಹುದಾದ ವಿಪತ್ತುಗಳನ್ನು ಜಿಲ್ಲೆಯಲ್ಲಿ ಅತ್ಯಂತ ಎಚ್ಚರಿಕೆಯಿಂದ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗೆ ಕ್ರಮ ಕೈಗೊಳ್ಳುವ ಮೂಲಕ ನಿರ್ವಹಣೆಗೆ ನಿಗಾ ವಹಿಸುವಂತೆ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ವಿಡಿಯೋ ಸಂವಾದದ ಮೂಲಕ ಅಧಿಕಾರಿಗಳೊಂದಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು, ಉಪ ವಿಭಾಗಾಧಿಕಾರಿಗಳು ಹಾಗೂ ತಹಸೀಲ್ದಾರ್‌ಗಳು ಹೆಚ್ಚಿನ ನಿಗಾವಹಿಸಿ ಪ್ರತಿ ದಿನದ ಮಾಹಿತಿಯನ್ನು ನೀಡಿ. ಮಳೆಯಿಂದ ಮನೆ, ಕೊಟ್ಟಿಗೆ, ಜಾನುವಾರಿಗೆ ಹಾನಿಯಾದಾಗ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಶೀಘ್ರವಾಗಿ ಪರಿಹಾರ ನೀಡಲು ಅತ್ಯಂತ ಕ್ರೀಯಾಶೀಲರಾಗಿ ಹಾಗೂ ಸಮಯೋಚಿತರಾಗಿ ಕೆಲಸ ಮಾಡುವಂತೆ ಸೂಚನೆ ನೀಡಿದರು.

ತಹಸೀಲ್ದಾರ್ ಅವರು ತಮ್ಮ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಕಾಳಜಿ ಕೇಂದ್ರಗಳನ್ನು ತೆರೆದು ಅವುಗಳ ಬಗ್ಗೆ ವ್ಯಾಪಕ ಪ್ರಚಾರ ನೀಡಬೇಕು. ಮಳೆಯಿಂದ ಮನೆ ಕುಸಿದು ಅಥವಾ ಯಾವುದಾದರೂ ತೊಂದರೆಯಲ್ಲಿ ಸಿಲುಕಿದ ಸಾರ್ವಜನಿಕರನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡಿ ಸೂಕ್ತ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ತಾಲೂಕು ಕೇಂದ್ರಗಳಲ್ಲಿ ಕಂಟ್ರೋಲ್ ರೂಂ ತೆರೆದು, ಕ್ರಿಯಾಶೀಲವಾಗಿರುವಂತೆ ನೋಡಿಕೊಳ್ಳಿ. ಸಾರ್ವಜನಿಕರಿಂದ ಬರುವ ಕರೆಗಳನ್ನು ತಕ್ಷಣ ಸ್ವೀಕರಿಸಿ, ಅಗತ್ಯ ಕ್ರಮವಹಿಸುವ ನಿಟ್ಟಿನಲ್ಲಿ ಮುಂದಾಗಿ ಎಂದರಲ್ಲದೆ, ಸಾರ್ವಜನಿಕರಿಗೆ ಸುರಕ್ಷತೆ, ಭದ್ರತೆ ಹಾಗೂ ಸಹಾಯವನ್ನು ನೀಡಲು ನಿಗಾವಹಿಸಿ ಎಂದರು.

ಜಿಲ್ಲಾ ವಿಪತ್ತು ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ, ಸಾರ್ವಜನಿಕರಿಗೆ ಏನು ತೊಂದರೆಯಾಗದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ. ಯಾವುದೇ ಅನಾಹುತ ಸಂಭವಿಸದಂತೆ ತಡೆಯುವುದು ಬಹುಮುಖ್ಯ ಎಂದು ಹೇಳಿದರು. ರಾಷ್ಟ್ರೀಯ ಹೆದ್ದಾರಿ-75ರ ರಸ್ತೆ ಬದಿಯಲ್ಲಿ ಭೂಕುಸಿತವಾಗುವ ಸಾಧ್ಯತೆ ಇದೆ ಎಂದು ಈಗಾಗಲೇ ಗುರುತಿಸಿರುವ 12 ಸ್ಥಳಗಳ ಜತೆಗೆ ಮಣ್ಣು ಸಡಿಲಗೊಂಡು ಕುಸಿಯುವ ಹಂತದಲ್ಲಿರುವುದನ್ನು ಕೂಡ ಗುರುತಿಸಿ ಮುನ್ನೆಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಿದರು.

ಆನೆಮಹಲ್ ಮತ್ತು ದೊಡ್ಡತಪ್ಪಲು ಬಳಿ ಕಡ್ಡಾಯವಾಗಿ ಆರೋಗ್ಯ ಇಲಾಖೆಯ ವತಿಯಿಂದ ಸ್ಥಳದಲ್ಲೇ ಸುಸಜ್ಜಿತ ಆಂಬುಲೆನ್ಸ್ ಇರುವಂತೆ ಹಾಗೂ ಪ್ರಥಮ ಚಿಕಿತ್ಸೆಗೆ ಅಗತ್ಯವಾದ ಔಷಧಿಗಳು ಅದರಲ್ಲಿರುವಂತೆ ನೋಡಿಕೊಳ್ಳಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.

ಸಂಚಾರಿ ರಸ್ತೆಬದಿಯ ಚರಂಡಿಗಳನ್ನು ಸ್ವಚ್ಛಗೊಳಿಸಿ. ಚರಂಡಿ ನೀರು ಸರಾಗವಾಗಿ ಹರಿದುಹೋಗುವಂತೆ ನೋಡಿಕೊಳ್ಳಿ ಎಂದರಲ್ಲದೆ, ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾದಲ್ಲಿ ವಾರ್ನಿಂಗ್ ಅಲರ್ಟ್ ಫಲಕಗಳನ್ನು ಅಳವಡಿಕೆಗೆ ಕ್ರಮವಹಿಸಲು ತಿಳಿಸಿದರು.

ತುರ್ತು ಸಂದರ್ಭವನ್ನು ಅತ್ಯಂತ ಜಾಗರೂಕತೆಯಿಂದ ನಿರ್ವಹಿಸಲು ಅಂತರ್ಜಾಲ ಸಂಪರ್ಕ ದೊರೆಯದ ಸಂದರ್ಭದಲ್ಲಿ ವಾಕಿಟಾಕಿಯನ್ನು ಬಳಕೆಗೆ ವ್ಯವಸ್ಥೆ ಮಾಡಿಕೊಳ್ಳುವಂತೆ ತಿಳಿಸಿದ ಅವರು ಅಧಿಕಾರಿಗಳು ಸಮನ್ವಯತೆಯಿಂದ ಒಂದು ತಂಡವಾಗಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದರು. ಪ್ರತಿ ಗುರುವಾರ ಬೆ.11 ಗಂಟೆಗೆ ಜಿಲ್ಲಾ ವಿಪತ್ತು ನಿರ್ವಹಣಾ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಮಳೆಗಾಲದಲ್ಲಿ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗದಂತೆ ರಸ್ತೆ ಗುಂಡಿಗಳನ್ನು ಮುಚ್ಚಲು ತಿಳಿಸಿದರಲ್ಲದೆ, ಯಾವುದೇ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾದ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಬದಲಿ ಮಾರ್ಗದ ಬಗ್ಗೆ ಕ್ರಮವಹಿಸಿ ಮಾಧ್ಯಮಗಳ ಮೂಲಕ ಮಾಹಿತಿ ಒದಗಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಮುಂದಿನ ಮೂರು ತಿಂಗಳ ಮಳೆಗಾಲದಲ್ಲಿ ಸಂಭವಿಸಬಹುದಾದ ಅಡತಡೆಗಳನ್ನು ನಿರ್ವಹಿಸಲು ಅಗತ್ಯ ಪರಿಕರಗಳೊಂದಿಗೆ ಸಜ್ಜುಗೊಂಡು ದಿನದ 24 ಗಂಟೆಯು ಮಾನವೀಯತೆ ದೃಷ್ಟಿಯಿಂದ ಕೆಲಸ ನಿರ್ವಹಿಸಲು ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ತಿಳಿಸಿದರಲ್ಲದೆ, ಏನೇ ಸಮಸ್ಯೆಗಳಿದ್ದರೂ ತಮ್ಮ ಗಮನಕ್ಕೆ ತರುವಂತೆ ಹೇಳಿದರು.

ರಸ್ತೆ ಬದಿಯಲ್ಲಿರುವ ಸರ್ಕಾರಿ ಜಾಗ ಅಥವಾ ಖಾಸಗಿ ಜಾಗದಲ್ಲಿ ಮರಗಳು ಬೀಳುವ ಹಂತದಲ್ಲಿದ್ದರೆ ಅವುಗಳನ್ನು ಗುರುತಿಸಿ ತೆರವುಗೊಳಿಸಲು ಅರಣ್ಯ ಇಲಾಖೆಯೊಂದಿಗೆ ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಿ ಎಂದು ತಿಳಿಸಿದರು.

ವಿಡಿಯೋ ಸಂವಾದದಲ್ಲಿ ಜಿಲ್ಲೆಯ ಪ್ರಮುಖ ಅಧಿಕಾರಿಗಳು ಪಾಲ್ಗೊಂಡಿದ್ದರು.