ಅರಕಲಗೂಡಿನಲ್ಲಿ ಮಂಗಳವಾರ ಆಯೋಜಿಸಿದ್ದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮ ರಥೋತ್ಸವದಲ್ಲಿ ಭಕ್ತರು ತೇರು ಎಳೆದು ಸಂಭ್ರಮಿಸಿದರು. 
ಜಿಲ್ಲೆ

ವೈಭವದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ

ಅರಕಲಗೂಡು: ಪಟ್ಟಣದ ಕೋಟೆ ಐತಿಹಾಸಿಕ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ರಥೋತ್ಸವ ಮಂಗಳವಾರ ಅಪಾರ ಭಕ್ತರ ಸಮ್ಮುಖದಲ್ಲಿ ವೈಭವದಿಂದ ನೆರವೇರಿತು.

ರಥೋತ್ಸವದ ಹಿನ್ನೆಲೆಯಲ್ಲಿ ಮೂರು ದಿನಗಳಿಂದ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು. ಮಂಗಳವಾರ ಬೆಳಗ್ಗೆ ಮೂಲ ವಿಗ್ರಹಕ್ಕೆ ಪಂಚಾಮೃತ ಅಭಿಷೇಕ, ಅರ್ಚನೆ ಮಾಡಲಾಯಿತು. ಉತ್ಸವ ಮೂರ್ತಿಗಳನ್ನು ಅಲಂಕರಿಸಿ ಪೂಜೆ ಸಲ್ಲಿಸಿ ಕೃಷ್ಣಗಂಧೋತ್ಸವ ನಡೆಸಲಾಯಿತು. ಉತ್ಸವದಲ್ಲಿ ಬಂದ ದೇವರ ಮೂರ್ತಿಗಳನ್ನು ಅಲಂಕರಿಸಿದ ರಥದಲ್ಲಿ ಪ್ರತಿಷ್ಠಾಪಿಸಿ ವಿವಿಧ ಪೂಜಾ ಕಾರ್ಯಗಳನ್ನು ನಡೆಸಲಾಯಿತು. ಶಿರಸ್ತೇದಾರ್ ಅಂಕೇಗೌಡ ರಥಕ್ಕೆ ಪೂಜೆ ಸಲ್ಲಿಸಿ ಈಡುಗಾಯಿ ಹೊಡೆಯುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ಭಕ್ತರು ಗೋವಿಂದ ನಾಮ ಸ್ಮರಣೆ ಮಾಡುತ್ತಾ ರಥಬೀದಿಯಲ್ಲಿ ತೇರನ್ನು ಎಳೆದರು.

ಭಕ್ತರಿಗೆ ಮಜ್ಜಿಗೆ, ಪಾನಕ, ನೀರು ನೀಡಲಾಯಿತು. ಉಪ್ಪಾರ ಸಮುದಾಯದ ಹೂವಿನ ವ್ಯಾಪಾರಸ್ಥರು ರಥಕ್ಕೆ ಹೂವಿನ ಅಳಂಕಾರ ಮಾಡಿದ್ದರು. ಉಪ್ಪಾರ ಸಮುದಾಯದಿಂದ ಸಾಮೂಹಿಕ ಅನ್ನದಾಸೋಹ ನಡೆಯಿತು.