ಚನ್ನರಾಯಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಪೂರ್ವ ಭಾವಿ ಸಭೆಯಲ್ಲಿ ಶಾಸಕ ಸಿ.ಎನ್.ಬಾಲಕೃಷ್ಣ ಮಾತನಾಡಿದರು. ಬಿ.ಎಂ.ಗೋವಿಂದರಾಜ್, ಬಿ.ಎಸ್.ಪವನ್, ಎಂ.ಆರ್.ಮಂಜುನಾಥ್, ರಾಧಾ ಮಂಜುನಾಥ್, ಧರಣೀಶ್ ಇದ್ದರು. 
ಜಿಲ್ಲೆ

ವೈಭವದ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ ಕೈಗೊಳ್ಳಿ

ಚನ್ನರಾಯಪಟ್ಟಣ: ಕರೊನಾ ಪರಿಣಾಮ 3 ವರ್ಷಗಳಿಂದ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಗಿತ್ತು, ಈ ಬಾರಿ ವೈಭವದಿಂದ ಆಚರಿಸಲು ನಿರ್ಧರಿಸಲಾಗಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು.

ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶನಿವಾರ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಹಲವು ಭಾಗಗಳಾಗಿ ಹಂಚಿಕೆಯಾಗಿದ್ದ ಕನ್ನಡ ಪ್ರದೇಶಗಳನ್ನು ಏಕೀಕರಣಗೊಳಿಸಿದ ದಿನವಾದ ಕನ್ನಡ ರಾಜ್ಯೋತ್ಸವವನ್ನು ವಿಶೇಷ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸುವ ಮಕ್ಕಳಿಗೆ ಬೆಳಗಿನ ಉಪಾಹಾರದ ವ್ಯವಸ್ಥೆ ಮಾಡುವುದು. ಕಾರ್ಯಕ್ರಮ ನಡೆಯುವ ಮಾಧ್ಯಮಿಕ ಶಾಲಾ ಆವರಣವನ್ನು ಸ್ವಚ್ಛಗೊಳಿಸಿ ತಳಿರು ತೋರಣ ಕಟ್ಟುವ ಜವಾಬ್ದಾರಿಯನ್ನು ಪುರಸಭೆಗೆ ವಹಿಸಲಾಗಿದೆ ಎಂದು ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಚ್.ಎನ್.ಲೋಕೇಶ್ ಮಾತನಾಡಿ, ತಾಲೂಕಿನಲ್ಲಿರುವ ಕನ್ನಡ ಪರ ಸಂಘ-ಸಂಸ್ಥೆಗಳು ಒಗ್ಗೂಡಿ ಎಲ್ಲೆಡೆ ಒಂದೇ ದಿನ ಕನ್ನಡ ರಾಜ್ಯೋತ್ಸವ ಆಚರಿಸಬೇಕು. ಸರ್ಕಾರಿ ಕಚೇರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕನ್ನಡ ಧ್ವಜ ಹಾರಿಸಬೇಕು. ಪಟ್ಟಣದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸ್ತಬ್ಧಚಿತ್ರ ಮೆರವಣಿಗೆ ಜತೆಗೆ ಹೆಚ್ಚು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿ ರಾಜ್ಯೋತ್ಸವಕ್ಕೆ ಮೆರುಗು ತರಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ತಹಸೀಲ್ದಾರ್ ಬಿ.ಎಂ.ಗೋವಿಂದರಾಜು, ಶಿರಸ್ತೇದಾರ್ ಬಿ.ಎಸ್.ಪವನ್, ಕಸಬಾ ಹೋಬಳಿ ಕಂದಾಯ ನಿರೀಕ್ಷಕ ಎಂ.ಆರ್.ಮಂಜುನಾಥ್, ಪುರಸಭಾಧ್ಯಕ್ಷೆ ರಾಧಾ ಮಂಜುನಾಥ್, ಉಪಾಧ್ಯಕ್ಷ ಧರಣೀಶ್, ಸ್ಥಾಯಿ ಸಮಿತಿ ಅಧ್ಯಕ್ಷೆ ಬನಶಂಕರಿ ರಘು, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಣತಿ ಆನಂದ, ಪರಿಸರ ಪ್ರೇಮಿ ಚ.ನಾ.ಅಶೋಕ್, ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು ಹಾಜರಿದ್ದರು.