ಶಿವಮೊಗ್ಗ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಜ.18ರಂದು ರಾಜ್ಯಕ್ಕೆ ಆಗಮಿಸಲಿದ್ದು, ಅವರೊಂದಿಗೆ ಚರ್ಚೆ ನಡೆಸಿ ಶೀಘ್ರವೇ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.ಶಿಕಾರಿಪುರದ ತಮ್ಮ ನಿವಾಸದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರಣಾಂತರಗಳಿಂದ ಸಂಪುಟ ವಿಸ್ತರಣೆಯನ್ನು ಮುಂದೂಡಲಾಗುತ್ತಿದೆ ಎಂದರು.ಮಾ.5ರಂದು ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಮಾಡಲಿದ್ದು ಅದಕ್ಕೆ ಬಜೆಟ್ ಪೂರ್ವ ಸಿದ್ಧತೆಗಳು ನಡೆಯುತ್ತಿವೆ. ರೈತ ಪರ ಬಜೆಟ್ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡ, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದರು.ಮಕರ ಸಂಕ್ರಾತಿ ನಿಮಿತ್ತ ನಾಡಿನ ಜನತೆಗೆ ಸುಖ, ಸಮೃದ್ಧಿ ತರಲಿ ಎಂದು ಶುಭ ಹಾರೈಸಿದ ಅವರು, ದಾವೋಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆ ಸಮಾವೇಶದಲ್ಲಿ ಭಾಗವಹಿಸುವುದಾಗಿ ಸ್ಪಷ್ಟಪಡಿಸಿದರು.ಇದೇ ವೇಳೆ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಾತ್ರಾ ಸಮಾವೇಶದಲ್ಲಿ ವಚನಾನಂದಶ್ರೀಗಳ ಹೇಳಿಕೆಯಿಂದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಪ್ರತಿಕ್ರಿಯೆಗೆ ಸಿಎಂ ನಿರಾಕರಿಸಿದರು.