ಬಳ್ಳಾರಿ : ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ.ಮಹಾಂತ ಶಿವಯೋಗಿಗಳು ಎಂದು ಮೇಯರ್ ಮುಲ್ಲಂಗಿ ನಂದೀಶ ಹೇಳಿದರು.
ನಗರದ ಸಾಂಸ್ಕ್ರತಿಕ ಸಮುಚ್ಛಯ ಆವರಣದ ಹೊಂಗಿರಣದಲ್ಲಿ ಜಿಲ್ಲಾಡಳಿತ, ಜಿಪಂ, ಬೆಂಗಳೂರು ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದೊಂದಿಗೆ ಗುರುವಾರ ಆಯೋಜಿಸಿದ್ದ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ಆವರಿಸಿದ್ದಾಗ ಶಿಕ್ಷಣ ಪಡೆಯುತ್ತಿದ್ದ ಕಾಶಿಯಿಂದ ಆಗಮಿಸಿ, ನೂರಾರು ಗ್ರಾಮಗಳಲ್ಲಿ ಗಂಜಿ ಕೇಂದ್ರ ಆರಂಭಿಸಿ ದಾಸೋಹ ನಡೆಸಿದರು. ಗೋಶಾಲೆಗಳನ್ನು ಆರಂಭಿಸಿ ಮೇವು ಮತ್ತು ನೀರಿನ ವ್ಯವಸ್ಥೆ ಕೈಗೊಂಡಿದ್ದರು. ಆಗಸ್ಟ್ 1ನ್ನು ರಾಜ್ಯ ಸರ್ಕಾರವು ರಾಜ್ಯಾದ್ಯಂತ ವ್ಯಸನ ಮುಕ್ತ ದಿನವನ್ನಾಗಿ ಆಚರಿಸಲು ಆದೇಶಿಸಿದ್ದು, ಇಂದಿನ ಯುವಪೀಳಿಗೆಯು ಯಾವುದೇ ತರಹದ ದುಶ್ಚಟಗಳಿಗೆ ಬಲಿಯಾಗದೇ ಉತ್ತಮ ಆರೋಗ್ಯಕರ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಎಸ್‌ಜಿಟಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಬಸವರಾಜ ಅಮಾತಿ ಮಾತನಾಡಿ, ಡಾ.ಮಹಾಂತ ಶಿವಯೋಗಿಯವರು ಮನೆ-ಮನೆಗಳಿಗೆ ತೆರಳಿ ಮದ್ಯಪಾನ, ತಂಬಾಕು ಸೇರಿದಂತೆ ಎಲ್ಲಾ ರೀತಿಯ ದುಶ್ಚಟಗಳ ಬಗ್ಗೆ ಅಲ್ಲಿನ ಜನತೆಗೆ ಮನ ಮುಟ್ಟುವಂತೆ ತಿಳುವಳಿಕೆ ನೀಡಿದವರು. ಸ್ವಾಮಿಗಳ ಮಾತುಗಳಿಗೆ ಮನಃ ಕರಗಿ ಪರಿವರ್ತನೆಯಾದ ಜನರು ತಮ್ಮ ಎಲ್ಲ ದುಶ್ಚಟಗಳ ವಸ್ತುಗಳನ್ನು ಸ್ವಾಮೀಜಿಯವರ ಜೋಳಿಗೆಗೆ ಹಾಕಿ, ಇನ್ನುಂದೆ ಅವುಗಳನ್ನು ಬಳಸುವುದಿಲ್ಲ ಎಂದು ಪ್ರಮಾಣ ಮಾಡಿದರು ಎಂದರು.
ಕಾರ್ಯಕ್ರಮಕ್ಕೂ ಮುನ್ನ ವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕಾಲೇಜು ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಯಿತು. ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಅಂಗವಾಗಿ ಮದ್ಯಪಾನ, ಮಾದಕವಸ್ತು, ತಂಬಾಕು ವಸ್ತುಗಳ ವ್ಯಸನ ಮುಕ್ತನಾಗುತ್ತೇನೆ ಎಂದು ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಪ್ರಮುಖರಾದ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋರೋಗ ಶಾಸ್ತಜ್ಞ ಡಾ.ರೋಹನ್ ವನಗುಂದಿ, ಮಾನಸಿಕ ಕಾರ್ಯಕ್ರಮಾಧಿಕಾರಿ ಡಾ.ವೀರೇಂದ್ರ ಕುಮಾರ, ಸಿಬ್ಬಂದಿ ಮಲ್ಲೇಶಪ್ಪ, ಹನುಮೇಶ, ತಿಪ್ಪೇಸ್ವಾಮಿ ಇದ್ದರು.