ಜಿಲ್ಲೆ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರ

ಚಾಮರಾಜನಗರ : ಗ್ರಾಮ ಆಡಳಿತಾಧಿಕಾರಿಗಳ ಸಮಸ್ಯೆಗಳು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ಬುಧವಾರ ಅನಿರ್ಧಿಷ್ಟಾವಧಿ ಮುಷ್ಕರ ನಡೆಯಿತು.

ನಗರದ ತಹಸೀಲ್ದಾರ್ ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯ ಗ್ರಾಮ ಆಡಳಿತಾಧಿಕಾರಿಗಳ ಸಂಘದ ತಾಲೂಕು ಅಧ್ಯಕ್ಷ ಕೆ.ಶ್ರೀಧರ್ ಮಾತನಾಡಿ, ಗ್ರಾಮ ಲೆಕ್ಕಾಧಿಕಾರಿಗಳು ಕಳೆದ ವರ್ಷ ಸೆ.26 ರಿಂದ ಅ.3 ರವರೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿದ್ದೇವು. ಆದರೇ ಈ ವರೆಗೂ ನಮ್ಮ ಬೇಡಿಕೆಗಳನ್ನು ಈಡೇರಿಸಿರುವುದಿಲ್ಲ. ಆಗಾಗಿ ಮುಷ್ಕರ ಪೂರ್ವದ ಅವಧಿಗಿಂತಲೂ ಹೆಚ್ಚಿನ ಕಾರ್ಯ ಒತ್ತಡ ಉಂಟಾಗಿದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಗ್ರಾಮ ಲೆಕ್ಕಾಧಿಕಾರಿಗಳು ಎಲ್ಲಾ ಕೆಲಸಗಳನ್ನು ಸ್ಥಗಿತಗೊಳಿಸಿ ಮುಷ್ಕರ ಕೈಗೊಂಡಿದ್ದೇವೆ ಎಂದು ತಿಳಿಸಿದರು.

ರಾಜ್ಯಾದ್ಯಂತ ಇ-ಪೌತಿ ಖಾತಾ ಆಂದೋಲನವನ್ನು ಕೈಬಿಡಬೇಕು. ಅಂತರ್ ಜಿಲ್ಲಾ ವರ್ಗಾವಣೆಯ ನಿಯಮವನ್ನು ಮರುಸ್ಥಾಪಿಸಿ, ಎಲ್ಲಾ ಇಲಾಖೆಗಳಲ್ಲಿ ಇರುವಂತೆ ಕಂದಾಯ ಇಲಾಖೆಯಲ್ಲಿ ವರ್ಗಾವಣೆಗೆ ವಿಶೇಷ ಮಾರ್ಗ ಸೂಚಿಯನ್ನು ರಚಿಸಬೇಕು. ಗ್ರಾಮ ಆಡಳಿತಾಧಿಕಾರಿಗಳಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುವಾಗ ಜೀವಹಾನಿ ಆಗುವ ಗ್ರಾಮ ಆಡಳಿತಾಧಿಕಾರಿಗಳ ಕುಟುಂಬಕ್ಕೆ 50 ಲಕ್ಷ ರೂ, ಪರಿಹಾರ ಮಂಜೂರು ಮಾಡಬೇಕು, ಆಪತ್ತಿನ ಭತ್ಯೆಯನ್ನು ನೀಡಬೇಕು. ಪ್ರಯಾಣ ಭತ್ಯೆ ದರವನ್ನು 5000 ರೂ, ಗಳಿಗೆ ಏರಿಕೆ ಮಾಡಬೇಕು. ವಿಎಗಳ ಜೇಷ್ಠತೆಯನ್ನು ರಾಜ್ಯ ಮಟ್ಟದ ಜೇಷ್ಠತೆಯನ್ನಾಗಿ ಪರಿಗಣಿಸಬೇಕು. ಬೆಳೆ ಸಮೀಕ್ಷೆ ಹಾಗೂ ಬೆಳೆಹಾನಿ ಪರಿಹಾರದ ಕೆಲಸದಿಂದ ವಿಎಗಳನ್ನು ವಿಮುಖಗೊಳಿಸಬೇಕು. ಮ್ಯುಟೇಷನ್ ಅವಧಿ ದಿನವನ್ನು ವಿಸ್ತರಣೆ ಮಾಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಡಿ.ಜೆ.ಮಹೇಶ್ ಕುಮಾರ್, ರಾಜೇಶ್ ನಾಯ್ಕ, ರೇವಣ್ಣ, ಮಹೇಶ್ ಮೂರ್ತಿ ಹಾಗೂ ಇತರರು ಭಾಗವಹಿಸಿದ್ದರು.

ನೌಕರರ ಸಂಘದಿಂದ ಬೆಂಬಲ:

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಬೆಂಬಲ ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷೆ ಡಾ.ರೇಣುಕಾದೇವಿ ಮಾತನಾಡಿ, ಗ್ರಾಮ ಆಡಳಿತಾಧಿಕಾರಿಗಳು ಕೇಳುತ್ತಿರುವ ಬೇಡಿಕೆಗಳು ನ್ಯಾಯಯುತವಾದ ಬೇಡಿಕೆಗಳಾಗಿದೆ. ಗ್ರಾಮ ಆಡಳಿತಾಧಿಕಾರಿಗಳು ಬಹಳ ಕಷ್ಟಪಟ್ಟು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅದರಲ್ಲೂ ಮಹಿಳೆಯರೇ ಈ ಇಲಾಖೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಕುರಿತು ನೌಕರರ ಸಂಘದ ರಾಜ್ಯಾಧ್ಯಕ್ಷರೊಂದಿಗೆ ಈಗಾಗಲೇ ಸಭೆ ನಡೆಸಿ ಚರ್ಚೆ ಮಾಡಲಾಗಿದೆ. ಈ ನಿಟ್ಟಿನಲ್ಲಿ ಸರ್ಕಾರಿ ನೌಕರರ ಸಂಘ ನಿಮ್ಮ ಬೆಂಬಲಕ್ಕೆ ಇರುತ್ತದೆ ಎಂದರು.