ಜಿಲ್ಲೆ

ವಿಶ್ವವಿದ್ಯಾಲಯ ಉಳಿವಿಗೆ ಪ್ರತಿಭಟನೆ

ಚಾಮರಾಜನಗರ: ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಆಗ್ರಹಿಸಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಜಿಲ್ಲಾಡಳಿತ ಭವನದ ಮುಖ್ಯಗೇಟ್ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಹೊರಟು ಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿದರು. ಬಳಿಕ ಅಪರ ಜಿಲ್ಲಾಧಿಕಾರಿ ಗೀತಾ ಹುಡೇದ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಬಿವಿಪಿ ರಾಜ್ಯ ಕಾರ್ಯದರ್ಶಿ ಎಚ್.ಕೆ.ಪ್ರವೀಣ್ ಮಾತನಾಡಿ, ರಾಜ್ಯದಲ್ಲಿ ಹಿಂದಿನ ಸರ್ಕಾರ ಘೋಷಣೆ ಮಾಡಿದ್ದ ಹೊಸ ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ಹೊರಟಿರುವುದು ಅತ್ಯಂತ ಖಂಡನೀಯ. ಸರ್ಕಾರವು ಆರ್ಥಿಕ ಹಾಗೂ ಮೂಲ ಸೌಕರ್ಯಗಳ ನೆಪವನ್ನು ಹೇಳಿ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವುದು ಶಿಕ್ಷಣ ವಿರೋಧಿ ನೀತಿಯಾಗಿದೆ. ಯಾವುದೇ ಸರ್ಕಾರಗಳು ಘೋಷಣೆ ಮಾಡಿದ ವಿಶ್ವವಿದ್ಯಾಲಯಗಳನ್ನು ಅಭಿವೃದ್ಧಿಪಡಿಸಬೇಕೆ ಹೊರತು ಆತಂತ್ರಗೊಳಿಸಬಾರದು ಎಂದು ಹೇಳಿದರು.

ರಾಜ್ಯ ಸರ್ಕಾರ ಎರಡು ವರ್ಷ ಕಳೆದರೂ ವಿಶ್ವವಿದ್ಯಾಲಯಗಳ ಅಭಿವೃದ್ಧಿಗೆ ಕಿಂಚಿತ್ತು ಗಮನಕೊಟ್ಟಿಲ್ಲ. ಅನುದಾನದ ನೆಪವೊಡ್ಡಿ ವಿವಿಗಳನ್ನು ಮುಚ್ಚುತ್ತಿರುವುದನ್ನು ನೋಡಿದರೆ ಸರ್ಕಾರ ವಿದ್ಯಾರ್ಥಿ ವಿರೋಧಿ ನೀತಿಯನ್ನು ಅನುಸರಿಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಸರ್ಕಾರ ವಿವಿಗಳನ್ನು ಮುಚ್ಚುವ ನಿರ್ಧಾರವನ್ನು ಕೈಬಿಟ್ಟು ವಿಶ್ವವಿದ್ಯಾಲಯಗಳ ಉನ್ನತೀಕರಣಕ್ಕಾಗಿ ಅನುದಾನ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎಬಿವಿಪಿ ಪ್ರಾಂತ್ಯ ಸಹ ಸಂಘಟನಾ ಕಾರ್ಯದರ್ಶಿ ಗಂಗಾಧರ್, ಆದಿತ್ಯ ಶೆಟ್ಟಿ, ಎಸ್.ಬಿ.ಆದಿತ್ಯ, ಡಿ.ಅಂಕಿತ್ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.