ಚಿತ್ರದುರ್ಗ: ಜಿಲ್ಲಾಡಳಿತದಿಂದ ಡಿ.29 ರಂದು ಬೆಳಗ್ಗೆ 11 ಕ್ಕೆ ನಗರದ ತರಾಸು ರಂಗಮಂದಿರದಲ್ಲಿ ವಿಶ್ವಮಾನವ ದಿನವನ್ನು ಆಚರಿಸಲಾಗುವುದು ಎಂದು ಎಡಿಸಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ಡಿಸಿ ಕಚೇರಿಯಲ್ಲಿ ಶುಕ್ರವಾರ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿ, ಈ ಕಾರ‌್ಯಕ್ರಮದ ಅಂಗವಾಗಿ ಕುವೆಂಪು ಸಾಹಿತ್ಯ, ಬರಹ ಹಾಗೂ ವಿಶ್ವಮಾನವ ಸಂದೇಶ ಕುರಿತು ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಬೇಕು. ವಿಜೇತರಿಗೆ ಬಹುಮಾನ ಹಾಗೂ ಪ್ರಮಾಣ ಪತ್ರ ನೀಡಲು ಅಗತ್ಯ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್ ಮಾತನಾಡಿ, ರಾಷ್ಟ್ರಕವಿ ಕುವೆಂಪು ಅವರ ಕುರಿತು ಹಿರಿಯೂರಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಡಾ.ಎಸ್.ಮಾರುತಿ ಅವರಿಂದ ಉಪನ್ಯಾಸ ಹಾಗೂ ಗೀತಗಾಯನ ಕಾರ‌್ಯಕ್ರಮ ಏರ್ಪಡಿಸಲಾಗುವುದು ಎಂದರು.
ಆಹಾರ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಿದಾನಂದ, ನಗರಸಭೆ ಅಧಿಕಾರಿ ಪುಟ್ಟಪ್ಪ ಮತ್ತಿತರರು ಇದ್ದರು.