ಜಿಲ್ಲೆ

ವೀರಶೈವ ಯುವ ಘಟಕದಿಂದ ಸಮಾಜಮುಖಿ ಕೆಲಸ

ಸೋಮವಾರಪೇಟೆ: 11 ವರ್ಷಗಳ ಹಿಂದೆ ಜಿಲ್ಲೆಯಲ್ಲಿ ಪ್ರಾರಂಭಗೊಂಡ ಅಖಿಲ ಭಾರತ ವೀರಶೈವ ಸಮಾಜದ ಯುವ ಘಟಕ ಹತ್ತು ಹಲವು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿದ್ದು, ಮುಂದಿನ ದಿನಗಳಲ್ಲಿಯೂ ಅನೇಕ ಕಾರ್ಯಕ್ರಮ ನಡೆಸಲಾಗುವುದು ಎಂದು ಜಿಲ್ಲಾ ಸಮಿತಿ ಅಧ್ಯಕ್ಷ ಮೋಕ್ಷಿತ್ ತಿಳಿಸಿದರು.

ಸಾಕಷ್ಟು ಸಮಾಜ ಸೇವೆಗಳನ್ನು ಯುವ ಘಟಕದ ವತಿಯಿಂದ ಮಾಡಿಕೊಂಡು ಬರುತ್ತಿದೆ. ಈ ನಿಟ್ಟಿನಲ್ಲಿ ಮುಂದಿನ ನವೆಂಬರ್ ಅಥವಾ ಡಿಸೆಂಬರ್ ತಿಂಗಳಿನಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ನಡೆಸಲಾಗುವುದು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜಿಲ್ಲೆಯಲ್ಲಿ ಯುವ ಘಟಕವನ್ನು ಪ್ರಬಲವಾಗಿ ಕಟ್ಟುವ ನಿಟ್ಟಿನಲ್ಲಿ ಎಲ್ಲ ತಾಲೂಕು ಘಟಕಗಳನ್ನು ಮರು ರಚನೆ ಮಾಡಲಾಗುತ್ತಿದೆ. ಸೋಮವಾರಪೇಟೆ ತಾಲೂಕು ಘಟಕಕ್ಕೆ ಡಿ.ಯು.ಕಿರಣ್ ಅವರನ್ನು ಅಧ್ಯಕ್ಷರನ್ನಾಗಿ, ಪ್ರಧಾನ ಕಾರ್ಯದರ್ಶಿಯನ್ನಾಗಿ ರತನ್ ಅವರನ್ನು ನೇಮಿಸಲಾಗಿದೆ. ಇವರು ಮುಂದಿನ 20 ದಿನಗಳ ಒಳಗೆ ಪೂರ್ಣ ಪ್ರಮಾಣದ ಸಮಿತಿ ರಚಿಸಲಿದ್ದಾರೆ. ನಂತರ ಜಿಲ್ಲೆಯಲ್ಲಿ ಎಲ್ಲ ತಾಲೂಕು ಘಟಕಗಳ ಪದಾಧಿಕಾರಿಗಳ ಮಾಹಿತಿಯನ್ನು ರಾಜ್ಯದ ಕೇಂದ್ರ ಸಮಿತಿಗೆ ಕಳಿಸಲಾಗುವುದು ಎಂದು ತಿಳಿಸಿದರು.

ತಾಲೂಕು ಘಟಕದ ಅಧ್ಯಕ್ಷ ಕಿರಣ್ ಮಾತನಾಡಿ, ಹಿರಿಯರ ಮಾರ್ಗದರ್ಶನದಂತೆ ತಾಲೂಕಿನಲ್ಲಿ ಸಮಾಜದ ಅಭಿವೃದ್ಧಿಗಾಗಿ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕೊಡಗು ಜಿಲ್ಲಾ ವೀರಶೈವ ಸಮಾಜದ ಮಾಜಿ ಉಪಾಧ್ಯಕ್ಷ ಕಾಂತರಾಜ್, ತಾಲ್ಲೂಕು ಘಟಕದ ಅಧ್ಯಕ್ಷ ಆದರ್ಶ್, ಯುವ ಘಟಕದ ಪ್ರಧಾನ ಕಾರ್ಯದರ್ಶಿ ರತನ್ ಇದ್ದರು.