ಜಿಲ್ಲೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಹಾಸನ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ಪಂಚನೌಕರರ ಸಹಯೋಗದಲ್ಲಿ ಮಂಗಳವಾರದಿಂದ ಅನಿರ್ದಿಷ್ಟಾವಧಿ ಧರಣಿ ನಡೆಸಿದರು.
ಇದೆ ವೇಳೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಈ. ಕೃಷ್ಣೇಗೌಡ ಮಾತನಾಡಿ, ಸ್ಥಳೀಯ ಸಂಸ್ಥೆಯಾದ ಗ್ರಾಮ ಪಂಚಾಯಿತಿಗಳಿಂದ ಶೆ.70 ರಷ್ಟು ಸೇವೆಗಳನ್ನು ಜನರಿಗೆ ನೀಡಲಾಗುತ್ತಿದೆ. ಈ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಗ್ರಾಮ ಪಂಚಾಯತಿ, ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಗ್ರಾಮ ಪಂಚಾಯತಿಯ ಎಲ್ಲ ಸಿಬ್ಬಂದಿ ವರ್ಗ (ಪಂಚನೌಕರರು) ಕಾರ್ಯನಿರ್ವಹಣೆಯಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರ ಮತ್ತು ಇಲಾಖೆಗೆ ಹಲವಾರು ವರ್ಷಗಳಿಂದ ಮನವಿ ಸಲ್ಲಿಸುತ್ತಾ ಬಂದರೂ ಯಾವುದೇ ಮನವಿಗಳಿಗೂ ಸ್ಪಂದಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಎಲ್ಲ ಸಮಸ್ಯೆಗಳಿಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಹಾಗೂ ಸಿಬ್ಬಂದಿಯನ್ನು ನೇರ ಹೊಣೆಗಾರರನ್ನಾಗಿ ಮಾಡುತ್ತಿರುವ ಸರ್ಕಾರ ಮತ್ತು ಇಲಾಖೆಯ ಧೋರಣೆಯನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹೋರಾಟ ಪ್ರಾರಂಭಿಸಿದ್ದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಹೋರಾಟ ನಡೆಸಿದರೂ ಸರ್ಕಾರ ಸಮಸ್ಯೆಗೆ ಸ್ಪಂದಿಸಿಲ್ಲ. ಹಾಗಾಗಿ ರಾಜ್ಯದ ಎಲ್ಲ ಜಿಲ್ಲಾ ಪಂಚಾಯಿತಿಗಳ ಮುಂದೆ ಪಿಡಿಒಗಳು, ಗ್ರಾಪಂ ಅಧ್ಯಕ್ಷ, ಉಪಾದ್ಯಕ್ಷ, ಸದಸ್ಯರು ಹಾಗು ಎಲ್ಲ ಸಿಬ್ಬಂದಿ ಹೋರಾಟ ಆರಂಬಿಸಿದ್ದಾರೆ. ಹಾಸನ ಜಿಲ್ಲೆಯಲ್ಲೂ ಕೂಡ ಹೋರಾಟ ಬೆಂಬಲಿಸಿ ಅನಿರ್ದಿಷ್ಟಾವದಿ ಧರಣಿ ನಡೆಸಲಾಗುತ್ತಿದೆ ಎಂದು ಹೇಳಿದರು.
ಪಿಡಿಒ ಸಂಘದ ಜಿಲ್ಲಾಧ್ಯಕ್ಷ ಮನೋಹರ್ ಮಾತನಾಡಿ, ಪಂಚನೌಕರರು ಕಾರ್ಯನಿರ್ವಹಣೆಯಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರ ಮತ್ತು ಇಲಾಖೆಗೆ ಹಲವಾರು ವರ್ಷಗಳಿಂದ ಮನವಿ ಸಲ್ಲಿಸುತ್ತಾ ಬಂದರೂ ಯಾವುದೇ ಮನವಿಗಳಿಗೂ ಸ್ಪಂದಿಸದೆ, ಕೇವಲ ಎಲ್ಲ ಸಮಸ್ಯೆಗಳಿಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಹಾಗೂ ಸಿಬ್ಬಂದಿಯನ್ನು ನೇರ ಹೊಣೆಗಾರ ಮಾಡುತ್ತಿರುವ ಸರ್ಕಾರ ಮತ್ತು ಇಲಾಖೆಯ ಧೋರಣೆಯನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹೋರಾಟ ಪ್ರಾರಂಭಿಸಿದ್ದೇವೆ. ನಮ್ಮ ಬೇಡಿಕೆಗಳು ಈಡೇರುವವರೆಗೆ ಹೋರಾಟ ಮುಂದುವರಿಯಲಿದೆ ಎಂದರು.
ಕಂಪ್ಯೂಟರ್ ಆಪರೇಟರ್ ಸಂಘದ ಜಿಲ್ಲಾಧ್ಯಕ್ಷೆ ಸವಿತಾ ಮಾತನಾಡಿ, ರಾಜ್ಯದ ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಯನ್ನು ಗೆಜೆಟೆಡ್ ಗ್ರೂಪ್ ಬಿ ದರ್ಜೆಗೆ ಉನ್ನತೀಕರಿಸಬೇಕು. ಏಳು ವರ್ಷ ಪೂರೈಸಿ ಕರ್ತವ್ಯ ನಿರ್ವಹಿಸುತ್ತಿರುವ ಪಿಡಿಒಗಳನ್ನು ಬೇರೆ ತಾಲೂಕಿಗೆ ವರ್ಗಾವಣೆ ಮಾಡುವ ನಿಯಮವನ್ನು ಕೈ ಬಿಡಬೇಕು. ಮತ್ತು ವರ್ಗಾವಣೆ ನಿಯಮಗಳಲ್ಲಿ ಯಾವುದೇ ಬದಲಾವಣೆಗೆ ಮುನ್ನ ಸಂಘದ ಸಲಹೆಯನ್ನು ಪಡೆಯಬೇಕು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜ್ಯೇಷ್ಠತಾ ಪಟ್ಟಿಯನ್ನು ಕೂಡಲೇ ಅಂತಿಮಗೊಳಿಸಿ, ಬಡ್ತಿ ನೀಡಲು ಕ್ರಮಕೈಗೊಳ್ಳಬೇಕು. ಗ್ರಾಮ ಪಂಚಾಯಿತಿಯ ಪಂಚ ನೌಕರರ ವೇತನ ಶ್ರೇಣಿ ಮತ್ತು ಸೇವಾ ಹಿರಿತನದ ವೇತನವನ್ನು ಜಾರಿ ಮಾಡಿ, ಕಾರ್ಮಿಕ ಇಲಾಖೆಯ ವೇತನವನ್ನು ಹೊರತುಪಡಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ವೇತನ ನಿಗದಿಪಡಿಸಿ ನೌಕರರ ಖಾತೆಗಳಿಗೆ ಸಂಬಳ ಪಾವತಿ ಮಾಡಬೇಕು ಎಂದು ಆಗ್ರಹಿಸಿದರು.
ಇದೆ ವೇಳೆ ಸಂಘದ ರಾಜ್ಯ ಮಾಜಿ ಉಪಾಧ್ಯಕ್ಷ ನಟರಾಜು, ತಾಲೂಕು ಅಧ್ಯಕ್ಷ ನಂಜಪ್ಪ, ಸಿ.ಎಸ್. ಶಿವಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.