ಜಿಲ್ಲೆ

ವಿಶ್ವಕರ್ಮ ಅರ್ಥಪೂರ್ಣ ಆಚರಣೆ

ವಿಜಯಪುರ : ಸೆ. 7 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಹಾಗೂ ಸೆ. 17 ರಂದು ವಿಶ್ವಕರ್ಮ ಜಯಂತಿ ಕಾರ್ಯಕ್ರಮಗಳನ್ನು ಅತ್ಯಂತ ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸೆ. 7 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಹಾಗೂ ಸೆ. 17 ರಂದು ವಿಶ್ವಕರ್ಮ ಜಯಂತಿ ಕಾರ್ಯಕ್ರಮಗಳನ್ನು ನಗರದ ಕಂದಗಲ್ಲ ಹಣಮಂತರಾಯ ರಂಗಮಂದಿರದಲ್ಲಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಸೆ. 7 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಅಂಗವಾಗಿ ಅಂದು ಬೆಳಗ್ಗೆ 9.30ಕ್ಕೆ ಇಲ್ಲಿನ ಸಿದ್ಧೇಶ್ವರ ದೇವಸ್ಥಾನದ ಬಳಿ ಮಹನೀಯರ ಅವರ ಭಾವಚಿತ್ರದ ಮೆರವಣಿಗೆಗೆ ಚಾಲನೆ ನೀಡುವುದು. ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆಯೂ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಸಮಾರೋಪಗೊಳ್ಳಲಿದೆ. ಬೆಳಗ್ಗೆ 10.30ಕ್ಕೆ ವೇದಿಕೆ ಕಾರ್ಯಕ್ರಮ ಏರ್ಪಡಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಸೆ. 17ರಂದು ವಿಶ್ವಕರ್ಮ ಜಯಂತಿ ಅಂಗವಾಗಿ ಸಿದ್ಧೇಶ್ವರ ದೇವಸ್ಥಾನದಿಂದ ಮಹನೀಯರ ಭಾವಚಿತ್ರ ಮೆರವಣಿಗೆ ಹಾಗೂ ಬೆಳಗ್ಗೆ 10.30ಕ್ಕೆ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.

ಜಯಂತಿ ಕಾರ್ಯಕ್ರಮದಲ್ಲಿ ಮಹನೀಯರ ವಿಚಾರಧಾರೆ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಉಪನ್ಯಾಸ, ಸಂಗೀತ ಕಾರ್ಯಕ್ರಮ ಏರ್ಪಡಿಸಲು ನಿರ್ಧರಿಸಲಾಗಿದ್ದು, ಅಂದು ನಗರದ ಎಲ್ಲ ಮಹನೀಯರ ವೃತ್ತಗಳನ್ನು ಸ್ವಚ್ಛಗೊಳಿಸಿ, ದೀಪಾಲಂಕಾರ ಹಾಗೂ ವೇದಿಕೆ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಣ ಹಾಗೂ ವಿತರಣೆಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ ಪೋತದಾರ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಪ್ರಶಾಂತ ಪೂಜಾರಿ, ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಜಿ.ಪಂ. ಸಹಾಯಕ ಕಾರ್ಯದರ್ಶಿ ಅನಸೂಯಾ ಚಲವಾದಿ, ಪೊಲೀಸ್​ ಇನ್ಸಪೆಕ್ಟರ್​ ರವಿ ಯಡವನ್ನವರ, ಹನಮಂತ ಈಳಿಗೇರ, ಶಿವಾನಂದ ಈಳಿಗೇರ, ಶ್ರೀಕಾಂತ ಕುಂದನಗಾರ, ಬಾಳು ಪ್ರದಿಪ ಎಂ.ಕೆ. ಪತ್ತಾರ, ಪ್ರಮೋದ ಬಡಿಗೇರ, ಅಶೋಕ ಪತ್ತಾರ, ಮಹೇಂದ್ರ ಸ್ವಾಮಿ ಮತ್ತಿತರರಿದ್ದರು.

ವಿವಿಧ ಮಹನೀಯರ ಜಯಂತಿ ಅಂಗವಾಗಿ ವಿಜಯಪುರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡ ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಮಾತನಾಡಿದರು. ಮಹೇಶ ಪೋತದಾರ, ಪ್ರಶಾಂತ ಪೂಜಾರಿ, ಸಂತೋಷ ಭೋವಿ ಮತ್ತಿತರರಿದ್ದಾರೆ.