ಬಾಗಲಕೋಟೆ: ಜಿಲ್ಲಾ ಮತ್ತು ತಾಲೂಕಾ ಮಟ್ಟದಲ್ಲಿ ಜೂ.೧೨ ರಂದು ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಹೇಳಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನ ಆಚರಣೆ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಎಲ್ಲ ಇಲಾಖೆಯ ಸಹಯೋಗದಲ್ಲಿ ಅರ್ಥವತ್ತಾಗಿ ನಡೆಸಲು ಸೂಚಿಸಿದರು.
ಜೂ.೧೨ ರಂದು ಬೆಳಗ್ಗೆ ೧೧ ಗಂಟೆಗೆ ಜಿಲ್ಲೆಯ ಸರ್ಕಾರಿ ನೌಕರರು ಕೆಲಸ ನಿರ್ವಹಿಸುತ್ತಿರುವ ಸ್ಥಳಗಳಲ್ಲಿಯೇ ಒಟ್ಟಾಗಿ ಸೇರಿ ಪ್ರಮಾಣ ವಚನ ಸ್ವೀಕರಿಸುವಂತೆ ಮಾಡಲು ಕ್ರಮವಹಿಸಲು ತಿಳಿಸಿದರು.
ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಮತ್ತು ತಾಲೂಕಾ ಮಟ್ಟದಲ್ಲಿ ಚಿತ್ರಕಲಾ ಮತ್ತು ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ವಿತರಣೆಗೆ ಕ್ರಮವಹಿಸಬೇಕು. ಪ್ರತಿಯೊಬ್ಬ ಸರ್ಕಾರಿ ನೌಕರರಿಂದ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರನ್ನು ಮನೆಗಳಲ್ಲಾಗಲಿ ಅಥವಾ ಸಂಸ್ಥೆಗಳಲ್ಲಾಗಲಿ ನೇಮಿಸಿಕೊಂಡಿಲ್ಲವೆಂಬ ಬಗ್ಗೆ ಘೋಷಣೆಯನ್ನು ಸಹ ಪಡೆದುಕೊಳ್ಳಲು ತಿಳಿಸಿದರು.
ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪ್ರಕರಣಗಳಲ್ಲಿ ಪತ್ತೆಹಚ್ಚಿ ದಾಖಲು ಮಾಡಿ, ಮುಖ್ಯವಾಹಿನಿಗೆ ಸೇರಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಶೇ.೭೫ ಕ್ಕಿಂತ ಹೆಚ್ಚಿಗೆ ಅಂಕ ಪಡೆದ ಮಕ್ಕಳಿಗೆ ಕಾರ್ಯಕ್ರಮದಲ್ಲಿ ೨ ಸಾವಿರ ರೂ.ಗಳ ಪ್ರೋತ್ಸಾಹಧನ ಸಹ ವಿತರಿಸಲಾಗುತ್ತಿದೆ. ಅಲ್ಲದೇ ಬಾಲ ಕಾರ್ಮಿಕ ಮುಖ್ಯವಾಹಿಸಿಗೆ ಬಂದು ಉನ್ನತ ಹುದ್ದೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದವರನ್ನು ಸಹ ಸನ್ಮಾನಿಸಲು ಕ್ರಮವಹಿಸಬೇಕು. ಬಾಲಕಾರ್ಮಿಕ ನಿರ್ಮೂಲನೆಯಲ್ಲಿ ತೊಡಗಿದ ಹಾಗೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ ಸ್ವಯಂ ಸೇವಾ ಸಂಸ್ಥೆಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುತ್ತಿದೆ ಎಂದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಪ್ರಸನ್ನ ದೇಸಾಯಿ, ಜಿ.ಪಂ ಉಪ ಕಾರ್ಯದರ್ಶಿ ಎನ್.ವೈ.ಬಸರಿಗಿಡದ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಜಿಲ್ಲಾ ಕಾರ್ಮಿಕ ಅಽಕಾರಿ ಅನೀಲ ಬಗಟಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆಯ ಯೋಜನಾ ನಿರ್ದೇಶಕ ಸುಧಾಕರ ಬಡಿಗೇರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಶ್ರೀ ಎಮ್ಮಿ ಸೇರಿದಂತೆ ಜಿಲ್ಲಾ ಮಟ್ಟದ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.