ಜಿಲ್ಲೆ

ವ್ಯವಸ್ಥಿತ, ಸುಗಮ ಪರೀಕ್ಷೆಗೆ ಡಿಸಿ ಜಾನಕಿ ಸೂಚನೆ

ಬಾಗಲಕೋಟೆ: ಇದೇ ಏ.೧೮ ರಿಂದ ೧೯ ರವರೆಗೆ ಜಿಲ್ಲೆಯ ೧೭ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗಳನ್ನು ಅತ್ಯಂತ ಸುವ್ಯವಸ್ಥಿತವಾಗಿ ಹಾಗೂ ಸುಸೂತ್ರವಾಗಿ ನಡೆಸುವಂತೆ ಜಿಲ್ಲಾಧಿಕಾರಿಗಳಾದ ಜಾನಕಿ ಕೆ.ಎಂ ಪರೀಕ್ಷೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಡಳಿತ ಭವನದ ಕೇಸ್ವಾನ್ ಹಾಲ್‌ನಲ್ಲಿ ಗುರುವಾರ ಸಾಮಾನ್ಯ ಪ್ರವೇಶ ಪರೀಕ್ಷೆಯ-೨೦೨೪ರ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿದ ಅವರು, ಪರೀಕ್ಷೆಗಳು ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಪರೀಕ್ಷೆ ಸಂದರ್ಭದಲ್ಲಿ ಪರೀಕ್ಷೆಗೆ ನಿಯೋಜಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ನೋಂದಣಿಯಾದ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಇತರರಿಗೆ ಪರೀಕ್ಷಾ ಕೊಠಡಿಗಳಿಗೆ ಪ್ರವೇಶ ಇರುವುದಿಲ್ಲ. ಪರೀಕ್ಷೆಯ ಪಾವಿತ್ರ‍್ಯತೆಯನ್ನು ಕಾಪಾಡಿಕೊಳ್ಳಬೇಕು. ಪರೀಕ್ಷೆ ಸಂದರ್ಭದಲ್ಲಿ ಯಾವುದೇ ಲೋಪ ಆಗಬಾರದು. ನಿಯಮದಂತೆ ಮಾರ್ಗಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಮುಂಜಾಗ್ರತೆ ವಹಿಸಬೇಕು. ಅದರಂತೆ, ಪರೀಕ್ಷಾ ಕೇಂದ್ರದ ಉಪ ಮುಖ್ಯ ಅಧೀಕ್ಷಕರು, ಕಸ್ಟೋಡಿಯನ್‌ಗಳು, ವೀಕ್ಷಕರು, ಜಾಗ್ರತ ದಳದ ಸದಸ್ಯರು ಅವಶ್ಯಕ ಪೂರ್ವ ಸಿದ್ಧತೆ ಕೈಗೊಳ್ಳುವಂತೆ ಸೂಚನೆ ನೀಡಿದ ಅವರು, ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಯಾವುದೇ ರೀತಿಯ ಲೋಪವಾಗದಂತೆ ಪರೀಕ್ಷೆ ನಡೆಸುವಂತೆ ಸೂಚಿಸಿದರು.

ಜಿಲ್ಲೆಯ ಬಾಗಲಕೋಟೆ ನಗರದ ೮, ಜಮಖಂಡಿ ೬ ಹಾಗೂ ಮುಧೋಳ ೩ ಪರೀಕ್ಷಾ ಕೇಂದ್ರಗಳೂ ಸೇರಿದಂತೆ ಒಟ್ಟು ೧೭ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ೯,೧೭೫ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ವೀಕ್ಷಕರನ್ನಾಗಿ ೧೭ ಪರೀಕ್ಷಾ ಕೇಂದ್ರಗಳಿಗೆ ಸಂಬAಧಿಸಿದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ನೇಮಿಸಿದ ಅಧಿಕಾರಿಗಳು ತಮಗೆ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಸಮಯದಲ್ಲಿ ಹಾಜರಾಗಿ ಪರೀಕ್ಷಾ ಕಾರ್ಯ ಮುಗಿಯುವವರೆಗೂ ಕೇಂದ್ರದಲ್ಲಿದ್ದು, ಪರೀಕ್ಷೆ ಬಗ್ಗೆ ಸಂಕ್ಷಿಪ್ತವಾಗಿ ವರದಿ ನೀಡಬೇಕು. ಪ್ರಶ್ನೆ ಪತ್ರಿಕೆ, ಉತ್ತರ ಪತ್ರಿಕೆ ನಿರ್ವಹಣೆ ಅತ್ಯಂತ ವ್ಯವಸ್ಥಿತವಾಗಿ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು. ಉಪ ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಇನ್ನುಳಿದ ಪರೀಕ್ಷಾ ಸಿಬ್ಬಂದಿಗಳು ಸಹ ಮೊಬೈಲ್ ಬಳಸುವುದನ್ನು ನಿಷೇಧಿಸಲಾಗಿದೆ.
ಪ್ರಶ್ನೆ ಪತ್ರಿಕಾ ಪಾಲಕರು ಕಡ್ಡಾಯವಾಗಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಗೈರು ಹಾಜರಾದ ವಿದ್ಯಾರ್ಥಿಗಳ ಸಂಖ್ಯೆ ದಾಖಲಿಸಿಕೊಳ್ಳಬೇಕು. ಯಾವುದೇ ಗೊಂದಲಕ್ಕೊಳಗಾಗದಂತೆ ಕಾರ್ಯನಿರ್ವಹಿಸಿ, ಅತ್ಯಂತ ಜವಾಬ್ದಾರಿಯಿಂದ ಪರೀಕ್ಷಾ ಕಾರ್ಯ ನಿರ್ವಹಿಸುವಂತೆ ಅವರು ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಖಜಾನೆ ಇಲಾಖೆ ಉಪನಿರ್ದೇಶಕ ಕುಂಬಾರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜಶೇಖರ ಪಟ್ಟಣಶೆಟ್ಟಿ, ಪ್ರಶ್ನೆ ಪತ್ರಿಕೆ ವಿತರಣಾ ತಂಡದ ಪ್ರಾಚಾರ್ಯರು ಹಾಗೂ ಉಪನ್ಯಾಸಕರು ಹಾಗೂ ಎಲ್ಲಾ ಪರೀಕ್ಷಾ ಕೇಂದ್ರದ ಉಪ ಅಧೀಕ್ಷಕರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.